HomeKarnatakaನ.1 ರಂದು ಬೆಳಗಾವಿಯಲ್ಲಿ ಅದ್ದೂರಿ ರಾಜ್ಯೋತ್ಸವ, ಕರಾಳ ದಿನಾಚರಣೆಗೆ ಕನ್ನಡ ಸಂಘಟನೆಗಳ ವಿರೋಧ

ನ.1 ರಂದು ಬೆಳಗಾವಿಯಲ್ಲಿ ಅದ್ದೂರಿ ರಾಜ್ಯೋತ್ಸವ, ಕರಾಳ ದಿನಾಚರಣೆಗೆ ಕನ್ನಡ ಸಂಘಟನೆಗಳ ವಿರೋಧ

ಬೆಳಗಾವಿ: ಪ್ರತಿ ವರ್ಷದಂತೆ ಈ ಬಾರಿಯೂ ನ.1 ರಂದು ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ವಿಜೃಂಭಣೆ ಹಾಗೂ ಮಾದರಿ ರಾಜ್ಯೋತ್ಸವ ಆಚರಿಸಲು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.

ಬೆಳಗಾವಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗುರುವಾರ ಜರುಗಿದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನ.1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಬೆಳಗಾವಿಯಲ್ಲಿ ಅತೀ ವಿಜೃಂಭಣೆಯಿಂದ ಆಚರಿಸಲಾಗುವುದು. ರಾಜ್ಯೋತ್ಸವದ ಹಿನ್ನಲೆಯಲ್ಲಿ ಬೆಳಗಾವಿ ನಗರದಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ ಮಹಾನಗರ ಪಾಲಿಕೆಯಿಂದ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಠರಾವು ಅಂಗೀಕರಿಸಿದ್ದು ಐತಿಹಾಸಿಕ ಕಾರ್ಯವಾಗಿದೆ. ಈ ಕಾರ್ಯಕ್ಕೆ ಹೋರಾಡಿದ ಕನ್ನಡಪರ ಸಂಘಟನೆಗಳಿಗೆ ಅಭಿನಂದನೆ ಸಲ್ಲಿಸಿದರು. ಸಂಪೂರ್ಣ ಮಹಾಜನ್ ವರದಿಯನ್ನು ಅಳವಡಿಸಿಕೊಂಡು ಅಂಗೀಕಾರವಾದ ಈ ಠರಾವು ಮುಂದಿನ ಕಾನೂನು ಹೋರಾಟಕ್ಕೆ ತುಂಬಾ ಉಪಯುಕ್ತವಾಗಲಿದೆ ಎಂದರು.

ರಾಜ್ಯೋತ್ಸವ ದಿನದಂದು ನಗರದಲ್ಲಿ ಲಕ್ಷಾಂತರ ಜನ ಸೇರುವುದರಿಂದ ಸಾರ್ವಜನಿಕರಿಗೆ ಸಮರ್ಪಕ ಕುಡಿಯುವ ನೀರು ಹಾಗೂ ಸಂಚಾರಿ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು. ರಾಜ್ಯೋತ್ಸವದ ಹಿನ್ನಲೆಯಲ್ಲಿ ಕನ್ನಡ ನಾಡು ನುಡಿಗಾಗಿ ಶ್ರಮಿಸಿದ ಕನ್ನಡಪರ ಹೋರಾಟಗಾರರಿಗೆ ಸನ್ಮಾನ ಮಾಡಲಾಗುವುದು. ಕನ್ನಡ ಪರ ಹೋರಾಟಗಾರರು ಹಾಗೂ ಸಾಧಕರಿಗೆ ಸನ್ಮಾನಿಸಲು ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗುವುದು.

ಪ್ರತಿ ವರ್ಷ ಬೆಳಗಾವಿ ರಾಜ್ಯೋತ್ಸವಕ್ಕೆ ಆಗಮಿಸುವ ಜನರ ಸಂಖ್ಯೆ ಹೆಚ್ಚಾಗುತ್ತಿದೆ. ಅಲ್ಲದೇ ಬೆಳಗಾವಿಯ ರಾಜ್ಯೋತ್ಸವದ ಮೆರವಣಿಗೆಗೆ ಹೆಚ್ಚಿನ ಮೆರಗು ನೀಡಲು ಹಾಗೂ ಸಾರ್ವಜನಿಕರಿಗೆ ಕುಳಿತು ವೀಕ್ಷಿಸಲು ಅನುಕೂಲವಾಗುವ ಉದ್ದೇಶದೊಂದಿಗೆ ಈ ಬಾರಿ ಮೆರವಣಿಗೆಯ ಮಾರ್ಗ ಬದಲಾವಣೆ ಮಾಡಲು ಚಿಂತಿಸಲಾಗಿದ್ದು, ಈ ಕುರಿತು ವಿವಿಧ ಕನ್ನಡಪರ ಸಂಘಟನೆಗಳೊಂದಿಗೆ ಚರ್ಚಿಸಿ ನಿರ್ಣಯಿಸಲಾಗುವುದು.

ಗಡಿ ಭಾಗದ ಕನ್ನಡ  ಶಾಲೆಗಳಲ್ಲಿ ಕಡ್ಡಾಯವಾಗಿ ರಾಜ್ಯೋತ್ಸವ ಆಚರಣೆ ಮಾಡಿ ಜಿ.ಪಿ.ಎಸ್. ಆಧಾರಿತ ಛಾಯಾಚಿತ್ರಗಳೊಂದಿಗೆ ಕಾರ್ಯಕ್ರಮದ ವರದಿ ಸಲ್ಲಿಸಲು ಹಾಗೂ ಸದಲಗಾದಲ್ಲಿನ ಕುವೆಂಪು ಮಾದರಿ ಶಾಲೆಯ ಸ್ಥಿತಿಗತಿಯ ವರದಿ ಸಲ್ಲಿಸಲು ಸೂಚಿಸಿದರು.

ನ.1 ರಂದು ಜರುಗಲಿರುವ ರಾಜ್ಯೊತ್ಸವದ ಭವ್ಯ ಮೆರವಣಿಗೆ ಮಾರ್ಗದುದ್ದಕ್ಕೂ ಕನ್ನಡ ನಾಡಿನ ಮಹನೀಯರ ಭಾವಚಿತ್ರಗಳನ್ನು ಅಳವಡಿಸುವುದರ ಜೊತೆಗೆ ರೂಪಕಗಳಿಗೆ ಪ್ರಶಸ್ತಿ ನೀಡಲಾಗುವುದು. ಬೆಳಗಾವಿಯ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅನುದಾನಕ್ಕಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲು ಜನರಿಗೆ ಅನುವು ಮಾಡಿಕೊಡುವಂತೆ  ಹೆಚ್ಚಿನ ಸ್ಥಳಾವಕಾಶ ಒದಗಿಸಬೇಕು ಹಾಗೂ ಸುವರ್ಣ ವಿಧಾನಸೌಧದ ಎದುರಿಗೆ 108 ಅಡಿಯ ಭುವನೇಶ್ವರಿ ದೇವಿಯ ಪ್ರತಿಮೆ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಸಲ್ಲಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು.

ಕರಾಳ ದಿನಾಚರಣೆಗೆ ವಿರೋಧ:

ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂಬ ಕನ್ನಡ ಪರ ಸಂಘಟನೆಗಳ ಮನವಿಗೆ ಸ್ಪಂಧಿಸಿದ ಜಿಲ್ಲಾಧಿಕಾರಿಗಳು ಈ ಬಾರಿ ಯಾವುದೇ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ನೀಡಲಾಗುವುದಿಲ್ಲ ಎಂದು ಸಭೆಗೆ ತಿಳಿಸಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿರುವ ವೇದಿಕೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ವೇದಿಕೆ ಸಿದ್ಧತೆ, ಧ್ವಜಾರೋಹಣ, ಆಮಂತ್ರಣ ಪತ್ರಿಕೆ, ಪಥ ಸಂಚಲನ, ಸಾಧಕರಿಗೆ ಸನ್ಮಾನ, ಮೆರವಣಿಗೆ, ರೂಪಕ ವಾಹನಗಳಿಗೆ ಅನುಮತಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಕುರಿತು ಚರ್ಚಿಸಲಾಯಿತು.

ವಿವಿಧ ಕನ್ನಡ ಪರ ಸಂಘಟನೆಯ ಅಧ್ಯಕ್ಷರು, ಪದಾಧಿಕಾರಿಗಳು ಮಾತನಾಡಿ, ಮೈಸೂರು ದಸರಾ ಮೆರವಣಿಗೆಯಲ್ಲಿ ಭಾಗವಹಿಸುವ ಜಿಲ್ಲೆಯ ರೂಪಕವನ್ನು ಈ ಬಾರಿ ಬೆಳಗಾವಿ ರಾಜ್ಯೋತ್ಸವ ಮೆರವಣಿಗೆಗೆ ತರಲು‌, ಬೆಂಗಳೂರಿನಿಂದ‌ ಬೆಳಗಾವಿಗೆ ಮೂರು ದಿನಗಳ ಕಾಲ ವಿಶೇಷ ರೈಲಿನ ವ್ಯವಸ್ಥೆ, ಮಹಾನಗರ ಪಾಲಿಕೆಯಿಂದ ಅಳವಡಿಸಿರುವ ನಾಮಫಲಕಗಳಲ್ಲಿ ದ್ವಿಭಾಷಾ ಬಳಸಲು, ಸುವರ್ಣ ವಿಧಾನ ಸೌಧದ ಮುಂದೆ 108 ಅಡಿಯ ಭುವನೇಶ್ವರಿ ತಾಯಿ ಕಂಚಿನ ಪ್ರತಿಮೆ ಸ್ಥಾಪಿಸಬೇಕು. ಬೆಳಗಾವಿ ರಾಜ್ಯೋತ್ಸವ ಇಡೀ ರಾಜ್ಯಕ್ಕೆ ಮಾದರಿಯಾಗಬೇಕು. ಮೆರವಣಿಗೆಯಲ್ಲಿ ಜಿಲ್ಲೆಯ, ರಾಜ್ಯದ ಸಂಸ್ಕೃತಿ ಬಿಂಬಿಸುವ ಕಾರ್ಯವಾಗಬೇಕು. ಪ್ರತಿ ವರ್ಷ ರಾಜ್ಯೋತ್ಸವಕ್ಕೆ ಸರ್ಕಾರದಿಂದ ಒಂದು ಕೋಟಿ ಅನುದಾನ ನೀಡುವ ಕುರಿತು ಪ್ರಸ್ತಾವನೆ ಸಲ್ಲಿಸಲು ಹಾಗೂ ನಗರದ ಪ್ರಮುಖ ಸ್ಥಳದಲ್ಲಿ ಇಮ್ಮಡಿ ಪುಲಕೇಶಿಯ ಪ್ರತಿಮೆಯನ್ನು ಸ್ಥಾಪಿಸಲು, ಕೃಷ್ಣದೇವರಾಯ ವೃತ್ತದಲ್ಕಿ ಕೃಷ್ಣದೇವರಾಯರ ಪ್ರತಿಮೆ ಸ್ಥಾಪಿಸಿ ಅಲ್ಲಿಂದಲೇ ರಾಜ್ಯೋತ್ಸವದ ಮೆರವಣಿಗೆಯನ್ನು ಪ್ರಾರಂಭಿಸುವ ಕುರಿತು ಸಲಹೆಗಳನ್ನು ನೀಡಿದರು.

ಸಭೆಯಲ್ಲಿ ನಗರ ಪೋಲಿಸ್ ಆಯುಕ್ತ ಪ್ರಕಾಶ ನಿಕಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಅಪರ‌ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಜಿಲ್ಲಾ‌ ಪಂಚಾಯತ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಕನ್ನಡಪರ ಸಂಘಟನೆಗಳು, ಪದಾಧಿಕಾರಿಗಳು ಹಾಜರಿದ್ದರು.

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular