ಪತ್ನಿಯ ಅನುಮತಿಯಿಲ್ಲದೆ ಆಕೆಯ ಖಾಸಗಿ ವಿಡಿಯೋವನ್ನು ರಹಸ್ಯವಾಗಿ ಚಿತ್ರೀಕರಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಲ್ಲದೆ ಅಶ್ಲೀಲ ತಾಣಕ್ಕೆ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಬೆಳಕಿಗೆ ಬಂದಿದೆ. ಶಿವಂ ಸಾಹು ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ವರದಕ್ಷಿಣೆ ಕಿರುಕುಳ, ಜೀವ ಬೆದರಿಕೆ ಹಾಗೂ ಸೈಬರ್ ಅಪರಾಧ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ದೂರಿನ ವಿವರಗಳ ಪ್ರಕಾರ, ಸಂತ್ರಸ್ತೆ ಮತ್ತು ಶಿವಂ ಸಾಹು ನಡುವೆ 2025 ರ ಮೇ 10 ರಂದು ವಿವಾಹ ನಡೆದಿತ್ತು. ಮದುವೆ ಸಂದರ್ಭದಲ್ಲಿ 3 ಲಕ್ಷ ರೂಪಾಯಿ ವರದಕ್ಷಿಣೆಗೆ ಬೇಡಿಕೆ ಇಡಲಾಗಿದ್ದು, ಆ ಪೈಕಿ ಯುವತಿಯ ಕುಟುಂಬದವರು 2025 ರಲ್ಲಿ 2 ಲಕ್ಷ ರೂಪಾಯಿ ನೀಡಿದ್ದರು. ಆದಾಗ್ಯೂ ಮದುವೆಯಾದ ಕೆಲವೇ ದಿನಗಳಲ್ಲಿ ಹೆಚ್ಚುವರಿ ಹಣಕ್ಕಾಗಿ ಮಹಿಳೆಗೆ ನಿರಂತರವಾಗಿ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಲಾಗುತ್ತಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
2025 ರ ಡಿಸೆಂಬರ್ ತಿಂಗಳಿನಲ್ಲಿ ಆರೋಪಿ ಶಿವಂ ಸಾಹು ತನ್ನ ಪತ್ನಿಯ ಖಾಸಗಿ ಕ್ಷಣಗಳನ್ನು ಆಕೆಯ ಗಮನಕ್ಕೆ ಬಾರದಂತೆ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ. ಬಳಿಕ 13 ನಿಮಿಷ 14 ಸೆಕೆಂಡುಗಳ ಆ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಂಬಂಧಿಕರ ಮೊಬೈಲ್‌ಗಳಿಗೆ ಕಳುಹಿಸಿದ್ದಾನೆ. ಇದಕ್ಕೆ ಮಹಿಳೆ ತೀವ್ರ ವಿರೋಧ ವ್ಯಕ್ತಪಡಿಸಿದಾಗ, ಮತ್ತಷ್ಟು ವಿಡಿಯೋಗಳನ್ನು ಬಹಿರಂಗಪಡಿಸಿ ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದ. ನಂತರ ಆ ವಿಡಿಯೋವನ್ನು ಅಶ್ಲೀಲ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಿ ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆ ಹೊರಬರುತ್ತಿದ್ದಂತೆ ಆರೋಪಿ ಮುಂಬೈಗೆ ಪರಾರಿಯಾಗಿ ತಲೆಮರೆಸಿಕೊಂಡಿದ್ದ. ನಂತರ 2026 ರ ಫೆಬ್ರವರಿ 12 ರಂದು ಮೌಗಂಜ್ ಪ್ರದೇಶದಲ್ಲಿರುವ ತನ್ನ ಅತ್ತೆಯ ಮನೆಗೆ ಮಾರಕಾಸ್ತ್ರದೊಂದಿಗೆ ಆಗಮಿಸಿ ಕುಟುಂಬದ ಸದಸ್ಯರಿಗೆ ಜೀವ ಬೆದರಿಕೆ ಹಾಕಲು ಯತ್ನಿಸಿದ್ದಾನೆ. ಈ ಕುರಿತು ಮಾಹಿತಿ ಪಡೆದ ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು, ಸ್ಥಳವನ್ನು ಸುತ್ತುವರಿದು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ರೇವಾ ಪೊಲೀಸರು ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ವಿವಿಧ ಗಂಭೀರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯಿಂದ ವಶಪಡಿಸಿಕೊಳ್ಳಲಾದ ಮೊಬೈಲ್ ಫೋನ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವಿಡಿಯೋ ಅಪ್‌ಲೋಡ್ ಮಾಡಲಾದ ಡಿಜಿಟಲ್ ಪುರಾವೆಗಳನ್ನು ಕಲೆಹಾಕಲಾಗುತ್ತಿದೆ.
ಇತ್ತೀಚಿನ ದಿನಗಳಲ್ಲಿ ಖಾಸಗಿ ವಿಡಿಯೋಗಳನ್ನು ದುರುದ್ದೇಶಪೂರ್ವಕವಾಗಿ ಆನ್‌ಲೈನ್‌ನಲ್ಲಿ ಹಂಚಿಕೊಳ್ಳುವ ಕೃತ್ಯಗಳು ಹೆಚ್ಚುತ್ತಿದ್ದು, ಸೈಬರ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಇಂತಹ ವಿಡಿಯೋಗಳನ್ನು ಡೌನ್‌ಲೋಡ್ ಮಾಡುವುದು, ಫಾರ್ವರ್ಡ್ ಮಾಡುವುದು ಅಥವಾ ಹಂಚಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಇಂತಹ ಘಟನೆಗಳು ಕಂಡುಬಂದಲ್ಲಿ ಕೂಡಲೇ ಅಧಿಕೃತ ಸೈಬರ್ ಅಪರಾಧ ವಿಭಾಗಕ್ಕೆ ದೂರು ನೀಡುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

