ನವದೆಹಲಿ: ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಖಂಡಿಸಿ ಹಾಗೂ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಮತ್ತು ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ (ಎಐಎಸ್ಎ) ಇಂದು ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ, ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಾದ್ಯಂತ ಕಟ್ಟೆಚ್ಚರ ವಹಿಸಿದ್ದಾರೆ. ಅಲ್ಲದೇ ರಾತ್ರೋರಾತ್ರಿ 1,000ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ.
ಮಧ್ಯರಾತ್ರಿ 12:30ರ ಸುಮಾರಿಗೆ ಕಾರ್ಯಾಚರಣೆ ಕೈಗೊಂಡ ದೆಹಲಿ ಪೊಲೀಸರು ಸಾವಿರಾರು ಜನರನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆಯಲಾದವರ ಪೈಕಿ ಸುಮಾರು 250 ಮಂದಿ ದೆಹಲಿಯ ಆಗ್ನೇಯ (ಸೌತ್ ಈಸ್ಟ್) ಜಿಲ್ಲೆಗೆ ಸೇರಿದವರಾಗಿದ್ದಾರೆ. ವಿಶೇಷವಾಗಿ 2020ರ ಸಿಎಎ ವಿರೋಧಿ ಪ್ರತಿಭಟನೆಯ ಕೇಂದ್ರಬಿಂದುವಾಗಿದ್ದ ಶಾಹೀನ್ ಬಾಗ್ ಸುತ್ತಮುತ್ತಲಿನ ಪ್ರದೇಶಗಳಿಂದ ಈ ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇನ್ನುಳಿದಂತೆ ಉತ್ತರ ಪ್ರದೇಶದ ಗಡಿಭಾಗಕ್ಕೆ ಹೊಂದಿಕೊಂಡಿರುವ ಶಹದಾರಾ ಹಾಗೂ ಪೂರ್ವ ದೆಹಲಿ ಜಿಲ್ಲೆಗಳಿಂದ 100ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಮುಂಜಾಗ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಿಂದೆ ಪ್ರತಿಭಟನಾಕಾರರನ್ನು ಒಗ್ಗೂಡಿಸಿ ಕಾನೂನುಬಾಹಿರ ಪರಿಸ್ಥಿತಿ ಸೃಷ್ಟಿಸಿದ ಇತಿಹಾಸ ಹೊಂದಿರುವ ವ್ಯಕ್ತಿಗಳನ್ನು ಗುರುತಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಸಚಿವಾಲಯದಿಂದ ಮಹತ್ವದ ನಿರ್ದೇಶನ
ನವದೆಹಲಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಅಕ್ರಮ ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಗೆ ಕರೆ ನೀಡಿದ್ದು, ಇಂದು ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ವಿಪಕ್ಷಗಳು ಸಿಜೆಪಿ ಪ್ರತಿಭಟನೆಗೆ ಬೆಂಬಲ ಘೋಷಿಸಿದ್ದು, ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ.
ದೆಹಲಿಯ ಜಂತರ್ ಮಂತರ್ನಲ್ಲಿ ಸಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಕೇಂದ್ರ ಗೃಹ ಸಚಿವಾಲಯವು ಮಹತ್ವದ ನಿರ್ದೇಶನ ಹೊರಡಿಸಿದೆ. ಸಿಜೆಪಿ ಪ್ರತಿಭಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳಿಗೂ ಗೃಹ ಸಚಿವಾಲಯದ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.
ನವದೆಹಲಿಯ ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಿಜೆಪಿ ಪ್ರತಿಭಟನಾಕಾರರು ಬರುವ ಸಾಧ್ಯತೆ ಇರುವುದರಿಂದ ಆಯಾ ರಾಜ್ಯಗಳಲ್ಲೂ ಇಂತಹ ಆಂದೋಲನಗಳು ಗಲಭೆಗಳಿಗೆ ತಿರುಗಬಾರದು ಎಂದು ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶ ನೀಡಲಾಗಿದೆ. ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಸೂಚಿಸಲಾಗಿದೆ.
ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳನ್ನು ಗಮನಿಸಿ, ತಮ್ಮ ಸ್ಥಳಗಳಲ್ಲಿ ಅಂತಹ ಪ್ರತಿಭಟನೆಗಳನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ರಾಜ್ಯಗಳಿಗೆ ಎಚ್ಚರಿಕೆ ನೀಡಲಾಗಿದೆ.
ಇದರ ಜೊತೆಗೆ, ದೆಹಲಿಯ ಜಂತರ್ ಮಂತರ್ನಲ್ಲಿ ನಾಲ್ಕು ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ಇಂದು ಸಂಜೆ 6 ಗಂಟೆಯವರೆಗೆ ಯಾವುದೇ ಇಂಟರ್ನೆಟ್ ಸೌಲಭ್ಯ ಲಭ್ಯವಿರುವುದಿಲ್ಲ. ಪ್ರತಿಭಟನಾ ಸ್ಥಳದಿಂದ ಮಾಹಿತಿ ಹೊರಗೆ ಹೋಗುವುದನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂಬುದು ತಿಳಿದುಬಂದಿದೆ.
ಇನ್ನು ಸಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಅಗಿದೆ. ಮೆಟ್ರೋದ 45 ನಿಲ್ದಾಣಗಳಲ್ಲಿ ಪ್ರವೇಶ-ನಿರ್ಗಮನ ಬಂದ್ ಮಾಡಲಾಗಿದ್ದು, 75 ರೈಲುಗಳ ಸಂಚಾರ ಕೂಡ ರದ್ದಾಗಿದೆ.
ಕೆಲವು ಪ್ರದೇಶಗಳಲ್ಲಿ ಇಂಟರ್ನೆಟ್ ನಿರ್ಬಂಧ ಘೋಷಿಸಲಾಗಿದೆ. ಮಧ್ಯ ದೆಹಲಿಯಲ್ಲಿ BNSS ಸೆಕ್ಷನ್ 163 ಜಾರಿಗೊಳಿಸಲಾಗಿದೆ. ಜನಪಥ್, ಕರ್ತವ್ಯ ಪಥ್ ಕ್ರಾಸಿಂಗ್ ಸುತ್ತಮುತ್ತ ಇಂಟರ್ನೆಟ್ ಬಂದ್ಗೆ ಆದೇಶಿಸಲಾಗಿದೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯಾದ್ಯಂತ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಲಾಗಿದೆ. ಅಕ್ಟೋಬರ್ 8ರಿಂದ 12ರವರೆಗೆ ಸುಮಾರು 23 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವ ನಿರೀಕ್ಷೆಯಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಹೆಚ್ಚುವರಿ ಸಿಬ್ಬಂದಿಯನ್ನೂ ನಿಯೋಜಿಸಲು ಗೃಹ ಸಚಿವಾಲಯ ಕ್ರಮ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ನವದೆಹಲಿ ಜಿಲ್ಲೆಯನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರಮುಖ ಸ್ಥಳಗಳಲ್ಲಿ ಬಹುಹಂತದ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ. ಸಿಸಿಟಿವಿ ಮತ್ತು ಮುಖ ಗುರುತಿಸುವ ತಂತ್ರಜ್ಞಾನ ಹೊಂದಿರುವ ಕ್ಯಾಮೆರಾಗಳ ಮೂಲಕ ಜನರ ಸಂಚಾರದ ಮೇಲೆ ನಿಗಾ ಇರಿಸಲಾಗುತ್ತದೆ.
ದೆಹಲಿ-ನೋಯ್ಡಾ ಗಡಿಭಾಗದಲ್ಲೂ ಭದ್ರತೆ ಹೆಚ್ಚಿಸಲಾಗಿದೆ. ಚಿಲ್ಲಾ ಗಡಿಯಲ್ಲಿ ದೆಹಲಿ ಮತ್ತು ನೋಯ್ಡಾ ಪೊಲೀಸರ ಜೊತೆಗೆ ಗಡಿ ಭದ್ರತಾ ಪಡೆ (BSF) ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ. ರೈಲು ನಿಲ್ದಾಣಗಳು, ಬಸ್ ಟರ್ಮಿನಲ್ಗಳು ಮತ್ತು ಪ್ರಮುಖ ರಸ್ತೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

