ಉಡುಪಿ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್ ಡಿಸೋಜ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಉತ್ತರ ಪ್ರದೇಶ ಮೂಲದ ರಾಜು ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಉತ್ತರ ಪ್ರದೇಶ ಮೂಲದ ಶೂಟರ್ ರಾಜು ಬಲಗಾಲಿಗೆ ಗುಂಡೇಟು ತಗುಲಿದೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಒತ್ತಿನಣೆ ಪ್ರದೇಶದಲ್ಲಿ ಘಟನೆ ನಡೆದಿದೆ. ಡೇವಿಡ್ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳ ಬಗ್ಗೆ ಮಾಹಿತಿ ಪಡೆದ ಪೊಲೀಸರು ಬಂಧನಕ್ಕೆ ತೆರಳಿದ್ದಾರೆ.
ಬೈಂದೂರು ಒತ್ತಿನಣೆಯಲ್ಲಿ ಆರೋಪಿಗಳು ಇರುವ ಬಗ್ಗೆ ಮಾಹಿತಿ ಕಲೆ ಹಾಕಿ ಬಂಧಿಸಲು ಸ್ಥಳಕ್ಕೆ ತೆರಳಿದ ಪೊಲೀಸರ ಮೇಲೆಯೇ ಆರೋಪಿಗಳು ಹಲ್ಲೆ ಮಾಡಿದ್ದಾರೆ. ಪೊಲೀಸರ ಮೇಲೆ ದಾಳಿ ನಡೆಸಿದ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದು, ಎಸ್ಐ ತೇಜಸ್ವಿ ಮತ್ತು ಪ್ರಸನ್ನ ನೇತೃತ್ವದ ತಂಡ ಫೈರಿಂಗ್ ಮಾಡಿದೆ. ಆತ್ಮ ರಕ್ಷಣೆಗಾಗಿ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಫೈರಿಂಗ್ ವೇಳೆ ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಘಟನೆಯಲ್ಲಿ ಎಸ್ಐ ತೇಜಸ್ವಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಗಾಯಾಳು ಆರೋಪಿ ರಾಜುನನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಾರಿಯಾದ ಉಳಿದ ಇಬ್ಬರು ಆರೋಪಿಗಳಿಗೆ ಹುಡುಕಾಟ ನಡೆಸಲಾಗಿದೆ. ಬೈಂದೂರು ಪೊಲೀಸ್ ಠಾಣೆ ಪೋಲೀಸರಿಂದ ತನಿಖೆ ಮುಂದುವರೆದಿದೆ.

