HomeKarnatakaಒಟ್ಟು 177 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ

ಒಟ್ಟು 177 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು: 177 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗಲಿವೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಕೇಂದ್ರ ಸರ್ಕಾರವು 2020ರಲ್ಲಿ ರೂಪಿಸಿರುವ ಬರ ಘೋಷಣೆಯ ಮಾರ್ಗಸೂಚಿಗಳ ಪ್ರಕಾರವೇ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕಾಗುತ್ತದೆ. ಆ ಮಾನದಂಡಗಳನ್ನು ಅನುಸರಿಸಿ ಮೊದಲ ಹಂತದಲ್ಲಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ನಿರಂತರ ಪರಿಶೀಲನೆಯ ಬಳಿಕ ಮತ್ತೂ 23 ತಾಲೂಕುಗಳನ್ನು ಸೇರ್ಪಡೆ ಮಾಡಲಾಗಿದ್ದು, ಇದೀಗ ಮತ್ತೆ 53 ತಾಲೂಕುಗಳನ್ನು ಪಟ್ಟಿಗೆ ಸೇರಿಸಲಾಗುತ್ತಿದೆ. ಇದರೊಂದಿಗೆ ಒಟ್ಟು 177 ತಾಲೂಕುಗಳು ಬರಪೀಡಿತ ಪ್ರದೇಶಗಳಾಗಿ ಘೋಷಣೆಯಾಗಲಿವೆ ಎಂದು ತಿಳಿಸಿದ್ದಾರೆ.

ಇಷ್ಟಕ್ಕೇ ಪ್ರಕ್ರಿಯೆ ಮುಗಿಯುವುದಿಲ್ಲ. ನೆಲಮಟ್ಟದ ಪರಿಸ್ಥಿತಿ, ಮಳೆ ಕೊರತೆ, ಬೆಳೆ ಹಾನಿ ಸೇರಿದಂತೆ ನಿಗದಿತ ಮಾನದಂಡಗಳ ಆಧಾರದಲ್ಲಿ ನಿರಂತರ ಮೌಲ್ಯಮಾಪನ ನಡೆಸಲಾಗುವುದು. ಮುಂದಿನ ಹಂತದಲ್ಲಿ ಮತ್ತಷ್ಟು ತಾಲೂಕುಗಳು ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆಯಿದ್ದು, ಬರಪೀಡಿತ ತಾಲೂಕುಗಳ ಸಂಖ್ಯೆ ಸುಮಾರು 200ರವರೆಗೆ ತಲುಪಬಹುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಸರ್ಕಾರವೇ ಬರ ಘೋಷಣೆ ಮತ್ತು ಪರಿಹಾರಕ್ಕೆ ಸಂಬಂಧಿಸಿದ ಮಾನದಂಡಗಳನ್ನು ರೂಪಿಸಿರುವುದರಿಂದ, ರಾಜ್ಯ ಸರ್ಕಾರವು ಆ ನಿಯಮಗಳ ಚೌಕಟ್ಟಿನಲ್ಲಿಯೇ ಕ್ರಮ ಕೈಗೊಳ್ಳಬೇಕಾಗಿದೆ. ಮಾನದಂಡಗಳನ್ನು ಮೀರಿ ರಾಜ್ಯದ ಎಲ್ಲ ತಾಲೂಕುಗಳನ್ನು ಏಕಾಏಕಿ ಬರಪೀಡಿತ ಎಂದು ಘೋಷಿಸಿದರೆ ಕೇಂದ್ರದಿಂದ ಪರಿಹಾರ ಪಡೆಯುವ ಪ್ರಕ್ರಿಯೆಗೆ ತೊಡಕು ಉಂಟಾಗಬಹುದು ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ರೂಪಿಸಿರುವ ನಿಯಮಗಳ ಪ್ರಕಾರವೇ ನಾವು ನಡೆದುಕೊಳ್ಳುತ್ತಿದ್ದೇವೆ. ಆ ನಿಯಮಗಳಡಿ ರಾಜ್ಯಕ್ಕೆ ದೊರೆಯಬೇಕಾದ ಬರ ಪರಿಹಾರವನ್ನು ಕೇಂದ್ರ ಸರ್ಕಾರ ನೀಡಬೇಕು. ಅದೇ ವೇಳೆ ರಾಜ್ಯ ಸರ್ಕಾರವೂ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯದೆ, ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಿ ರೈತರಿಗೆ ಪರಿಹಾರ ತಲುಪಿಸುವ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.

ಕಸ್ತೂರಿ ರಂಗನ್ ವರದಿ ಹಾಗೂ ರಾಜ್ಯದಲ್ಲಿ ಉಂಟಾಗಿರುವ ಗಂಭೀರ ಬರ ಪರಿಸ್ಥಿತಿಯ ಕುರಿತು ವಿಧಾನಮಂಡಲದಲ್ಲಿ ಪಕ್ಷಾತೀತವಾಗಿ ಸಮಗ್ರ ಚರ್ಚೆ ನಡೆಸಿ, ರಾಜ್ಯದ ಹಿತಾಸಕ್ತಿಗೆ ಪೂರಕವಾದ ಒಮ್ಮತದ ನಿರ್ಣಯ ಕೈಗೊಳ್ಳಬೇಕಿದೆ. ಕಸ್ತೂರಿ ರಂಗನ್ ವರದಿಯ 7ನೇ ಕರಡು ಪ್ರತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ನಿಗದಿತ ಅವಧಿಯೊಳಗೆ ತನ್ನ ಅಭಿಪ್ರಾಯವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಬೇಕಿದೆ. ಸರ್ಕಾರದ ಅಭಿಪ್ರಾಯವನ್ನಷ್ಟೇ ಏಕಪಕ್ಷೀಯವಾಗಿ ಸಲ್ಲಿಸುವ ಬದಲು, ಸದನದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ಮುಕ್ತವಾಗಿ ಚರ್ಚಿಸಿ, ರಾಜ್ಯದ ಹಿತದೃಷ್ಟಿಯಿಂದ ಒಮ್ಮತದ ನಿಲುವನ್ನು ಕೇಂದ್ರಕ್ಕೆ ತಿಳಿಸುವುದು ಸೂಕ್ತ ಎಂಬ ಉದ್ದೇಶದಿಂದ ಈ ವಿಷಯವನ್ನು ಚರ್ಚೆಗೆ ತೆಗೆದುಕೊಳ್ಳಲಾಗಿದೆ ಎಂದರು.

ರಾಜ್ಯಾದ್ಯಂತ ಗಂಭೀರ ಬರ ಪರಿಸ್ಥಿತಿ: ರಾಜ್ಯದಲ್ಲಿ ಈ ಬಾರಿ ಬರ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಇದು ಕೆಲವೇ ತಾಲೂಕುಗಳಿಗೆ ಸೀಮಿತವಾಗಿಲ್ಲ. ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರ ಕೊರತೆ ಕಂಡುಬಂದಿದ್ದು, ಕೃಷಿ ಚಟುವಟಿಕೆ ಮತ್ತು ರೈತರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ.

ಹಿಂದಿನ ತೀವ್ರ ಬರ ಪರಿಸ್ಥಿತಿಗಳೊಂದಿಗೆ ಈ ವರ್ಷದ ಅಂಕಿ-ಅಂಶಗಳನ್ನು ಹೋಲಿಕೆ ಮಾಡಲಾಗುತ್ತಿದ್ದು, ಪ್ರಸ್ತುತ ಪರಿಸ್ಥಿತಿಯ ತೀವ್ರತೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪೆಸಿಫಿಕ್ ಸಾಗರದ ಮೇಲ್ಮೈ ನೀರಿನ ತಾಪಮಾನ ಹೆಚ್ಚಳದಿಂದ ಉಂಟಾಗುವ ಎಲ್ ನಿನೋ ಪ್ರಕ್ರಿಯೆಯೂ ಮಳೆ ಕೊರತೆಗೆ ಕಾರಣವಾಗಿದ್ದು, ಈ ಬಾರಿ ಅದರ ತೀವ್ರತೆ ಹೆಚ್ಚಿದೆ ಎಂದಿದ್ದಾರೆ.

ರಾಜ್ಯದಲ್ಲಿ ವಾಡಿಕೆಯಂತೆ ಸುಮಾರು 852 ಮಿ.ಮೀ. ಮಳೆಯಾಗಬೇಕಿತ್ತು, ಆದರೆ 642 ಮಿ.ಮೀ. ಮಳೆಯಷ್ಟೇ ದಾಖಲಾಗಿದೆ. ಜೂನ್‌ನಿಂದ ಸೆಪ್ಟೆಂಬರ್ 26ರ ವರೆಗಿನ ಅವಧಿಯಲ್ಲಿ ವಿವಿಧ ಪ್ರದೇಶಗಳಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಸರಾಸರಿ ಮಳೆ ಕೊರತೆ ಶೇ.36ರಷ್ಟಿದ್ದು, ದಕ್ಷಿಣ ಒಳನಾಡಿನಲ್ಲಿ ಶೇ.46, ಉತ್ತರ ಒಳನಾಡಿನಲ್ಲಿ ಶೇ.44, ಮಲೆನಾಡಿನಲ್ಲಿ ಶೇ.38 ಹಾಗೂ ಕರಾವಳಿ ಭಾಗದಲ್ಲಿ ಶೇ.28ರಷ್ಟು ಮಳೆ ಕೊರತೆ ದಾಖಲಾಗಿದೆ. ಮಳೆ ಆರಂಭವಾದ ಸಂದರ್ಭದಲ್ಲಿ ರೈತರು ಬಿತ್ತನೆ ಕೈಗೊಂಡಿದ್ದರು. ಆದರೆ ಕೆಲವೇ ದಿನಗಳಲ್ಲಿ ಮಳೆ ಕೈಕೊಟ್ಟ ಪರಿಣಾಮ ಮೊಳಕೆಯೊಡೆದ ಬೆಳೆಗಳು ಒಣಗಿವೆ. ನಂತರ ಮಳೆಯಾದಾಗ ಎರಡನೇ ಬಾರಿ ಬಿತ್ತನೆ ಮಾಡಿದ ಬೆಳೆಗಳಿಗೂ ಹಾನಿಯಾಗಿದೆ. ಹಲವು ಪ್ರದೇಶಗಳಲ್ಲಿ ಬೆಳೆ ಹಾನಿ ತೀವ್ರವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದ್ದಾರೆ.

ಕಸ್ತೂರಿ ರಂಗನ್ ವರದಿ ಮತ್ತು ಬರಗಾಲ ಎರಡೂ ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ಮಹತ್ವದ ವಿಷಯಗಳಾಗಿವೆ. ಹೀಗಾಗಿ ಆಡಳಿತ ಮತ್ತು ವಿರೋಧ ಪಕ್ಷಗಳು ಪಕ್ಷಭೇದ ಮರೆತು ಸದನದಲ್ಲಿ ಸಮಗ್ರವಾಗಿ ಚರ್ಚಿಸಿ, ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಒಗ್ಗಟ್ಟಿನ ನಿಲುವನ್ನು ಕೇಂದ್ರ ಸರ್ಕಾರದ ಮುಂದೆ ಮಂಡಿಸಬೇಕಿದೆ ಎಂದು ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular