ಕಲಬುರಗಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ರಾಜೇಶ್ವರಿ ಅವರ ಮನೆಗಳು ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಂಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಕಲಬುರಗಿ ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ರಾಜೇಶ್ವರಿ ಅವರ ನಿವಾಸ ಹಾಗೂ ಖಾದ್ರಿ ಚೌಕ್‌ನಲ್ಲಿರುವ ಮತ್ತೊಂದು ಮನೆ ಮೇಲೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಇದರ ಜತೆಗೆ ಅವರು ಕರ್ತವ್ಯ ನಿರ್ವಹಿಸುವ ಜೆಸ್ಕಾಂ ಕಚೇರಿಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಒಟ್ಟು ಎರಡು ಮನೆಗಳು ಹಾಗೂ ಒಂದು ಕಚೇರಿ ಸೇರಿದಂತೆ ಮೂರು ಕಡೆ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಅಧಿಕಾರಿಗಳು ಆಸ್ತಿ-ಪಾಸ್ತಿಗೆ ಸಂಬಂಧಿಸಿದ ದಾಖಲೆಗಳು, ಹಣಕಾಸು ವ್ಯವಹಾರಗಳು ಹಾಗೂ ಆದಾಯದ ಮೂಲಗಳ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ರಾಜೇಶ್ವರಿ ಅವರು ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ಸಂದರ್ಭದಲ್ಲಿ ಅಧಿಕಾರಿಗಳು ಮನೆಗೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಬಳಿಕ ಮನೆ ಹಾಗೂ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ಮುಂದುವರಿದಿದೆ.ಆದಾಯಕ್ಕೆ ಹೋಲಿಸಿದರೆ ಹೆಚ್ಚಿನ ಪ್ರಮಾಣದ ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಸದ್ಯ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ. ದಾಳಿಯಲ್ಲಿ ಪತ್ತೆಯಾಗಿರುವ ಆಸ್ತಿ ಹಾಗೂ ದಾಖಲೆಗಳ ಕುರಿತು ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆಯಿದೆ.

