ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮಹತ್ವದ ಕ್ರಮ ಕೈಗೊಂಡಿದೆ. ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ, ಲಂಚ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪಗಳಿಗೆ ಸಂಬಂಧಿಸಿದಂತೆ ಇಡಿ ತನಿಖೆ ನಡೆಸುತ್ತಿದೆ. ಈ ಪ್ರಕರಣದ ಭಾಗವಾಗಿ ಶಿವಶಂಕರಪ್ಪ ಸಾಹುಕಾರ್ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ಬೆನ್ನಲ್ಲೇ ಇದೀಗ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಕೆಪಿಎಸ್ಸಿ ನೇಮಕಾತಿ ಅಕ್ರಮದಲ್ಲಿ ಕೋಟ್ಯಂತರ ರೂಪಾಯಿ ಲಂಚ ಹಾಗೂ ಹಣ ವರ್ಗಾವಣೆ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಇಡಿ ತನಿಖೆ ತೀವ್ರಗೊಳಿಸಿದೆ. ಪ್ರಕರಣದಲ್ಲಿ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಕ್ರಮಗಳ ಕುರಿತು ತನಿಖೆ ನಡೆಯುತ್ತಿದೆ.
ಶಿವಶಂಕರಪ್ಪ ಸಾಹುಕಾರ್ ಮನೆ ಮೇಲೆ ಮತ್ತೆ ಇಡಿ ದಾಳಿ
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ಬೆಂಗಳೂರಿನ ನಿವಾಸದ ಮೇಲೆ ಮತ್ತೆ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿದ ಇಡಿ ಅಧಿಕಾರಿಗಳು ಹಲವು ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಸಾಹುಕಾರ್ ಅವರ ನಿವಾಸದ ಮೇಲೆ ಇಡಿ ನಡೆಸಿದ ಎರಡನೇ ದಾಳಿ ಇದಾಗಿದೆ ಎಂದು ತಿಳಿದುಬಂದಿದೆ.
ಕೆಪಿಎಸ್ಸಿ ಸದಸ್ಯೆ ಗೀತಾ ಮನೆ ಮೇಲೂ ದಾಳಿ
ಇದೇ ವೇಳೆ ಕೆಪಿಎಸ್ಸಿ ಸದಸ್ಯೆ ಗೀತಾ ಅವರ ನಿವಾಸದ ಮೇಲೂ ಇಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಕೆಪಿಎಸ್ಸಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿದಿರುವ ಬೆನ್ನಲ್ಲೇ ಈ ದಾಳಿಗಳು ನಡೆದಿವೆ.
ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ
ಪಶುಸಂಗೋಪನಾ ಇಲಾಖೆಯ 400 ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಿವಶಂಕರಪ್ಪ ಸಾಹುಕಾರ್ ಅವರ ಪಾತ್ರವಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ಅಕ್ರಮಗಳಿಗೆ ಸಂಬಂಧಿಸಿದಂತೆ ಅವರು ಪ್ರಮುಖ ಆರೋಪಿಯಾಗಿದ್ದಾರೆ.
ಈ ಪ್ರಕರಣದಲ್ಲಿ ಸೆಪ್ಟೆಂಬರ್ 7, 2026ರಂದು ಕರ್ನಾಟಕ ಹೈಕೋರ್ಟ್ ಶಿವಶಂಕರಪ್ಪ ಸಾಹುಕಾರ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಆದರೂ ತನಿಖಾಧಿಕಾರಿಗಳು ಅವರನ್ನು ಬಂಧಿಸದಿರುವ ಬಗ್ಗೆ ಈ ಹಿಂದೆ ಪ್ರಶ್ನೆಗಳು ಎದ್ದಿದ್ದವು.
ಅಧ್ಯಕ್ಷ ಸ್ಥಾನದಿಂದ ಅಮಾನತು
ತಮ್ಮ ಪುತ್ರಿಯರು ಹಾಗೂ ಸಂಬಂಧಿಕರ ಉದ್ಯೋಗ ನೇಮಕಾತಿಯಲ್ಲಿ ಅಕ್ರಮ ನಡೆಸಿದ್ದಾರೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಿವಶಂಕರಪ್ಪ ಸಾಹುಕಾರ್ ಅವರನ್ನು ಕೆಪಿಎಸ್ಸಿ ಅಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಿತ್ತು.
ಇದಲ್ಲದೆ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಜಮೀನು ಒಡೆತನ ಪಡೆದಿದ್ದಾರೆ ಎಂಬ ಆರೋಪದಡಿ ಯಾದಗಿರಿಯಲ್ಲೂ ಅವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಕೆಪಿಎಸ್ಸಿ ಹಗರಣದ ತನಿಖೆ ಚುರುಕು
ಕೆಪಿಎಸ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕ ಹಾಗೂ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಮತ್ತು ಪ್ರಕರಣದ ಕಿಂಗ್ಪಿನ್ ಎನ್ನಲಾಗಿರುವ ಬಸವರಾಜ್ ಕನ್ನಾಳೆ ಅವರನ್ನು ಸಿಐಡಿ ಬಂಧಿಸಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಇದೀಗ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಕೆಪಿಎಸ್ಸಿ ಸದಸ್ಯೆ ಗೀತಾ ಅವರ ನಿವಾಸಗಳ ಮೇಲೆ ಇಡಿ ದಾಳಿ ನಡೆಸಿರುವುದು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿದೆ.

