ಕೋಲಾರ: ಚೆನ್ನೈ -ಬೆಂಗಳೂರು ಎಕ್ಸ್ ಪ್ರೆಸ್ ವೇ ನಲ್ಲಿ ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಸಮೀಪ ಅಪಘಾತ ಸಂಭವಿಸಿದೆ.
ಬೆಂಗಳೂರಿನ ರಾಮಪುರದ ಮೇಘನಾ ಮತ್ತು ಕಾರು ಚಾಲಕ ಜಯಂತ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಐದು ಜನ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಷಣ್ಮುಗ, ಪೂಜಾ, ರಾಜೇಶ್, ಬಾಬು, ವಿಜಯಲಕ್ಷ್ಮಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಳಹಸ್ತಿ ದೇವಾಲಯದಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾಗ ಅಪಘಾತ ಸಂಭವಿಸಿದೆ/ ಘಟನಾ ಸ್ಥಳಕ್ಕೆ ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು ಜಿಲ್ಲೆಯಲ್ಲಿ ಬರ ಪರಿಶೀಲನೆ
ತುಮಕೂರು ತಾಲ್ಲೂಕಿನ ಕಸಬಾ ಹೋಬಳಿಯ ಅರಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮಲಾಪುರ ಗ್ರಾಮಕ್ಕೆ ಐಎಂಸಿಟಿ ತಂಡದ ಮುಖ್ಯಸ್ಥ ಅಜಿತ್ ಕುಮಾರ್ ಸಾಹು, ಐಎಎಸ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಭೇಟಿ ನೀಡಿ, ಬರ ಪರಿಸ್ಥಿತಿಯಿಂದ ರಾಗಿ ಬೆಳೆಗಳ ಮೇಲೆ ಉಂಟಾಗಿರುವ ಪರಿಣಾಮವನ್ನು ಸ್ಥಳದಲ್ಲಿಯೇ ಪರಿಶೀಲಿಸಲಾಯಿತು.
ಗ್ರಾಮದಲ್ಲಿನ ರಾಗಿ ಬೆಳೆ ಪ್ರದೇಶಗಳಿಗೆ ಭೇಟಿ ನೀಡಿದ ತಂಡದ ಸದಸ್ಯರು, ಬೆಳೆಗಳ ಬೆಳವಣಿಗೆಯ ಹಂತ, ಪ್ರಸ್ತುತ ಬೆಳೆಗಳ ಸ್ಥಿತಿ, ಮಳೆಯ ಕೊರತೆಯಿಂದ ಉಂಟಾಗಿರುವ ಪರಿಣಾಮ ಹಾಗೂ ಬೆಳೆ ನಷ್ಟದ ಪರಿಸ್ಥಿತಿಯನ್ನು ಸ್ಥಳದಲ್ಲಿಯೇ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮದಲ್ಲಿನ ಮಳೆ ಪ್ರಮಾಣ, ಬಿತ್ತನೆ ಪ್ರದೇಶ, ಬೆಳೆಗಳ ಸ್ಥಿತಿ ಹಾಗೂ ಬರ ಪರಿಸ್ಥಿತಿಯಿಂದ ರೈತರಿಗೆ ಉಂಟಾಗಿರುವ ಪರಿಣಾಮಗಳ ಕುರಿತು ಐಎಂಸಿಟಿ ತಂಡಕ್ಕೆ ವಿವರವಾದ ಮಾಹಿತಿಯನ್ನು ನೀಡಿದರು.
ಐಎಂಸಿಟಿ ತಂಡವು ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ, ಮಳೆಯ ಕೊರತೆ, ಬೆಳೆಗಳ ಇಳುವರಿ, ಕೃಷಿ ಚಟುವಟಿಕೆಗಳಿಗೆ ಲಭ್ಯವಾಗುತ್ತಿರುವ ನೀರಿನ ಪ್ರಮಾಣ, ಬೆಳೆಗಳಿಗೆ ಎದುರಾಗಿರುವ ಸಮಸ್ಯೆಗಳು ಹಾಗೂ ಸರ್ಕಾರದಿಂದ ಅಗತ್ಯವಿರುವ ನೆರವು ಮತ್ತು ಪರಿಹಾರ ಕ್ರಮಗಳ ಕುರಿತು ಮಾಹಿತಿ ಪಡೆಯಿತು.
ಈ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ರೈತರು ತಮ್ಮ ಕುಂದುಕೊರತೆಗಳನ್ನು ತಂಡದ ಗಮನಕ್ಕೆ ತಂದರು.
ಇದೇ ಸಂದರ್ಭದಲ್ಲಿ ಗ್ರಾಮದಲ್ಲಿನ ನೀರಿನ ಲಭ್ಯತೆ ಹಾಗೂ ಪ್ರಸ್ತುತ ಜಲ ಪರಿಸ್ಥಿತಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. ಕುಡಿಯುವ ನೀರು ಮತ್ತು ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ನೀರಿನ ಪರಿಸ್ಥಿತಿಯನ್ನು ಪರಿಶೀಲಿಸಿದ ತಂಡವು, ಗ್ರಾಮದಲ್ಲಿ ನೀರಿನ ಸಮಸ್ಯೆ ಎದುರಾದಲ್ಲಿ ಕೈಗೊಳ್ಳಲಾಗುತ್ತಿರುವ ಪರ್ಯಾಯ ವ್ಯವಸ್ಥೆಗಳ ಬಗ್ಗೆಯೂ ಮಾಹಿತಿ ಪಡೆಯಿತು.
ಕ್ಷೇತ್ರ ಪರಿಶೀಲನೆಯ ಸಂದರ್ಭದಲ್ಲಿ ಬರ ಪರಿಸ್ಥಿತಿಯ ನೈಜ ಸ್ಥಿತಿಗತಿಗಳನ್ನು ಸ್ಥಳದಲ್ಲಿಯೇ ಅರಿತುಕೊಳ್ಳುವ ಉದ್ದೇಶದಿಂದ ಬೆಳೆ ಪ್ರದೇಶಗಳಿಗೆ ಭೇಟಿ ನೀಡಿ, ಗ್ರಾಮಸ್ಥರು ಹಾಗೂ ರೈತರೊಂದಿಗೆ ನೇರ ಸಂವಾದ ನಡೆಸಲಾಯಿತು. ಈ ಮೂಲಕ ಬರದಿಂದ ಉಂಟಾಗಿರುವ ಬೆಳೆ ನಷ್ಟ, ನೀರಿನ ಲಭ್ಯತೆ ಮತ್ತು ರೈತರ ಸಮಸ್ಯೆಗಳ ಕುರಿತು ಐಎಂಸಿಟಿ ತಂಡವು ವಾಸ್ತವಿಕ ಮಾಹಿತಿಯನ್ನು ಸಂಗ್ರಹಿಸಿದರು.

