ಬೆಂಗಳೂರು: ಸೌಜನ್ಯಾ ಪ್ರಕರಣದ ಮರುತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ( ಎಸ್ ಐ ಟಿ ) ದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಎಎಸ್ಪಿ ವೆಂಕಟೇಶ್ ಪ್ರಸನ್ನ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ತನಿಖಾ ತಂಡದಿಂದ ಹಿಂದೆ ಸರಿಯುವ ನಿರ್ಧಾರವನ್ನು ಅವರು ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಹೌದು. ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದಿಂದ (SIT) ತಮ್ಮನ್ನು ಕೈಬಿಡುವಂತೆ ಬೆಂಗಳೂರು ಗ್ರಾಮಾಂತರದ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ASP) ವೆಂಕಟೇಶ್ ಪ್ರಸನ್ನ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ
ಸುಪ್ರೀಂ ಕೋರ್ಟ್ನ ಆದೇಶದ ಹಿನ್ನೆಲೆಯಲ್ಲಿ ಸೌಜನ್ಯಾ ಪ್ರಕರಣದ ಮರುತನಿಖೆಗಾಗಿ ರಾಜ್ಯ ಸರ್ಕಾರ ಐವರು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಐಜಿಪಿ ಎನ್. ಶಶಿಕುಮಾರ್ ನೇತೃತ್ವದ ಈ ತಂಡದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ, ಗುಪ್ತಚರ ವಿಭಾಗದ ಎಸ್ಪಿ ನಿಶಾ ಜೇಮ್ಸ್, ಸಿಐಡಿ ಎಸ್ಪಿ ಲೋಕೇಶ್ ಜಗಲ್ಸರ್ ಹಾಗೂ ಎಎಸ್ಪಿ ವೆಂಕಟೇಶ್ ಪ್ರಸನ್ನ ಅವರನ್ನು ನೇಮಿಸಲಾಗಿತ್ತು
ಸೌಜನ್ಯಾ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನಿಖೆ ನಡೆಸಲು ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ ಐವರ ವಿಶೇಷ ತಂಡವನ್ನು ರಚಿಸಿತ್ತು. ಈ ತಂಡದಲ್ಲಿ ಎಎಸ್ಪಿ ವೆಂಕಟೇಶ್ ಪ್ರಸನ್ನ ಅವರೂ ಇದ್ದರು.ಆದರೆ ಇದೀಗ ವೆಂಕಟೇಶ್ ಪ್ರಸನ್ನ ಅವರು ತನಿಖಾ ತಂಡದಿಂದ ತಮ್ಮನ್ನು ಕೈಬಿಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದು ಪ್ರಕರಣದಲ್ಲಿ ಹೊಸ ಬೆಳವಣಿಗೆಗೆ ಕಾರಣವಾಗಿದೆ.
ಸಾಮಾಜಿಕ ಹೋರಾಟಗಾರರು, ಕುಟುಂಬದಿಂದ ಆರೋಪ
ವೆಂಕಟೇಶ್ ಪ್ರಸನ್ನ ಅವರಿಗೆ ಭೂಗತ ಪಾತಕಿಗಳೊಂದಿಗೆ ನಂಟಿದೆ ಎಂಬ ಆರೋಪವನ್ನು ಸಾಮಾಜಿಕ ಹೋರಾಟಗಾರರು ಹಾಗೂ ಸೌಜನ್ಯಾ ಕುಟುಂಬದವರು ಮಾಡಿದ್ದರು ಎನ್ನಲಾಗಿದೆ. ಈ ಆರೋಪಗಳ ಹಿನ್ನೆಲೆಯಲ್ಲಿ ತನಿಖಾ ತಂಡದಲ್ಲಿರುವುದು ಮುಜುಗರದ ಪರಿಸ್ಥಿತಿ ಸೃಷ್ಟಿಸಿದೆ ಎಂಬ ಕಾರಣಕ್ಕೆ ಅವರು ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಸೌಜನ್ಯಾ ಪ್ರಕರಣದ ಮರುತನಿಖೆ ಹಿನ್ನೆಲೆಯಲ್ಲಿ ಸರ್ಕಾರ ರಚಿಸಿರುವ ವಿಶೇಷ ತಂಡ ತನ್ನ ತನಿಖಾ ಪ್ರಕ್ರಿಯೆಯನ್ನು ಮುಂದುವರಿಸಲಿದ್ದು, ಎಎಸ್ಪಿ ವೆಂಕಟೇಶ್ ಪ್ರಸನ್ನ ಅವರ ಪತ್ರದ ಕುರಿತು ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಬೇಕಿದೆ. ಸೌಜನ್ಯಾ ಪ್ರಕರಣದ ಮರುತನಿಖೆಯ ನಡುವೆ ತನಿಖಾ ತಂಡದ ಅಧಿಕಾರಿಯೊಬ್ಬರು ಹಿಂದೆ ಸರಿಯಲು ಮುಂದಾಗಿರುವುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.
ಸೌಜನ್ಯಾ ಪ್ರಕರಣ ಮತ್ತೆ ಮುನ್ನೆಲೆಗೆ
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ–ಉಜಿರೆ ಪ್ರದೇಶದಲ್ಲಿ 2012ರಲ್ಲಿ ನಡೆದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಪ್ರಕರಣದ ತನಿಖೆ ಸ್ಥಳೀಯ ಪೊಲೀಸರು, ಸಿಐಡಿ ಹಾಗೂ ಸಿಬಿಐ ಹಂತಗಳನ್ನು ದಾಟಿದರೂ, 2023ರಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ ಖುಲಾಸೆಯಾಗಿದ್ದರು. ಇದೀಗ 2026ರಲ್ಲಿ ಸುಪ್ರೀಂ ಕೋರ್ಟ್ ಮರುತನಿಖೆಗೆ ಆದೇಶಿಸಿರುವುದರಿಂದ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.
2012ರ ಅಕ್ಟೋಬರ್ 9ರಂದು ಉಜಿರೆಯ ಎಸ್ಡಿಎಂ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಸೌಜನ್ಯಾ ಕಾಲೇಜಿನಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ನಾಪತ್ತೆಯಾಗಿದ್ದರು. ರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಮರುದಿನ, ಅಕ್ಟೋಬರ್ 10ರಂದು, ಧರ್ಮಸ್ಥಳ ಸಮೀಪದ ಮಣ್ಣಸಂಕ ಪ್ರದೇಶದ ಅರಣ್ಯ ಪ್ರದೇಶದಲ್ಲಿ ಸೌಜನ್ಯಾಳ ಮೃತದೇಹ ಪತ್ತೆಯಾಗಿತ್ತು. ಬಳಿಕ ಪ್ರಕರಣವನ್ನು ಅತ್ಯಾಚಾರ ಮತ್ತು ಕೊಲೆ ಪ್ರಕರಣವಾಗಿ ದಾಖಲಿಸಿ ತನಿಖೆ ಆರಂಭಿಸಲಾಯಿತು.
ಸಂತೋಷ್ ರಾವ್ ಬಂಧನ
ತನಿಖೆಯ ಆರಂಭಿಕ ಹಂತದಲ್ಲೇ ಸಂತೋಷ್ ರಾವ್ ಅವರನ್ನು ಪೊಲೀಸರು ಬಂಧಿಸಿದರು. ನಂತರ ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆಯಾಯಿತು. ಕುಟುಂಬಸ್ಥರು ತನಿಖೆಯ ಬಗ್ಗೆ ಹಲವು ಅನುಮಾನಗಳನ್ನು ವ್ಯಕ್ತಪಡಿಸಿ, ಹೆಚ್ಚಿನ ತನಿಖೆಗೆ ಒತ್ತಾಯಿಸಿದ್ದರು.
ಸಿಬಿಐ ತನಿಖೆ
ನಂತರ ಪ್ರಕರಣವನ್ನು ಸಿಬಿಐಗೆ ವಹಿಸಲಾಯಿತು. ಸಿಬಿಐ ತನಿಖೆಯಲ್ಲೂ ಸಂತೋಷ್ ರಾವ್ ಅವರನ್ನೇ ಪ್ರಕರಣದ ಪ್ರಮುಖ ಆರೋಪಿಯಾಗಿ ಪರಿಗಣಿಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಯಿತು. 2017ರಲ್ಲಿ ಪ್ರಕರಣದ ಹೆಚ್ಚಿನ ತನಿಖೆ ನಡೆಸುವಂತೆ ನ್ಯಾಯಾಲಯ ಸಿಬಿಐಗೆ ನಿರ್ದೇಶನ ನೀಡಿತ್ತು. ಸುಮಾರು 11 ವರ್ಷಗಳ ವಿಚಾರಣೆಯ ಬಳಿಕ 2023ರ ಜೂನ್ 16ರಂದು ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿತು. ಆರೋಪ ಸಾಬೀತುಪಡಿಸಲು ಸಾಕಷ್ಟು ಸಾಕ್ಷ್ಯಾಧಾರಗಳಿಲ್ಲ ಎಂದು ನ್ಯಾಯಾಲಯ ತೀರ್ಮಾನಿಸಿತು. ಇದರೊಂದಿಗೆ ಪ್ರಕರಣದಲ್ಲಿ ಅತ್ಯಾಚಾರ ಮತ್ತು ಕೊಲೆ ಮಾಡಿದವರು ಯಾರು ಎಂಬ ಪ್ರಶ್ನೆ ಉತ್ತರ ಸಿಗದೆ ಉಳಿಯಿತು.

