HomeKarnatakaಗ್ರಾಮೀಣ ಕುಟುಂಬಗಳಿಗೆ ಉದ್ಯೋಗ: ವಿಬಿ-ಜಿ ರಾಮ್-ಜಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ

ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ: ವಿಬಿ-ಜಿ ರಾಮ್-ಜಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ

ಹಾಸನ: ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ವಿಬಿ-ಜಿ ರಾಮ್-ಜಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸಂಸದರಾದ ಶ್ರೇಯಸ್ ಎಂ ಪಟೇಲ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಇಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿಡಿಯೋ ಸಂವಾದದ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಗ್ರಾಮೀಣ ಜನರ ಜೀವನೋಪಾಯಕ್ಕೆ ನೇರವಾಗಿ ಸಂಬಂಧಿಸಿದ ಮಹತ್ವದ ಯೋಜನೆಯಾಗಿರುವುದರಿಂದ, ಯೋಜನೆಯ ಅನುಷ್ಠಾನದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ವಿಳಂಬಕ್ಕೆ ಅವಕಾಶ ನೀಡಬಾರದು. ಎಲ್ಲಾ ಹಂತದ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ನಿಗದಿತ ಗುರಿಯನ್ನು ಸಾಧಿಸುವ ಮೂಲಕ ಹಾಸನ ಜಿಲ್ಲೆಯನ್ನು ಉತ್ತಮ ಪ್ರಗತಿಯತ್ತ ಕೊಂಡೊಯ್ಯಬೇಕು ಎಂದು ಸೂಚಿಸಿದರು.

ಅರ್ಹ ಕುಟುಂಬಗಳಿಗೆ ಯೋಜನೆಯ ಕುರಿತು ಸಮರ್ಪಕ ಮಾಹಿತಿ ನೀಡಿ, ಅಗತ್ಯವಿರುವವರಿಗೆ ಉದ್ಯೋಗ ದೊರೆಯುವಂತೆ ಕ್ರಮವಹಿಸಬೇಕು. ಗ್ರಾಮೀಣ ಪ್ರದೇಶದ ಕೂಲಿಕಾರರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮದಲ್ಲಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಅಗತ್ಯವಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಜಾಬ್ ಕಾರ್ಡ್ ಹೊಂದಿರುವ ಕುಟುಂಬಗಳ ಬೇಡಿಕೆಗೆ ಅನುಗುಣವಾಗಿ ಉದ್ಯೋಗ ಒದಗಿಸುವುದು, ಹೊಸದಾಗಿ ಅರ್ಹರಾಗಿರುವ ಕುಟುಂಬಗಳಿಗೆ ಜಾಬ್ ಕಾರ್ಡ್ ಒದಗಿಸುವುದು ಹಾಗೂ ಯೋಜನೆಯ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಯಿತು.

ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳು ಗ್ರಾಮೀಣ ಪ್ರದೇಶದ ದೀರ್ಘಕಾಲೀನ ಅಭಿವೃದ್ಧಿಗೆ ಪೂರಕವಾಗುವಂತಿರಬೇಕು ಜಲ ಸಂರಕ್ಷಣೆ, ಕೆರೆ-ಕಟ್ಟೆಗಳ ಅಭಿವೃದ್ಧಿ, ನಾಲಾ ಅಭಿವೃದ್ಧಿ, ಕೃಷಿ ಸಂಬಂಧಿತ ಕಾಮಗಾರಿಗಳು, ರಸ್ತೆ ಹಾಗೂ ಚರಂಡಿ ಕಾಮಗಾರಿಗಳು, ತೋಟಗಾರಿಕೆ, ಗಿಡ ನೆಡುವಿಕೆ, ಜಾನುವಾರುಗಳ ಶೆಡ್‌ ಗಳು ಸೇರಿದಂತೆ ಗ್ರಾಮೀಣ ಆರ್ಥಿಕತೆ ಮತ್ತು ಮೂಲಸೌಕರ್ಯವನ್ನು ಬಲಪಡಿಸುವ ಮೂಲಕ ಶಾಶ್ವತ ಆಸ್ತಿಗಳ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಸೂಚಿಸಿದರು.

ಕೇವಲ ಉದ್ಯೋಗ ಒದಗಿಸುವುದಷ್ಟೇ ಅಲ್ಲದೆ, ಯೋಜನೆಯ ಮೂಲಕ ಗ್ರಾಮಗಳಲ್ಲಿ ಶಾಶ್ವತ ಆಸ್ತಿಗಳನ್ನು ನಿರ್ಮಿಸಿ ಮುಂದಿನ ಹಲವು ವರ್ಷಗಳವರೆಗೆ ಗ್ರಾಮೀಣ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಕಾಮಗಾರಿಗಳನ್ನು ರೂಪಿಸಬೇಕು ಎಂದರು.

 ಯೋಜನೆಯ ಅನುಷ್ಠಾನದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಗ್ರಾಮ ಪಂಚಾಯಿತಿಗಳ ಪ್ರಗತಿಯನ್ನು ನಿಯಮಿತವಾಗಿ ಪರಿಶೀಲಿಸಿ, ಕಡಿಮೆ ಪ್ರಗತಿ ಹೊಂದಿರುವ ಗ್ರಾಮ ಪಂಚಾಯಿತಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಬೇಕು. ನಿಗದಿತ ಗುರಿಗಳನ್ನು ಸಾಧಿಸುವ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದಿಂದ ಗ್ರಾಮ ಪಂಚಾಯಿತಿ ಮಟ್ಟದವರೆಗೆ ನಿರಂತರ ಮೇಲ್ವಿಚಾರಣೆ ನಡೆಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಯೋಜನೆಯ ಕುರಿತು ಜನಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಕುಟುಂಬಗಳು ಯೋಜನೆಯ ಪ್ರಯೋಜನ ಪಡೆಯುವಂತೆ ಕ್ರಮವಹಿಸಬೇಕು. ಕಾಮಗಾರಿಗಳ ಗುಣಮಟ್ಟ, ಪಾರದರ್ಶಕತೆ ಹಾಗೂ ನಿಯಮಾನುಸಾರ ಅನುಷ್ಠಾನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.

 ಮುಂದಿನ ದಿನಗಳಲ್ಲಿ ವಿಬಿ-ಜಿ ರಾಮ್-ಜಿ ಯೋಜನೆಯ ಪ್ರಗತಿಯನ್ನು ಮತ್ತಷ್ಟು ವೇಗಗೊಳಿಸಲು ತಾಲ್ಲೂಕುವಾರು ಹಾಗೂ ಗ್ರಾಮ ಪಂಚಾಯಿತಿವಾರು ಕಾರ್ಯಯೋಜನೆ ರೂಪಿಸಿ ಅನುಷ್ಠಾನಗೊಳಿಸಿ ಪ್ರಗತಿ ಕುಂಠಿತವಾಗಿರುವ ಗ್ರಾಮ ಪಂಚಾಯಿತಿಗಳನ್ನು ಗುರುತಿಸಿ, ಅವುಗಳಲ್ಲಿನ ಸಮಸ್ಯೆಗಳನ್ನು ಸ್ಥಳೀಯವಾಗಿ ಪರಿಹರಿಸುವ ಮೂಲಕ ಯೋಜನೆಯ ಅನುಷ್ಠಾನಕ್ಕೆ ವೇಗ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

 ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಂ ಶುಕ್ಲಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್ ಎಂ.ಸಿ, ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular