ಮೈಸೂರು: ವಾಯ್ಸ್ ಆಫ್ ಪೀಪಲ್ಸ್ ಸಂಸ್ಥೆ ಸಚಿವ ಕೆ.ಎಂ.ಶಿವಲಿಂಗೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದೆ. ಅಲ್ಲದೇ ಸಚಿವರ ರಾಜೀನಾಮೆಗೆ ಆಗ್ರಹಿಸಿದೆ.
‘ಅಧಿಕಾರಿಗಳಿಗೆ ಗೌರವಯುತವಾಗಿ ಕೊಡುವುದು ನಿಮ್ಮ ಧರ್ಮ’ ಎಂಬ ಹೇಳಿಕೆ ನೀಡಿದ್ದ ಸಚಿವ ಶಿವಲಿಂಗೇಗೌಡರು, ಅಧಿಕಾರಿಗಳಿಗೆ ಹಣ ನೀಡುವಂತೆ ಜನರಿಗೆ ನೇರವಾಗಿ ಸಲಹೆ ನೀಡುತ್ತಿದ್ದಾರೆ ಎಂದು ಮೈಸೂರಿನ ವಾಯ್ಸ್ ಆಫ್ ಪೀಪಲ್ ಸಂಸ್ಥೆ ಮುಖ್ಯಸ್ಥ ವಸಂತ ರಾವ್ ಚೌಹಾಣ್ ಆರೋಪಿಸಿದ್ದು, ಈ ಹಿನ್ನೆಲೆಯಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಇಂತಹ ಹೇಳಿಕೆ ನೀಡಿರುವ ಶಿವಲಿಂಗೇಗೌಡರು ಸಚಿವ ಸ್ಥಾನದಲ್ಲಿರಲು ಅನರ್ಹರು. ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಸಾರ್ವಜನಿಕವಾಗಿ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ವಿಚಾರವಾಗಿ ರಾಜ್ಯಪಾಲರಿಗೂ ದೂರು ಸಲ್ಲಿಸುವುದಾಗಿ ವಸಂತ ರಾವ್ ಚೌಹಾಣ್ ತಿಳಿಸಿದ್ದಾರೆ. ಸಚಿವರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನ ನಡೆಸುವುದಾಗಿಯೂ ಹೇಳಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ತಹಸಿಲ್ದಾರ್ ಕಚೇರಿ ಆವರಣದಲ್ಲಿ ನಡೆದ ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸಚಿವ ಶಿವಲಿಂಗೇಗೌಡರು, ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡುವುದು ನಿಮ್ಮ ಧರ್ಮ. ಆದರೆ ಬಲವಂತವಾಗಿ ಹಣ ಕಿತ್ತುಕೊಳ್ಳುವುದು ಸರಿಯಲ್ಲ ಎಂದು ಹೇಳಿದ್ದರು. ಈ ಹೇಳಿಕೆಗೆ ಸಭೆಯಲ್ಲಿದ್ದ ಕೆಲವರು ಆಕ್ಷೇಪ ವ್ಯಕ್ತಪಡಿಸಿ, ಅಧಿಕಾರಿಗಳಿಗೆ ಸಂಬಳ ನೀಡುವುದಿಲ್ಲವೇ, ಹಣ ಏಕೆ ಕೊಡಬೇಕು ಎಂದು ಪ್ರಶ್ನಿಸಿದ್ದರು. ಬಳಿಕ ಸಚಿವ ಶಿವಲಿಂಗೇಗೌಡರು ತಾವು ಲಂಚ ನೀಡುವಂತೆ ಹೇಳಿಲ್ಲ, ಅಧಿಕಾರಿಗಳೊಂದಿಗೆ ಗೌರವಯುತವಾಗಿ ನಡೆದುಕೊಳ್ಳುವಂತೆ ಮಾತ್ರ ಹೇಳಿದ್ದಾಗಿ ಸ್ಪಷ್ಟನೆ ನೀಡಿದ್ದರು.
ಸಚಿವರ ಈ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿತ್ತು. ಅಲ್ಲದೇ ಈ ಹೇಳಿಕೆ ವಿವಾದದ ಬೆನ್ನಲ್ಲೇ ಇದೀಗ ಮೈಸೂರಿನ ವಾಯ್ಸ್ ಆಫ್ ಪೀಪಲ್ ಸಂಸ್ಥೆ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಸಚಿವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ.

