ಶಿವಮೊಗ್ಗ: ಯುವಕನೊಬ್ಬ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ನಡೆದಿದೆ.
ಅಪ್ರಾಪ್ತೆಗೆ ಸುಮುಖ್ ಎಂಬ ಯುವಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ತನ್ನ ಬಳಿ ವಿದ್ಯಾರ್ಥಿನಿಯ ಫೋಟೋ ಹಾಗೂ ವಿಡಿಯೋಗಳಿವೆ ಎಂದು ಹೇಳಿ, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎನ್ನಲಾಗಿದೆ.
ಸುಮುಖ್ ಎಂಬ ಯುವಕ ವಿದ್ಯಾರ್ಥಿನಿಯನ್ನು ಕಾಲೇಜಿಗೆ ಹೋಗುವಾಗ ಹಾಗೂ ವಾಪಸ್ ಬರುವಾಗ ಹಿಂಬಾಲಿಸುತ್ತಿದ್ದ ಎನ್ನಲಾಗಿದೆ. ಈ ಕುರಿತು ವಿದ್ಯಾರ್ಥಿನಿ ಹಾಗೂ ಆಕೆಯ ಕುಟುಂಬದವರು ಹಲವು ಬಾರಿ ಬುದ್ಧಿವಾದ ಹೇಳಿದ್ದರೂ, ಯುವಕ ತನ್ನ ವರ್ತನೆ ಬದಲಿಸದೆ ಕಿರುಕುಳ ಮುಂದುವರಿಸಿದ್ದಾನೆ ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿನಿಗೆ ಫೋನ್ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕವೂ ಸಂಪರ್ಕಿಸಲು ಪ್ರಯತ್ನಿಸುತ್ತಿದ್ದ ಎನ್ನಲಾಗಿದ್ದು, ಇದರಿಂದ ಆಕೆ ಮಾನಸಿಕವಾಗಿ ತೀವ್ರ ಒತ್ತಡಕ್ಕೆ ಒಳಗಾಗಿದ್ದಳು ಎನ್ನಲಾಗಿದೆ.ಈ ಕಿರುಕುಳದಿಂದ ಮನನೊಂದ ಅಪ್ರಾಪ್ತೆ ಕಳೆನಾಶಕ ಸೇವಿಸಿದ್ದಾಳೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ.
ಘಟನೆ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತ ಸುಮುಖ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

