HomeKarnatakaಅಧಿಕಾರ ಇರಲಿ, ಇಲ್ಲದಿರಲಿ, ಜನರ ಸೇವೆಯಿಂದ ನಾನು ಎಂದಿಗೂ ಹಿಂದೆ ಸರಿಯುವುದಿಲ್ಲ: ಸಿದ್ಧರಾಮಯ್ಯ

ಅಧಿಕಾರ ಇರಲಿ, ಇಲ್ಲದಿರಲಿ, ಜನರ ಸೇವೆಯಿಂದ ನಾನು ಎಂದಿಗೂ ಹಿಂದೆ ಸರಿಯುವುದಿಲ್ಲ: ಸಿದ್ಧರಾಮಯ್ಯ

ಮೈಸೂರು: ನಾನು ಇನ್ನೂ ಒಂದೂವರೆ ವರ್ಷ, ಅಂದರೆ 2028ರವರೆಗೆ ವರುಣಾ ಕ್ಷೇತ್ರದ ಶಾಸಕನಾಗಿ ನಿಮ್ಮೊಂದಿಗೆ ಇರಲಿದ್ದೇನೆ. ಅಧಿಕಾರ ಇರಲಿ, ಇಲ್ಲದಿರಲಿ; ಶಾಸಕನಾಗಿರಲಿ, ಇಲ್ಲದಿರಲಿ, ವರುಣಾ ಜನರ ಸೇವೆಯಿಂದ ನಾನು ಎಂದಿಗೂ ಹಿಂದೆ ಸರಿಯುವುದಿಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದ ದಾಸನೂರು ಗ್ರಾಮದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ನಿರ್ಮಿತಿ ಕೇಂದ್ರ, ಲೋಕೋಪಯೋಗಿ ಇಲಾಖೆ, ಮೈಸೂರು ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ವಿವಿಧ ಇಲಾಖೆಗಳ ₹143.38 ಕೋಟಿ ವೆಚ್ಚದ 134 ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ₹40.40 ಕೋಟಿ  ವೆಚ್ಚದ 27 ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ, ಕ್ಷೇತ್ರದ ಜನತೆಗೆ ಧನ್ಯವಾದ ಸಲ್ಲಿಸಿ ಅವರು ಮಾತನಾಡಿದರು.

ವರುಣಾ ಕ್ಷೇತ್ರದ ಜನತೆ ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದವೇ ನನ್ನ ರಾಜಕೀಯ ಬದುಕಿನ ಬಹುದೊಡ್ಡ ಶಕ್ತಿ. ನಿಮ್ಮ ಬೆಂಬಲದಿಂದಲೇ ನಾನು ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿ ನಿರ್ವಹಿಸುವ ಅವಕಾಶ ಪಡೆದೆ. ನನ್ನ ರಾಜಕೀಯ ಬದುಕಿನಲ್ಲಿ ನಾನು ಏನಾದರೂ ಸಾಧಿಸಿದ್ದರೆ, ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರೆ ಅದರ ಹಿಂದೆ ನಿಮ್ಮ ಆಶೀರ್ವಾದವಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವರುಣಾ ಕ್ಷೇತ್ರದಲ್ಲಿ ₹183.64 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ ದೊರೆತಿದೆ. ಇದರಲ್ಲಿ ₹40 ಕೋಟಿಗೂ ಹೆಚ್ಚಿನ ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಲಾಗಿದ್ದು, ಸುಮಾರು ₹143 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.

ವರುಣಾ ಕ್ಷೇತ್ರ ರಚನೆಯಾದ ನಂತರ 2008ರಿಂದ ನಾಲ್ಕು ಚುನಾವಣೆಗಳು ನಡೆದಿವೆ. ಕ್ಷೇತ್ರದ ಜನತೆ ನನ್ನನ್ನು ಮೂರು ಬಾರಿ ಗೆಲ್ಲಿಸಿದ್ದೀರಿ. 2018ರಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿದ್ದೀರಿ. ನಿಮ್ಮ ಈ ನಿರಂತರ ಪ್ರೀತಿ ಮತ್ತು ವಿಶ್ವಾಸಕ್ಕೆ ನಾನು ಸದಾ ಋಣಿ ಎಂದು ತಿಳಿಸಿದರು.

ನನ್ನ ರಾಜಕೀಯ ಬದುಕಿನುದ್ದಕ್ಕೂ ನುಡಿದಂತೆ ನಡೆಯಬೇಕು, ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಎಂಬ ತತ್ವವನ್ನು ಪಾಲಿಸಿಕೊಂಡು ಬಂದಿದ್ದೇನೆ. 2013ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಇದರ ಜೊತೆಗೆ ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರಭಾಗ್ಯ, ಶಾದಿಭಾಗ್ಯ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಿದರು.

2023ರಲ್ಲಿ ಮತ್ತೆ ಅಧಿಕಾರಕ್ಕೆ ಬಂದ ನಂತರ ಜನರಿಗೆ ನೀಡಿದ್ದ ಐದು ಗ್ಯಾರಂಟಿಗಳನ್ನೂ ಒಂದೇ ವರ್ಷದೊಳಗೆ ಜಾರಿಗೆ ತಂದೆವು. ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳ ಮೂಲಕ ರಾಜ್ಯದ ಬಡವರು, ಮಹಿಳೆಯರು, ಯುವಜನರು ಹಾಗೂ ದುಡಿಯುವ ವರ್ಗಗಳ ಬದುಕಿಗೆ ಆರ್ಥಿಕ ಬಲ ತುಂಬುವ ಕೆಲಸ ಮಾಡಿದ್ದೇವೆ ಎಂದರು.

ರಾಜ್ಯ ಇಂದು ಭೀಕರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದೆ. 240 ತಾಲೂಕುಗಳ ಪೈಕಿ 217 ತಾಲೂಕುಗಳು ಬರಪೀಡಿತವಾಗಿವೆ. ಕಳೆದ 126 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾದ ಪರಿಸ್ಥಿತಿಯನ್ನು ನಾವು ಎದುರಿಸುತ್ತಿದ್ದೇವೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳು ಜನರ ಕೈಗೆ ಹಣ, ಆಹಾರ ಮತ್ತು ಅಗತ್ಯ ನೆರವು ತಲುಪಿಸುವ ಮೂಲಕ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆಸರೆಯಾಗಿವೆ ಎಂದರು.

ನಾನು 2023ರ ಮೇ 23ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ, 2026ರ ಮೇ 26ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದೆ. ರಾಹುಲ್ ಗಾಂಧಿಯವರು ಯಾವಾಗ ಹೇಳುತ್ತಾರೋ ಆಗ ಮುಖ್ಯಮಂತ್ರಿ ಸ್ಥಾನವನ್ನು ಬಿಡುತ್ತೇನೆ ಎಂದು ನಾನು ಹಿಂದೆಯೇ ಹಲವು ಬಾರಿ ಹೇಳಿದ್ದೆ. ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ ಎಂದರು.

2013ರಿಂದ 2018ರವರೆಗೆ ಹಾಗೂ 2023ರಿಂದ 2026ರ ಮೇ 26ರವರೆಗೆ ಒಟ್ಟಾರೆ ಎಂಟು ವರ್ಷಕ್ಕೂ ಹೆಚ್ಚು ಕಾಲ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವ ಅವಕಾಶ ನನಗೆ ದೊರೆಯಿತು. ಅಧಿಕಾರ ಶಾಶ್ವತವಲ್ಲ, ಆದರೆ ಜನರೊಂದಿಗೆ ಇರುವ ಸಂಬಂಧ ಮತ್ತು ಜನಸೇವೆ ಶಾಶ್ವತ ಎಂದರು.

ಇಂದು ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿದ್ದಾರೆ. ನಮ್ಮ ಸರ್ಕಾರ ಜಾರಿಗೆ ತಂದಿರುವ ಜನಪರ ಕಾರ್ಯಕ್ರಮಗಳು ಹಾಗೂ ಕಾಂಗ್ರೆಸ್ ಪಕ್ಷದ ಬದ್ಧತೆಗಳನ್ನು ಅವರು ಮುಂದುವರಿಸಿಕೊಂಡು ಹೋಗುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದರು.

ನಾನು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಸಾರ್ವಜನಿಕ ಜೀವನದಲ್ಲಿದ್ದೇನೆ. ಗೆಲುವನ್ನೂ ಕಂಡಿದ್ದೇನೆ, ಸೋಲನ್ನೂ ಕಂಡಿದ್ದೇನೆ. ಎಂಟು ಬಾರಿ ಚುನಾವಣೆಯಲ್ಲಿ ಗೆಲ್ಲುವ ಅವಕಾಶವನ್ನು ಜನರು ನನಗೆ ನೀಡಿದ್ದಾರೆ. ಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕನಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ಈ ಎಲ್ಲ ಸ್ಥಾನಮಾನಗಳಿಗಿಂತ ಜನರು ನನ್ನ ಮೇಲೆ ಇಟ್ಟಿರುವ ವಿಶ್ವಾಸವೇ ನನಗೆ ದೊಡ್ಡದು ಎಂದರು.

ವರುಣಾ ಕ್ಷೇತ್ರದ ನಾಲ್ಕು ಅವಧಿಗಳಲ್ಲಿ ಸುಮಾರು ₹5,034 ಕೋಟಿ ಮೊತ್ತದ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗಿದೆ ಎಂಬ ತೃಪ್ತಿ ನನಗಿದೆ. ಮುಂದಿನ ದಿನಗಳಲ್ಲಿಯೂ ಕ್ಷೇತ್ರದ ಅಭಿವೃದ್ಧಿಗೆ ನನ್ನ ಬದ್ಧತೆ ಮುಂದುವರಿಯಲಿದೆ ಎಂದರು.

ಯತೀಂದ್ರ ಸಿದ್ದರಾಮಯ್ಯ ಅವರು ರಾಜಕಾರಣದಲ್ಲಿ ಮುಂದುವರಿದು ಈಗ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನನಗೆ ನೀಡಿದಂತೆ ಅವರಿಗೂ ನಿಮ್ಮ ಮಾರ್ಗದರ್ಶನ, ಪ್ರೀತಿ, ಅಭಿಮಾನ ಮತ್ತು ಆಶೀರ್ವಾದ ಇರಲಿ.

ವರುಣಾ ಕ್ಷೇತ್ರದ ಜನರನ್ನು ನಾನು ಎಂದಿಗೂ ಮರೆಯುವುದಿಲ್ಲ. ನನ್ನ ರಾಜಕೀಯ ಬದುಕಿಗೆ ಶಕ್ತಿ ತುಂಬಿದ ನಿಮ್ಮ ಋಣವನ್ನು ಜನಸೇವೆಯ ಮೂಲಕವೇ ತೀರಿಸುವ ಪ್ರಯತ್ನ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಶಾಸಕರಾದ ದರ್ಶನ್ ಧ್ರುವನಾರಾಯಣ್, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಶಿವಕುಮಾರ್, ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬೀರಿಹುಂಡಿ ಬಸವಣ್ಣ, ಮೈಸೂರು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ರಂಗಸ್ವಾಮಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular