ಬೆಂಗಳೂರು: ಬರಪೀಡಿತ ತಾಲೂಕುಗಳ ಪಟ್ಟಿಗೆ ಹೊಸದಾಗಿ 53 ತಾಲ್ಲೂಕು ಸೇರಿಸಿ ಸರ್ಕಾರ ನೋಟಿಫಿಕೇಶನ್ ಹೊರಟಿಸಿದೆ.
ಇದರೊಂದಿಗೆ ಗದಗ ಜಿಲ್ಲೆಯ ಮೂರು ತಾಲೂಕು ಸೇರಿದಂತೆ 11 ತಾಲೂಕುಗಳ ಬರ ಪರಿಸ್ಥಿತಿ ಅಧ್ಯಯನ ನಡೆಸಿ ವರದಿ ನೀಡಲು ಆದೇಶಿಸಲಾಗಿದೆ. ಗದಗ ಜಿಲ್ಲೆಯ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೆಚ್.ಕೆ. ಪಾಟೀಲ್ ಬೆದರಿಕೆ ಹಾಕಿದ್ದು, ಅವರ ಬೆದರಿಕೆಗೆ ಮಣಿದ ಸರ್ಕಾರ 11 ತಾಲೂಕುಗಳು ಬರ ಪರಿಸ್ಥಿತಿ ಕುರಿತು ವೈಜ್ಞಾನಿಕ ಪರಿಶೀಲನೆ, ಪಾರದರ್ಶಕ ಸಮೀಕ್ಷೆ ಮತ್ತು ನಿಖರ ವರದಿ ಪಡೆಯಲು ಸ್ಥಳ ಪರಿಶೀಲನೆಗೆ ಆದೇಶಿಸಲಾಗಿದೆ.
ಹಂತ ಹಂತವಾಗಿ ಕ್ರಮ
ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ನಿರಂತರವಾಗಿ ವೈಜ್ಞಾನಿಕವಾಗಿ ಮೌಲ್ಯಮಾಪನ ನಡೆಸಲಾಗುತ್ತಿದ್ದು, ರೈತರ ಸಂಕಷ್ಟಕ್ಕೆ ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಹಂತ ಹಂತವಾಗಿ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಮೊದಲ ಹಂತದಲ್ಲಿ 101 ಹಾಗೂ ಎರಡನೇ ಹಂತದಲ್ಲಿ 23 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದೆವು. ಇದೀಗ ಮತ್ತೆ 53 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ ಆದೇಶ ಹೊರಡಿಸಿದ್ದೇವೆ. ಈ ಪೈಕಿ 51 ತಾಲೂಕುಗಳು ತೀವ್ರ ಹಾಗೂ 2 ತಾಲೂಕುಗಳು ಸಾಧಾರಣ ಬರಪೀಡಿತವಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ಎಂದು ಘೋಷಿಸಲಾದ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆಯಾಗಿದೆ.
ಇದರ ಜೊತೆಗೆ, ಮಳೆ ಪ್ರಮಾಣ, ಮಣ್ಣಿನ ತೇವಾಂಶ, ಬೆಳೆ ಸ್ಥಿತಿ ಸೇರಿದಂತೆ ವಿವಿಧ ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ 4ನೇ ಹಂತದಲ್ಲಿ 7 ಜಿಲ್ಲೆಗಳ 11 ತಾಲೂಕುಗಳು Step-3: Ground Truthingಗೆ ಅರ್ಹತೆ ಪಡೆದಿವೆ. ವೈಜ್ಞಾನಿಕ ಪರಿಶೀಲನೆ, ಪಾರದರ್ಶಕ ಸಮೀಕ್ಷೆ ಮತ್ತು ನಿಖರ ವರದಿಯ ಆಧಾರದಲ್ಲಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು.
ಮುಂಗಾರು ಹಂಗಾಮು ಮುಗಿಯುವವರೆಗೂ ಬರ ಪರಿಸ್ಥಿತಿಯ ಮೇಲ್ವಿಚಾರಣೆ ಮುಂದುವರಿಯಲಿದ್ದು, ಅಗತ್ಯ ಕಂಡುಬಂದಲ್ಲಿ ಮುಂದಿನ ಹಂತದಲ್ಲಿಯೂ ಹೆಚ್ಚುವರಿ ತಾಲೂಕುಗಳನ್ನು ಗ್ರೌಂಡ್ ಟ್ರೂಥಿಂಗ್‌ಗೆ ಸೇರಿಸಲಾಗುವುದು.
ಬೆಳೆ ಹಾನಿಯ ನೈಜ ಚಿತ್ರಣ ಆಧರಿಸಿ, ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನಿಯಮಾನುಸಾರ ಅಗತ್ಯ ನೆರವು ತಲುಪಿಸಲು ನಾವು ಬದ್ಧರಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಅಗತ್ಯ ನೆರವು
ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾದ ಜನರಿಗೆ ಅಗತ್ಯ ನೆರವು ತ್ವರಿತವಾಗಿ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿಗಳ ಬಳಿ ಲಭ್ಯವಿರುವ ₹320 ಕೋಟಿ ಎಸ್‌ಡಿಆರ್‌ಎಫ್ ಹಣವನ್ನು ಬರ ಘೋಷಣೆಯ ಹಿನ್ನೆಲೆಯಲ್ಲಿ ಬಳಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ಕೇಂದ್ರದಿಂದ ಈ ವರ್ಷ ₹929.25 ಕೋಟಿ ಬರಬೇಕಿದ್ದು, ಈಗಾಗಲೇ ₹464.62 ಕೋಟಿ ಮೊದಲ ಕಂತು ಬಿಡುಗಡೆಯಾಗಿದೆ. ರಾಜ್ಯದ ಪಾಲು ಸೇರಿಸಿ ಜಿಲ್ಲಾಧಿಕಾರಿಗಳಿಗೆ ಕೂಡಲೇ ಬಿಡುಗಡೆ ಮಾಡಲಾಗುವುದು.

