ಬೆಂಗಳೂರು: ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ರಾತ್ರಿ ಹಾಗೂ ಮಂಗಳವಾರ ಮುಂಜಾನೆ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದೆ. ಹಲವು ಪ್ರದೇಶಗಳಲ್ಲಿ ರಾತ್ರಿ ಪೂರ್ತಿ ಮಳೆ ಮುಂದುವರಿದಿದ್ದು, ಬೆಳಗಿನ ಜಾವವೂ ಮಳೆಯ ವಾತಾವರಣ ಕಂಡುಬಂದಿದೆ.
ಮಳೆಯ ಹಿನ್ನೆಲೆಯಲ್ಲಿ ನಗರದ ಕೆಲವು ತಗ್ಗು ಪ್ರದೇಶಗಳಲ್ಲಿ, ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಸೆ.29ರಂದು ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರಿ ಮಳೆಯ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ರಾತ್ರಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಮೆಜೆಸ್ಟಿಕ್, ಕೆಆರ್ ಮಾರುಕಟ್ಟೆ, ಚಾಮರಾಜಪೇಟೆ, ಶಾಂತಿನಗರ, ವಿಜಯನಗರ, ಕೆಂಗೇರಿ, ದೀಪಾಂಜಲಿ ನಗರ, ರಾಜಾಜಿನಗರ, ಅಂಜನಾಪುರ, ಗೊಟ್ಟಿಗೆರೆ, ಆವಲಹಳ್ಳಿ, ಬನಶಂಕರಿ, ಕೋಣನಕುಂಟೆ, ಆರ್ಬಿಐ ಲೇಔಟ್, ಕುಮಾರಸ್ವಾಮಿ ಲೇಔಟ್, ರಿಚ್ಮಂಡ್ ಸರ್ಕಲ್, ಎಂಜಿ ರಸ್ತೆ, ಶೇಷಾದ್ರಿಪುರಂ, ಮಲ್ಲೇಶ್ವರಂ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾಗಿದೆ. ಭಾರಿ ಮಳೆ ಸುರಿದ ಪರಿಣಾಮ ರಸ್ತೆಗಳು ಕೆರೆಯಂತಾಗಿವೆ. ಮಲ್ಲೇಶ್ವರಂನಲ್ಲಿ ರಸ್ತೆಗೆ ಮರ ಬಿದ್ದು, ಎರಡು ಕಾರ್ ಜಖಂಗೊಂಡಿವೆ.
ವಿಧಾನ ಪರಿಷತ್ 4 ಸ್ಥಾನಗಳಿಗೆ ಚುನಾವಣೆ: ಇಂದು ಅಧಿಸೂಚನೆ ಪ್ರಕಟ
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದ್ದು, ಚುನಾವಣಾ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ ಪ್ರಕಟಿಸಿದೆ. ರಾಜ್ಯದ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ
ಚುನಾವಣಾ ವೇಳಾಪಟ್ಟಿಯಂತೆ ಸೆಪ್ಟೆಂಬರ್ 29, ಮಂಗಳವಾರ ಅಧಿಸೂಚನೆ ಪ್ರಕಟವಾಗಲಿದೆ. ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಅಕ್ಟೋಬರ್ 6 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಕ್ಟೋಬರ್ 7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ಅಕ್ಟೋಬರ್ 9ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ.
ಅಕ್ಟೋಬರ್ 23ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಮತಗಳ ಎಣಿಕೆ ಅಕ್ಟೋಬರ್ 27ರಂದು ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗುವ ನಿರೀಕ್ಷೆಯಿದೆ. ಚುನಾವಣಾ ಪ್ರಕ್ರಿಯೆ ಅಕ್ಟೋಬರ್ 31ರೊಳಗೆ ಪೂರ್ಣಗೊಳ್ಳಲಿದೆ.
ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.
ಪ್ರಮುಖ ದಿನಾಂಕಗಳು:
ಅಧಿಸೂಚನೆ ಸೆ. 29
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಅ. 6
ನಾಮಪತ್ರ ಪರಿಶೀಲನೆ ಅ. 7
ನಾಮಪತ್ರ ಹಿಂಪಡೆಯಲು ಕೊನೆಯ ದಿನ ಅ. 9
ಮತದಾನ ಅ. 23
ಮತ ಎಣಿಕೆ ಅ. 27
ಚುನಾವಣಾ ಪ್ರಕ್ರಿಯೆ ಪೂರ್ಣ ಅ. 31
ಆಗ್ನೇಯ ಪದವೀಧರ ಕ್ಷೇತ್ರದ ಚಿದಾನಂದ ಎಂ ಗೌಡ, ಪಶ್ಚಿಮ ಪದವೀಧರ ಕ್ಷೇತ್ರದ ಎಸ್.ವಿ. ಸಂಕನೂರು, ಈಶಾನ್ಯ ಶಿಕ್ಷಕರ ಕ್ಷೇತ್ರದ ಶಶಿಲ್ ನಮೋಶಿ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಪುಟ್ಟಣ್ಣ ಅವರ ಸದಸ್ಯತ್ವ ಅವಧಿ ನವೆಂಬರ್ 11ರಂದು ಅಂತ್ಯವಾಗಲಿದೆ.

