ರಾಮನಗರ: ಫ್ಲೈವುಡ್ ಗೋದಾಮಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಗೋಡೌನ್ನಲ್ಲಿದ್ದ ವಸ್ತುಗಳು, ಪೀಠೋಪಕರಣಗಳು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮನಗರದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಈ ಗೋಡೌನ್ ಶೋಯೆಬ್ ಎಂಬುವವರಿಗೆ ಸೇರಿದ್ದಾಗಿದೆ. ಕಳೆದ ಹಲವು ವರ್ಷಗಳಿಂದ ಈ ಗೋಡೌನ್ಗೆ ಬೀಗ ಹಾಕಲಾಗಿತ್ತು. ಇಂದು ಬೆಳಿಗ್ಗೆ ಗೋಡೌನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಗೋಡೌನ್ನಲ್ಲಿದ್ದ ಹಳೆಯ ಯಂತ್ರೋಪಕರಣಗಳು, ಫ್ಲೈವುಡ್ ಶೀಟ್ಗಳು, ಪೀಠೋಪಕರಣ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಗೋಡೌನ್ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

