HomeIndiaಮೇಕೆದಾಟು ಯೋಜನೆ ಸ್ಥಳಕ್ಕೆ ತಮಿಳುನಾಡು ನಿಯೋಗವೂ ಬಂದು ಪರಿಶೀಲನೆ ಮಾಡಲಿ: ಸಿಎಂ ಡಿ.ಕೆ. ಶಿವಕುಮಾರ್

ಮೇಕೆದಾಟು ಯೋಜನೆ ಸ್ಥಳಕ್ಕೆ ತಮಿಳುನಾಡು ನಿಯೋಗವೂ ಬಂದು ಪರಿಶೀಲನೆ ಮಾಡಲಿ: ಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: ತಮಿಳುನಾಡು ಸರ್ಕಾರ ಕೂಡ ನಿಯೋಗ ಕಳುಹಿಸಿ ಮೇಕೆದಾಟು ಯೋಜನೆ ಸ್ಥಳಕ್ಕೆ ಬಂದು ಜಾಗ ಪರಿಶೀಲನೆ ಮಾಡಲಿ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯ ಬಳಿಕ  ಅವರು ಕರ್ನಾಟಕ ಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು.

ಮೇಕೆದಾಟು ಯೋಜನೆಯಿಂದ ನಾವು ಕುಡಿಯುವ ಉದ್ದೇಶಕ್ಕೆ ಮಾತ್ರ ನೀರನ್ನು ಬಳಸಿಕೊಳ್ಳಬಹುದು, ನೀರಾವರಿಗೆ ಬಳಸಿಕೊಳ್ಳಲು ಸಾಧ್ಯವಿಲ್ಲ ಎಂಬ ಅಂಶ ಕೇಂದ್ರ ಸಚಿವರಿಗೆ ಮನದಟ್ಟಾಗಿದೆ. ತಮಿಳುನಾಡು ಸರ್ಕಾರ ಕೂಡ ನಿಯೋಗ ಕಳುಹಿಸಿ ಯೋಜನೆ ಜಾಗ ಪರಿಶೀಲನೆ ಮಾಡಲಿ. ಈ ಯೋಜನೆಯಲ್ಲಿ ಮುಳುಗಡೆಯಾಗುವ ಅರಣ್ಯ ಭೂಮಿಗೆ ಪರ್ಯಾಯ ಸ್ಥಳ ಗುರುತಿಸಲಾಗಿದೆ. ಈಗ 5 ಸಾವಿರ ಕ್ಯೂಸೆಕ್ ನೀರಿಗೆ ಬಡಿದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಾರಿ ಕೆ.ಆರ್.ಎಸ್ ತುಂಬಿಲ್ಲದ ಕಾರಣ ಕಬಿನಿ ಭಾಗದ ರೈತರು ಗಲಾಟೆ ಮಾಡುತ್ತಿದ್ದಾರೆ. ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಕೇಂದ್ರ ತಂಡ ಸ್ಥಳಕ್ಕೆ ಭೇಟಿ ನೀಡಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮಿಳುನಾಡು ತಂಡ ಭೇಟಿ ನೀಡಿದರೂ ಅವರಿಗೂ ಸಹಕಾರ ನೀಡಲಾಗುವುದು. ನೀರನ್ನು ದುರ್ಬಳಕೆ ಮಾಡಲು ಸಾಧ್ಯವಿಲ್ಲ ಎನ್ನುವುದು ಅಧಿಕಾರಿಗಳಿಗೂ ಸಹ ಮನದಟ್ಟಾಗಿದೆ. ತಮಿಳುನಾಡು ಮುಖ್ಯಮಂತ್ರಿಯವರಿಗೆ ಮೇಕೆದಾಟು ಯೋಜನೆಯ ಸಭೆಯಲ್ಲಿ ಪಾಲ್ಗೊಳ್ಳಲು ಹಾಗೂ ಸ್ಥಳಕ್ಕೆ ಭೇಟಿ ನೀಡಲು ಮನವಿ ಮಾಡಿಕೊಳ್ಳಲಾಗುವುದು ಎಂದರು.

ಜಲಶಕ್ತಿ ಸಚಿವರಿಂದ ಸಕಾರಾತ್ಮಕ ಸ್ಪಂದನೆ

ರಾಜ್ಯದ ಕೃಷ್ಣಾ, ಮೇಕೆದಾಟು ಸೇರಿದಂತೆ ಇತರೆ ಜಲವಿವಾದಗಳ ಕುರಿತು ಕೇಂದ್ರ ಜಲಶಕ್ತಿ ಸಚಿವ ಸಿ. ಆರ್. ಪಾಟೀಲ್ ಅವರೊಂದಿಗೆ ಚರ್ಚಿಸಿ, ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರವು ಮಧ್ಯಸ್ಥಿಕೆ ವಹಿಸಿ ಸಹಕರಿಸಲು ಮನವಿ ಮಾಡಲಾಗಿದ್ದು, ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಯೋಜನೆಗಳಿಗೆ ಬರಬೇಕಾದ ಅನುದಾನಗಳ ಬಗ್ಗೆಯೂ ಮನವಿ ಮಾಡಲಾಗಿದೆ ಎಂದರು.

ಮಹದಾಯಿ ಯೋಜನೆ: ಜಂಟಿ ಸಭೆ ನಡೆಸಲು ಕೇಂದ್ರದ ಭರವಸೆ

ಮಹದಾಯಿ ಮತ್ತು ಅರಣ್ಯ ವಿಚಾರಕ್ಕೆ ಸಂಬಂಧಿಸಿದಂತೆ ಜಂಟಿ ಸಭೆಯನ್ನು ಕೈಗೊಳ್ಳುವುದಾಗಿ ಕೇಂದ್ರ ಭರವಸೆ ನೀಡಿದೆ. ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಅಕ್ಕಪಕ್ಕದ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದೆ. ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಪತ್ರವ್ಯವಹಾರ ಸರಿಯಾಗಿ ಆಗುತ್ತಿಲ್ಲ ಎನ್ನುವುದು ಸುಳ್ಳು ಎಂದು ಹೇಳಿದ್ದಾರೆ.

ರಾಜ್ಯದ ಹಿತಕ್ಕೆ ಸಹಕಾರ ನೀಡುವುದಾಗಿ ಕೇಂದ್ರದ ಭರವಸೆ

ದಕ್ಷಿಣ ವಲಯದ ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಕೇಂದ್ರ ಗೃಹ ಸಚಿವರು ತಮಿಳುನಾಡಿನಲ್ಲಿ ಸಭೆ ಕರೆದು ಸಮಸ್ಯೆ ಇತ್ಯರ್ಥ ಮಾಡುವುದಾಗಿ ಮಾತು ಕೊಟ್ಟಂತೆ ಶೀಘ್ರದಲ್ಲಿಯೇ ಸಭೆ ಕರೆಯುವುದಾಗಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದಿಂದ ಬರಬೇಕಾದ ಅನುದಾನ, ಪ್ರಸ್ತಾವನೆಗಳನ್ನು ಅವರ ಮುಂದಿಡಲಾಗಿದೆ. ಎಲ್ಲರೂ ರಾಜ್ಯದ ಹಿತಕ್ಕೆ ಸಹಕಾರ ಕೊಡುವುದಾಗಿ ಒಪ್ಪಿದ್ದಾರೆ. ಅಕ್ಟೋಬರ್ 10ರ ನಂತರ ಸಮಯ ನೀಡುವುದಾಗಿ ತಿಳಿಸಿದ್ದಾರೆ ಎಂದರು.

ಬರ ಪರಿಹಾರಕ್ಕೆ ಮನವಿ

ರಾಜ್ಯದಲ್ಲಿ 200ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತವಾಗಿವೆ. 101 ತಾಲೂಕುಗಳಿಗೆ 700 ಕೋಟಿ ರೂ. ಅನುದಾನ ಕೋರಲಾಗಿತ್ತು. ಪ್ರಸ್ತುತ ಬರಪೀಡಿತ ತಾಲೂಕುಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಪರಿಹಾರದ ಮೊತ್ತವೂ ಏರಿಕೆಯಾಗಲಿದೆ. ಅಕ್ಟೋಬರ್ 3 ರಂದು ಕೇಂದ್ರದ ತಂಡ ಬರ ಪರಿಶೀಲನೆಗಾಗಿ ರಾಜ್ಯಕ್ಕೆ ಆಗಮಿಸಲಿದೆ ಎಂದು ತಿಳಿಸಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆಗೆ ಮನವಿ

ಕೇಂದ್ರ ಸರ್ಕಾರ 2023ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆಗೆ 5300 ಕೋಟಿ ರೂ. ಮೀಸಲಿರಿಸಿದ್ದರೂ ಈವರೆಗೆ ಅನುದಾನ ಬಿಡುಗಡೆ ಮಾಡಿಲ್ಲ. ನಾವು ಕೇಳುತ್ತಲೇ ಇದ್ದೇವೆ, ಆದರೆ ಅವರು ಬಿಡುಗಡೆ ಮಾಡುತ್ತಿಲ್ಲ. ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆಯೂ ಕೇಂದ್ರಕ್ಕೆ ಮನದಟ್ಟು ಮಾಡಿಕೊಡಲಾಗಿದೆ. ಮೂರು ನಾಲ್ಕು ವರ್ಷಗಳಿಂದ ಕೇವಲ ಮಾತುಗಳನ್ನೇ ಆಡಿದ್ದು ಅನುದಾನ ಬಿಡುಗಡೆಯಾಗಿಲ್ಲ ಎಂದು ತಿಳಿಸಲಾಗಿದೆ. ವಿಚಾರ ಸಚಿವ ಸಂಪುಟ ಸಭೆಯಲ್ಲಿದ್ದು, ಶೀಘ್ರದಲ್ಲಿಯೇ ಅನುದಾನ ಬಿಡುಗಡೆ ಮಾಡಲು ತೀರ್ಮಾನ ಕೈಗೊಳ್ಳಲು ಒತ್ತಾಯಿಸಲಾಗಿದೆ ಎಂದರು.

ಬೆಂಗಳೂರಿನಲ್ಲಿ ಹಸಿರು ಉದ್ಯಾನವನ: ರಕ್ಷಣಾ ಸಚಿವರ ಭರವಸೆ

ಬೆಂಗಳೂರಿನ ಇಬ್ಬಲೂರಿನಲ್ಲಿ 700 ಎಕರೆ ರಕ್ಷಣಾ ಇಲಾಖೆಯ ಭೂಮಿ ಖಾಲಿ ಇದೆ. ಅಲ್ಲಿ ಹಸಿರು ಉದ್ಯಾನವನ ಪ್ರಾರಂಭಿಸಲು ಸರ್ಕಾರ ಯೋಜಿಸಿದೆ. ಇದಕ್ಕೆ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಇದರ ಜೊತೆಗೆ ಉದ್ಯಾನವನ, ಮೇಕ್ರಿ ಸರ್ಕಲ್ ಹಾಗೂ ಸರ್ಜಾಪುರ ರಸ್ತೆ ಅಗಲೀಕರಣಕ್ಕೆ ಇಲಾಖೆ ಜಮೀನು ಹಸ್ತಾಂತರಿಸಲು ಮನವಿ ಮಾಡಲಾಗಿದೆ. ಬೆಂಗಳೂರಿನ ರಕ್ಷಣಾ ಜಮೀನಿನಲ್ಲಿರುವ ಕೊಳಚೆ ಪ್ರದೇಶಗಳ ಅಭಿವೃದ್ಧಿ, ಅವಳಿ ಸುರಂಗ ಯೋಜನೆ, ಅಗರ-ಸರ್ಜಾಪುರ ರಸ್ತೆ ವಿಸ್ತರಣೆ, ಏರ್ಪೋರ್ಟ್ ರಸ್ತೆಯಿಂದ (ಬಳ್ಳಾರಿ ರಸ್ತೆ) ಸರೋವರ ಲೇಔಟ್‌ಗೆ ಲಿಂಕ್ ರಸ್ತೆ ನಿರ್ಮಾಣಕ್ಕೆ ನೆರವು ಬಗ್ಗೆ ಮನವಿ ಮಾಡಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular