ಬೆಂಗಳೂರು : IAS ಅಧಿಕಾರಿ ಜ್ಞಾನೇಂದ್ರ ಅವರಿಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ED ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿರುವ ED ಅಧಿಕಾರಿಗಳು, ಜ್ಞಾನೇಂದ್ರ ಅವರ ನಿವಾಸಕ್ಕೆ ನೋಟಿಸ್ ತಲುಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಹಾಜರುಪಡಿಸುವಂತೆ ಸೂಚಿಸಲಾಗಿದ್ದು, ವಿಚಾರಣೆಯಲ್ಲಿ ಅಧಿಕಾರಿಗಳು ಹಲವು ವಿಚಾರಗಳ ಕುರಿತು ಮಾಹಿತಿ ಪಡೆಯುವ ಸಾಧ್ಯತೆಯಿದೆ.
ನಾಳೆ ಬೆಳಗ್ಗೆ 11 ಗಂಟೆಗೆ ಜ್ಞಾನೇಂದ್ರ ಅವರು ED ಕಚೇರಿಗೆ ಹಾಜರಾಗಲಿದ್ದಾರೆ. ವಿಚಾರಣೆ ವೇಳೆ ಯಾವೆಲ್ಲ ದಾಖಲೆಗಳನ್ನು ಸಲ್ಲಿಸುತ್ತಾರೆ ಹಾಗೂ ಅಧಿಕಾರಿಗಳು ಯಾವ ವಿಚಾರಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ಮತ್ತಷ್ಟು ತೀವ್ರಗೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಭಾನುವಾರ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರ ಬೆಂಗಳೂರಿನ ಜಯಮಹಲ್ ರಸ್ತೆಯಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿ ಶೋಧ ನಡೆಸಿದೆ.
ಜ್ಞಾನೇಂದ್ರ ಕುಮಾರ್ ಅವರು ಈ ಹಿಂದೆ KPSCಯಲ್ಲಿ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆ ಸೇರಿದಂತೆ KAS ಪರೀಕ್ಷೆಯ ಜವಾಬ್ದಾರಿಯನ್ನೂ ಅವರು ನಿರ್ವಹಿಸಿದ್ದರು. ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮದ ಆರೋಪಗಳ ಹಿನ್ನೆಲೆಯಲ್ಲಿ ED ತನಿಖೆ ನಡೆಸುತ್ತಿದೆ.
ಇದಕ್ಕೂ ಮುನ್ನ ಆಗಸ್ಟ್ 18ರಂದು KPSC ಕಚೇರಿ, ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಶಾಂತ ಹೊಸಮನಿ ಸೇರಿದಂತೆ ಹಲವರ ನಿವಾಸ ಹಾಗೂ ಕಚೇರಿಗಳ ಮೇಲೆ ED ದಾಳಿ ನಡೆಸಿತ್ತು. ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯ ಆಯಾಮವನ್ನು ED ಪರಿಶೀಲಿಸುತ್ತಿದೆ.
ಜ್ಞಾನೇಂದ್ರ ಕುಮಾರ್ ನಾಪತ್ತೆ ವಿಚಾರಕ್ಕೂ ಟ್ವಿಸ್ಟ್
ಇತ್ತೀಚೆಗೆ ಜ್ಞಾನೇಂದ್ರ ಕುಮಾರ್ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂಬ ವರದಿಗಳು ಹರಿದಾಡಿದ್ದವು. ಆದರೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಅವರು ನಾಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದರು. ತಂದೆಯ ಆರೋಗ್ಯ ಸಮಸ್ಯೆಯ ಹಿನ್ನೆಲೆಯಲ್ಲಿ ಅವರು ಉತ್ತರ ಪ್ರದೇಶದಲ್ಲಿರುವ ತಮ್ಮ ಊರಿಗೆ ತೆರಳಿದ್ದಾರೆ ಹಾಗೂ ತಾವು ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡಿರುವುದಾಗಿ ಸಚಿವರು ತಿಳಿಸಿದ್ದರು.

