ನವದೆಹಲಿ: ಕೇಂದ್ರ ಚುನವಣಾ ಆಯೋಗದ ವಿರುದ್ಧ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಅಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟದ ಪಕ್ಷಗಳು ನಡೆಸಿದ್ದ ಬೃಹತ್ ಪ್ರತಿಭಟನಾ ರ್ಯಅಲಿಯಲ್ಲಿ ಭಾಗವಹಿಸಿದ್ದ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಎಫ್ಐಆರ್ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.
ಚುನಾವಣಾ ಆಯೋಗದ ವಿರುದ್ಧ ಆಕಾಶವಾಣಿ ಭವನದ ಬಳಿ ನಡೆದ ಪ್ರತಿಭಟನೆಯ ವೇಳೆ ತಮ್ಮ ಹಾಗೂ ಇತರ ಸಂಸದರ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಾನು ಎಫ್ಐಆರ್ಗಳಿಗೆ ಹೆದರುವುದಿಲ್ಲ ಎಂದು ತಿಳಿಸಿದ್ದಾರೆ.
ತಮ್ಮ ವಿರುದ್ಧ ಈಗಾಗಲೇ ಸುಮಾರು 45 ಎಫ್ಐಆರ್ಗಳು ದಾಖಲಾಗಿವೆ. ತಮ್ಮ ವಿರುದ್ಧದ ಎಫ್ಐಆರ್ಗಳ ಸಂಖ್ಯೆ 100 ದಾಟಿದರೂ ನಾನು ಹೆದರುವುದಿಲ್ಲ. ಪ್ರತಿಯೊಂದು ಎಫ್ಐಆರ್ ಅನ್ನು ನನಗೆ ಸಿಗುವ ಗೌರವದ ಪದಕ ಎಂದು ಭಾವಿಸುತ್ತೇನೆ. ಒಂದೊಂದು ಎಫ್ಐಆರ್ ಒಂದೊಂದು ಮೆಡಲ್ ಇದ್ದಂತೆ ಎಂದು ತಿಳಿಸಿದ್ದಾರೆ.
ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಹಾಗೂ ವಿವಿಧ ಸಂಘಟನೆಗಳು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪ್ರತಿಭಟನಾ ಮೆರವಣಿಗೆಯಲ್ಲಿ ‘ಆಕಾಶವಾಣಿ ಭವನ’ಕ್ಕೆ ಅಕ್ರಮವಾಗಿ ಪ್ರವೇಶಿಸಿದ ಆರೋಪದ ಮೇಲೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಇತರರ ವಿರುದ್ಧ ಆಕಾಶವಾಣಿ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲು ಮಾಡಲಾಗಿದೆ. ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ತನಿಖೆ ಆರಂಭಿಸಲಾಗಿದೆ.
ಜ್ಞಾನೇಶ್ ಕುಮಾರ್ ರಾಜೀನಾಮೆ ಹಾಗೂ ಎಸ್ಐಆರ್ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಇಂಡಿಯಾ ಒಕ್ಕೂಟದ ಅನೇಕ ನಾಯಕರುಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಸಂಸತ್ ಭವದಿಂದ ಆರಂಭವಾದ ಪ್ರತಿಭಟನಾ ರ್ಯಾಲಿ ಚುನವಣಾ ಆಯೋಗಕ್ಕೆ ಮುತ್ತಿಗೆ ಹಾಕಲು ಮುಂದಾಗಿತ್ತು. ಈ ವೇಳೆ ಪ್ರತಿಭಟನಾಕಾರರು ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ ನುಗ್ಗಲು ಮುಂದಾದ ವೇಳೆ ಆಕಾಶವಾಣಿ ಭವನದ ಬಳಿ ಅವರನ್ನು ಪೊಲೀಸರು ತಡೆದಿದ್ದರು.
ಆಕಾಶವಾಣಿ ಭವನದ ಬಳಿ ರಸ್ತೆಯಲ್ಲಿಯೇ ಕುಳಿತು ಸುದೀರ್ಘ ಧರಣಿ ನಡೆಸಿದ ಪ್ರತಿಬಹ್ಟನಾಕಾರರು ಗೇಟ್ ಗಳನ್ನು ಹತ್ತಿ ಅಕ್ರಮವಾಗಿ ಪ್ರವೇಶಿಸಿ ಅಲ್ಲಿಂದ ಚುನಾವಣಾ ಆಯೋಗದ ಕಚೇರುಯತ್ತ ಮುನ್ನುಗ್ಗಿದ್ದರು. ಆಕಾಶವಾಣಿ ಭವನದ ಕಚೇರಿಯನ್ನು ಅಕ್ರಮವಾಗಿ ಪ್ರವೇಶಿಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವರ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ.
ಎಸ್ಐಆರ್ ರದ್ದು ಹಾಗೂ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಮಂಗಳವಾರ ಇಂಡಿಯಾ ಒಕ್ಕೂಟದ ಸುಮಾರು 200 ಸಂಸದರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಸಂಸತ್ತಿನ ಮುಖ್ಯ ದ್ವಾರದಿಂದ ಚುನಾವಣಾ ಆಯೋಗದ ಪ್ರಧಾನ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆಗೆ ಹಮ್ಮಿಕೊಳ್ಳಲಾಗಿತ್ತು. ದೆಹಲಿಯ ಜಂತರ್ ಮಂತರ್ ನಲ್ಲಿ ಇಂದು ಕೂಡ ಪ್ರತಿಭಟನೆ ಮುಂದುವರೆದಿದೆ. ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಇಂದು ಕೂಡ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಕಾಂಗ್ರೆಸ್ ನಾಯಕರು ಹಾಗೂ ಇತರ ಪಕ್ಷಗಳ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

