ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಕಳೆದ ಎರಡು ದಿನಗಳಿಂದ ಮಳೆಯಾಗಿದ್ದು, ಮುಂದಿನ ನಾಲ್ಕು ದಿನ 19 ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಧಾರವಾಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ. ಗಂಟೆಗೆ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಅಕ್ಟೋಬರ್ 7ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಮುಂದಿನ ನಾಲ್ಕು ದಿನಗಳ ಕಾಲ ಹಲವೆಡೆ ಮಳೆ ಹಾಗೂ ಗುಡುಗು-ಮಿಂಚು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ವಿಶೇಷವಾಗಿ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು, ಜನರು ಹವಾಮಾನ ಮುನ್ಸೂಚನೆ ಗಮನಿಸಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ರಾಜ್ಯದಲ್ಲಿ ನೈರುತ್ಯ ಮುಂಗಾರು ಹಂತ ಹಂತವಾಗಿ ಹಿಂಪಡೆಯುತ್ತಿರುವ ನಡುವೆಯೂ ಕೆಲವು ಭಾಗಗಳಲ್ಲಿ ಮಳೆ ಚಟುವಟಿಕೆ ಮುಂದುವರಿದಿದೆ. ಕರಾವಳಿ ಕರ್ನಾಟಕದಲ್ಲಿ ಅ.10ರವರೆಗೆ ಅಲ್ಲಲ್ಲಿ ಗುಡುಗು-ಮಿಂಚು ಸಹಿತ ಮಳೆಯ ಸಾಧ್ಯತೆ ಇದೆ. ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಚದುರಿದ ಮಳೆ ಮುಂದುವರಿಯುವ ನಿರೀಕ್ಷೆಯಿದೆ.
ಅ.7ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಮಳೆ ಹಾಗೂ ಗುಡುಗು-ಮಿಂಚಿನ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ರಾಮನಗರ ಜಿಲ್ಲೆಗಳ ಕೆಲವು ಭಾಗಗಳಲ್ಲೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳಲ್ಲೂ ಮಳೆ ಚಟುವಟಿಕೆ ಮುಂದುವರಿಯುವ ನಿರೀಕ್ಷೆಯಿದೆ.
ಉತ್ತರ ಕರ್ನಾಟಕದಲ್ಲಿ ಒಣ ಹವೆ
ಇದೇ ವೇಳೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆ ಇರಲಿದ್ದು, ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎನ್ನಲಾಗಿದೆ.
ಅ. 8 ರಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ
ರಾಯಚೂರು: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಅಕ್ಟೋಬರ್ 08 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನೇರ ಸಂದರ್ಶನ ಆಯೋಜಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಕೋರಲಾಗಿದೆ.
ನೇರ ಸಂದರ್ಶನದಲ್ಲಿ ಎರಡು ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರವಾಗಿ ಭರ್ತಿ ಮಾಡಿಕೊಳ್ಳಲಿದ್ದಾರೆ.
ಅರ್ಹತೆಗಳು: ಎಲ್ಲಾ ಪದವೀಧರರು ಆಸಕ್ತ 18 ರಿಂದ 26 ವರ್ಷಗಳ ವರೆಗಿನ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳು ಮತ್ತು ತಮ್ಮ ಬಯೋಡೆಟಾ, ಆಧಾರ್ ಕಾರ್ಡ್ ಪ್ರತಿ, ಭಾವಚಿತ್ರಗನ್ನು ಸಲ್ಲಿಸಬೇಕು. ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ, ಬದಲಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಬಾಲಾಜಿ ಕಾಂಪ್ಲೆಕ್ಸ್, ನೆಲ ಮಹಡಿ, ಗೂಡ್ ಶೆಡ್ ರಸ್ತೆ, ಸ್ಟೇಷನ್ ಏರಿಯಾ, ರಾಯಚೂರು ಹಾಗೂ ದೂರವಾಣಿ ಸಂಖ್ಯೆ 08532-231684, 9008211750, 8197930236, ಗೆ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ನವೀನ ಕುಮಾರ್ ಸಂಗೇಪಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

