ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎರಡು ದಿನಗಳ ಕರ್ನಾಟಕ ಪ್ರವಾಸದ ಭಾಗವಾಗಿ ಹುಬ್ಬಳ್ಳಿಗೆ ಆಗಮಿಸಿದ್ದು, ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ವಾಗತಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ಸ್ವಾಗತಿಸಿದ ಪ್ರಹ್ಲಾದ್ ಜೋಶಿ, ಕೆಎಲ್ಇ ಸೊಸೈಟಿಯ ಜಗದ್ಗುರು ಗಂಗಾಧರ ಮಹಾಸ್ವಾಮಿಗಳ ಮೂರುಸಾವಿರಮಠ ವೈದ್ಯಕೀಯ ಕಾಲೇಜು (JGMMMC), ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ ಉದ್ಘಾಟನೆಗಾಗಿ ಅವರು ಆಗಮಿಸಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಹ್ಲಾದ್ ಜೋಶಿ, ಹೊಸ ವೈದ್ಯಕೀಯ ಸಂಸ್ಥೆಯು ಉತ್ತರ ಕರ್ನಾಟಕದಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಹೇಳಿದ್ದಾರೆ.
ಅಮಿತ್ ಶಾ ಅವರು ಶನಿವಾರ ಹುಬ್ಬಳ್ಳಿಯ ಗಬ್ಬೂರಿನಲ್ಲಿ ನಿರ್ಮಿಸಲಾಗಿರುವ ಕೆಎಲ್ಇ ಜೆಜಿಎಂಎಂ ವೈದ್ಯಕೀಯ ಕಾಲೇಜಿನ ನೂತನ ಶೈಕ್ಷಣಿಕ ಕಟ್ಟಡ ಹಾಗೂ 1,200 ಹಾಸಿಗೆಗಳ ಕೆಎಲ್ಇ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.
ಸುಮಾರು 50 ಎಕರೆ ಪ್ರದೇಶದಲ್ಲಿ, ಅಂದಾಜು ₹700 ಕೋಟಿ ವೆಚ್ಚದಲ್ಲಿ ಈ ಸಮಗ್ರ ವೈದ್ಯಕೀಯ ಕ್ಯಾಂಪಸ್ ನಿರ್ಮಿಸಲಾಗಿದೆ. 30 ಲಕ್ಷ ಚದರ ಅಡಿಗೂ ಹೆಚ್ಚು ನಿರ್ಮಿತ ಪ್ರದೇಶವನ್ನು ಹೊಂದಿರುವ ಈ ಕ್ಯಾಂಪಸ್ನಲ್ಲಿ ವೈದ್ಯಕೀಯ ಶಿಕ್ಷಣ, ಸುಧಾರಿತ ಆರೋಗ್ಯ ಸೇವೆ, ರೋಗನಿರ್ಣಯ, ಚಿಕಿತ್ಸೆ ಹಾಗೂ ವೈದ್ಯಕೀಯ ಸಂಶೋಧನೆಗೆ ಹೆಚ್ಚಿನ ಒತ್ತು ನೀಡಲಾಗಿದೆ.
ಕೆಎಲ್ಇ ವಿಶ್ವವಿದ್ಯಾಲಯದ ಕುಲಪತಿ ಪ್ರಭಾಕರ್ ಕೋರೆ ಅವರ ಪ್ರಕಾರ, ನೂತನ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ವ್ಯವಸ್ಥೆಗಳು ಸೇರಿದಂತೆ ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನ ಮತ್ತು ಉಪಕರಣಗಳನ್ನು ಅಳವಡಿಸಲಾಗಿದೆ.
ಮುಂದಿನ ದಿನಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಪ್ರತ್ಯೇಕ ವ್ಯವಸ್ಥೆ ಸೇರಿದಂತೆ ಕ್ಯಾಂಪಸ್ ಅನ್ನು ಮತ್ತಷ್ಟು ವಿಸ್ತರಿಸುವ ಯೋಜನೆಯೂ ಇದೆ. ಈ ಯೋಜನೆಯಿಂದ ಉತ್ತರ ಕರ್ನಾಟಕದಲ್ಲಿ ಆರೋಗ್ಯ ಸೇವೆ ಹಾಗೂ ಉನ್ನತ ವೈದ್ಯಕೀಯ ಶಿಕ್ಷಣದ ಮೂಲಸೌಕರ್ಯ ಮತ್ತಷ್ಟು ವಿಸ್ತಾರಗೊಳ್ಳುವ ನಿರೀಕ್ಷೆಯಿದೆ.
ಜಗಳದ ಬಳಿಕ ಪತ್ನಿಯ ಕತ್ತು ಹಿಸುಕಿ ಕೊಲೆ; ಪತಿಯ ಬಂಧನ
ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಗರದ ಮೈಕೋ ಲೇಔಟ್ ಸಮೀಪದ ಬಿಳೇಕಳ್ಳಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಪತಿಯನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.
ಕೊಲೆಯಾದ ಮಹಿಳೆಯನ್ನು ಗುಂಜನ್ ಮಡೆಶಿಯಾ (38) ಎಂದು ಗುರುತಿಸಲಾಗಿದೆ. ಆರೋಪಿ ರಂಜಿತ್ ಕುಮಾರ್ ಗುಪ್ತ ಹಾಗೂ ಗುಂಜನ್ ಮೂಲತಃ ಬಿಹಾರದವರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಬಿಳೇಕಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಫೋನ್ ಕರೆ ಸ್ವೀಕರಿಸದಿರುವುದು ಹಾಗೂ ಸರಿಯಾಗಿ ಪ್ರತಿಕ್ರಿಯಿಸದಿರುವ ವಿಚಾರಕ್ಕೆ ಇಬ್ಬರ ನಡುವೆ ಮನಸ್ತಾಪ ಉಂಟಾಗುತ್ತಿತ್ತು. ಗುರುವಾರ ಬೆಳಗ್ಗೆ ಮಕ್ಕಳು ಶಾಲೆಗೆ ತೆರಳಿದ ಬಳಿಕವೂ ದಂಪತಿ ನಡುವೆ ಮತ್ತೆ ಜಗಳ ಆರಂಭವಾಗಿದೆ.
ಜಗಳ ತೀವ್ರಗೊಂಡಾಗ ರಂಜಿತ್ ಕುಮಾರ್ ತನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿ, ಆಕೆಯ ವೇಲ್ನಿಂದಲೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆ ಮಾಡಿದ ಬಳಿಕ ಮನೆಯಿಂದ ಹೊರಗೆ ಹೋಗಿದ್ದ ಆರೋಪಿ, ಕೆಲ ಸಮಯದ ನಂತರ ವಾಪಸ್ ಬಂದಿದ್ದಾನೆ. ಪತ್ನಿಯ ಸಾವನ್ನು ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ್ದಾನೆ ಎನ್ನಲಾಗಿದೆ. ಮೃತದೇಹದ ಮೇಲೆ ಬಿಸಿ ಎಣ್ಣೆ ಸುರಿದು, ದೇಹವನ್ನು ವಿರೂಪಗೊಳಿಸಲು ಪ್ರಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಯ ಮಾಲೀಕರು ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಪೊಲೀಸರು ರಂಜಿತ್ ಕುಮಾರ್ ಗುಪ್ತನನ್ನು ವಿಚಾರಣೆ ನಡೆಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಿರುವ ಮೈಕೋ ಲೇಔಟ್ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

