ಪಾಟ್ನಾ: ರಸ್ತೆ ಅಪಘಾತದಲ್ಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದಿದ್ದು, ವಾಹನಗಳಿಗೆ ಬೆಂಕಿ ಹಚ್ಚಿ ಉದ್ರಿಕ್ತರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.
ಪಾಟ್ನಾದ ಝೀರೋ ಮೈಲ್ ಬಳಿ ಇಂದು ಬೆಳಿಗ್ಗೆ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತದ ಭೀಕರತೆಗೆ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕುಟುಂಬದವರು ರಸ್ತೆ ತಡೆ ನಡೆಸಿ ರಸ್ತೆಯಲ್ಲಿಯೇ ವ್ಯಕ್ತಿಯ ಶವವಿಟ್ಟು ಪ್ರತಿಭಟನೆ ನಡೆಸಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಉದ್ರಿಕ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.
ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಉದ್ರಿಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ಸ್ಥಳದಲ್ಲಿ ನಿಲ್ಲಿಸಲಾಗಿದ್ದ ಮೂರು ಪೊಲೀಸ್ ವಾಹನಗಳಿಗೆ ಉದ್ರಿಕ್ತರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೋಡ ನೋಡುತ್ತಿದ್ದಂತೆ ಪಾಟ್ನಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.
ಪೊಲೀಸರ ಮೇಲೆ ಹಾಗೂ ಸಿಕ್ಕ ಸಿಕ್ಕ ವಾಹನಗಳ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಎಚ್ಚೆತ್ತ ಪೊಲೀಸರು ಪ್ರತಿಭಟನಾಕಾರರನ್ನು ಹಾಗೂ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಶವವನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪಾಟ್ನಾ ನಗರದ ಎಸ್‌ಡಿಎಂ ಸತ್ಯಂ ಸಹಾಯ್, ರಸ್ತೆ ಅಪಘಾತದ ಬಳಿಕ ಪರಿಶ್ಥಿತಿ ಉದ್ವಿಗ್ನಗೊಂಡಿತ್ತು. ಈ ವೇಳೆ ಹಿಂಸಾಚಾರ ನಡೆದಿದೆ. ಹಿಂಸಾಚಾರದಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಗುರುತಿಸಲಾಗುತ್ತಿದೆ. ಶವವನ್ನು ಈಗ ರಸ್ತೆಯಿಂದ ತೆಗೆಯಲಾಗಿದ್ದು, ಸಂಚಾರವನ್ನು ಪುನಃಸ್ಥಾಪಿಸಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ.

