ಕಾರ್ಡಿಫ್: ಇಂಗ್ಲೆಂಡ್ ತಂಡದ ಅನುಭವಿ ವಿಕೆಟ್‌ಕೀಪರ್ ಬ್ಯಾಟರ್ ಜೋಸ್ ಬಟ್ಲರ್ ಟಿ20 ಕ್ರಿಕೆಟ್ ನೂತನ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಚುಟುಕು ಕ್ರಿಕೆಟ್ ಮಾದರಿಯಲ್ಲಿ 15,000 ರನ್ ಗಡಿ ದಾಟಿದ ಪ್ರಪಂಚದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಶ್ರೀಲಂಕಾ ವಿರುದ್ಧ ನಡೆದ ಎರಡನೇ ಟಿ20 ಪಂದ್ಯದ ವೇಳೆ ಬಟ್ಲರ್ ಈ ಅಪರೂಪದ ಸಾಧನೆ ಮಾಡಿದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಕಲೆಹಾಕಿದ್ದ ವೆಸ್ಟ್ ಇಂಡೀಸ್‌ನ ದೈತ್ಯ ಆಟಗಾರ ಕೀರನ್ ಪೊಲಾರ್ಡ್ ಅವರ ದಾಖಲೆಯನ್ನು ಅವರು ಮುರಿದರು. ಪೊಲಾರ್ಡ್ 754 ಪಂದ್ಯಗಳಿಂದ 14,999 ರನ್ ಗಳಿಸಿದ್ದರೆ, ಬಟ್ಲರ್ 528 ಪಂದ್ಯಗಳಲ್ಲೇ ಈ ಸಾಧನೆ ಮಾಡಿದ್ದಾರೆ. ಬಟ್ಲರ್ ಖಾತೆಯಲ್ಲಿ 9 ಶತಕ ಹಾಗೂ 107 ಅರ್ಧಶತಕಗಳಿದ್ದು, 35.46 ಸರಾಸರಿ ಮತ್ತು 147.46 ಸ್ಟ್ರೈಕ್ ರೇಟ್ ಹೊಂದಿದ್ದಾರೆ.
ಸೋಫಿಯಾ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಶ್ರೀಲಂಕಾ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 145 ರನ್ ಕಲೆಹಾಕಿದರೆ, ಇಂಗ್ಲೆಂಡ್ 12.1 ಓವರ್‌ಗಳಲ್ಲೇ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಈ ಗೆಲುವಿನೊಂದಿಗೆ ಇಂಗ್ಲೆಂಡ್ ಮೂರು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿ ಸರಣಿ ಕೈವಶ ಮಾಡಿಕೊಂಡಿದೆ. ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಡಾವ್ಸನ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

