HomeKarnatakaಕೆಪಿಎಸ್ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ರಚಿಸಿ ಮಹತ್ವದ...

ಕೆಪಿಎಸ್ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ರಚಿಸಿ ಮಹತ್ವದ ಆದೇಶ ನೀಡಿದ ಹೈಕೋರ್ಟ್

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ) ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಪ್ರಕರಣದ ಸಮಗ್ರ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಿ ಹೈಕೋರ್ಟ್ ಪೀಠ ಆದೇಶಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಹೈಕೋರ್ಟ್ ಪೀಠವು ಈ ಐತಿಹಾಸಿಕ ಆದೇಶವನ್ನು ನೀಡಿ, ಹಗರಣದ ಮೂಲಗಳನ್ನು ಹುಡುಕಿ ಸತ್ಯಾಸತ್ಯತೆ ಹೊರತರುವಂತೆ ಸ್ಪಷ್ಟ ನಿರ್ದೇಶನ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತನಿಖಾ ತಂಡಕ್ಕೆ ಮುಂದಿನ 100 ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು. 30 ದಿನಗಳಿಗೆ ಒಮ್ಮೆ ತನಿಖಾ ವರದಿಯ ವಿವರಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಬೇಕು ಎಂದು ಒಟ್ಟು 17 ನಿರ್ದೇಶಗಳನ್ನು ನೀಡಿ ಆದೇಶಿಸಿದೆ.

ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಐಪಿಎಸ್ ಅಧಿಕಾರಿಗಳಾದ ದಿವ್ಯಾ ಗೋಪಿನಾಥ್, ಅನೂಪ್ ಶೆಟ್ಟಿ, ಕುಶಾಲ್ ಚೌಕ್ಸೆ, ಶ್ರಮ್ಮಾ ಮಿಶ್ರಾ ಅವರಿರುವ ತಂಡ ರಚನೆ ಮಾಡಬೇಕು. ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ) ನಡೆಸುತ್ತಿರುವ ತನಿಖೆಗೆ ಈ ತಂಡ ಅಗತ್ಯ ಸಹಕಾರ ನೀಡಬೇಕು. ಅಲ್ಲದೇ, ಎಸ್ಐಟಿ ತನಿಖೆಯನ್ನು 100 ದಿನಗಳಲ್ಲಿ ಪೂರ್ಣಗೊಳಿಸಬೇಕು. 30 ದಿನಗಳಿಗೊಮ್ಮೆ ತನಿಖಾ ಪ್ರಗತಿ ವರದಿಯನ್ನು ಸಲ್ಲಿಸಬೇಕು. ಸಿಐಡಿ ಪೊಲೀಸರು ಎಸ್ಐಟಿ ತನಿಖೆಗೆ ಅಗತ್ಯವಿರುವ ಸಂಪೂರ್ಣ ದಾಖಲೆಗಳನ್ನು ನೀಡಬೇಕು. ರಾಜ್ಯ ಸರ್ಕಾರ ಎಸ್ಐಟಿಗೆ ಪೊಲೀಸ್ ಠಾಣೆ ಸ್ಥಾನಮಾನ ನೀಡಬೇಕು. ಈ ಸಂಬಂಧ ಶೀಘ್ರ ಅಧಿಸೂಚನೆ ಹೊರಡಿಸಬೇಕು ಎಂದು ನ್ಯಾಯಪೀಠ ಸೂಚನೆ ನೀಡಿದೆ.

ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಅಕ್ರಮವಾಗಿ ನೇಮಕವಾಗಲು ಸಳ್ಳು ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ನೀಡಿದ ಕೆಪಿಎಸ್ ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿ ಸುಮಾ ಎಸ್. ಸಾಹುಕಾರ್ ವಿರುದ್ಧ ಮತ್ತು ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಅಭ್ಯರ್ಥಿಗಳ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೋರಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಮತ್ತು ಚನ್ನರಾಯಪಟ್ಟಣದ ಪಶುವೈದ್ಯ ಡಾ.ಮಂಜುನಾಥ್ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳ ಸುಧೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ನ್ಯಾಯಪೀಠ ಈ ಆದೇಶ ನೀಡಿದ್ದು, ವಿಚಾರಣೆಯನ್ನು 2027ರ ಜನವರಿ ತಿಂಗಳಿಗೆ ಮುಂದೂಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular