ನವದೆಹಲಿ: ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ತಿದ್ದುಪಡಿ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸಲು ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಮತ್ತು ಅಖಿಲ ಭಾರತ ವಿದ್ಯಾರ್ಥಿಗಳ ಸಂಘಟನೆ (AISA) ಕರೆ ನೀಡಿವೆ. ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆದಿದ್ದು, ರಾಜಧಾನಿಯಾದ್ಯಂತ ಭಾರೀ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.
ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯಬೇಕಿದ್ದ CJP ಪ್ರತಿಭಟನೆಗೂ ಮುನ್ನ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುಗ್ರಾಮ ಪೊಲೀಸರ ಸಹಕಾರದೊಂದಿಗೆ ದೆಹಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.ಯೂಟ್ಯೂಬರ್ ಧ್ರುವ ರಾಥೀ ಮನೆಗೆ ಹೋದ 50 ಕ್ಕೂ ಹೆಚ್ಚು ಪೊಲೀಸರು ಗುರುಗ್ರಾಮದ ಮನೆಯಿಂದ ವಶಕ್ಕೆ ಪಡೆದುಕೊಂಡಿದ್ದಾರೆ.
ಜುಲೈ 20ರಂದು ನಡೆದ ಗೊಂದಲ ಮತ್ತು ಪೊಲೀಸರ ಕ್ರಮದ ನೆನಪು ಇನ್ನೂ ಹಸಿರಾಗಿರುವ ಹಿನ್ನೆಲೆಯಲ್ಲಿ, ಈ ಬಾರಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ದೆಹಲಿಯಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 20,000ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಶುಕ್ರವಾರ ರಾತ್ರಿಯಿಂದಲೇ ದೆಹಲಿ ಮೆಟ್ರೋದ 45 ನಿಲ್ದಾಣಗಳ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚಲಾಗಿದೆ. ದೆಹಲಿಯ ಎರಡು ಪ್ರಮುಖ ರೈಲು ನಿಲ್ದಾಣಗಳಿಗೆ ತೆರಳುವ ಕೆಲವು ರೈಲುಗಳ ಸಂಚಾರವನ್ನೂ ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.
ಪ್ರತಿಭಟನೆಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಪೊಲೀಸರು ನಗರದಾದ್ಯಂತ ಕಟ್ಟೆಚ್ಚರ ವಹಿಸಿದ್ದಾರೆ. ಆದರೆ, ಪೊಲೀಸರ ಅಡೆತಡೆಗಳ ನಡುವೆಯೂ ಪ್ರತಿಭಟನೆ ನಡೆಸುವುದಾಗಿ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ ಸ್ಪಷ್ಟಪಡಿಸಿದ್ದಾರೆ.
ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು
ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯಬೇಕಿದ್ದ CJP ಪ್ರತಿಭಟನೆಗೂ ಮುನ್ನ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುಮಾರು 150 ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ
ಬೆಳಗ್ಗೆ 9:35 ಕ್ಕೆ ದೆಹಲಿಯ ಕನ್ನಾಟ್ ಪ್ಲೇಸ್ನಲ್ಲಿ ಬ್ಯಾರಿಕೇಡ್ಗಳನ್ನು ದಾಟಿ ಜಂತರ್ ಮಂತರ್ ತಲುಪಲು ಯತ್ನಿಸಿದ ಸುಮಾರು 150 ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಂತರ್ ಮಂತರ್ ಸುತ್ತಲೂ ಹಾಕಲಾಗಿದ್ದ ಏಳು ಹಂತದ ಬ್ಯಾರಿಕೇಡ್ಗಳನ್ನು ದಾಟಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಸಮೀಪದಲ್ಲಿರುವ ಕನ್ನಾಟ್ ಪ್ಲೇಸ್ನ ಒಳ ವೃತ್ತದಲ್ಲೂ ಪೊಲೀಸರು ಪ್ರತಿಭಟನಾಕಾರರನ್ನು ಬೆನ್ನಟ್ಟಿ ವಾಹನಗಳಲ್ಲಿ ಕರೆದೊಯ್ದಿದ್ದಾರೆ.
ದೆಹಲಿ ರಸ್ತೆಗಳಲ್ಲಿ ಸ್ಪೈಕ್ ಸ್ಟ್ರಿಪ್ಗಳ ಅಳವಡಿಕೆ
ಪ್ರತಿಭಟನಾಕಾರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ದೆಹಲಿ–ಬದರ್ಪುರ ಗಡಿಯ ಸಮೀಪದ ಮೋಹನ್ ಎಸ್ಟೇಟ್ನಲ್ಲಿ ವಾಹನಗಳ ಸಂಚಾರವನ್ನು ನಿಯಂತ್ರಿಸಲು ರಸ್ತೆಗಳ ಮೇಲೆ ಸ್ಪೈಕ್ ಸ್ಟ್ರಿಪ್ಗಳನ್ನು ಅಳವಡಿಸಲಾಗಿದೆ.
ಬಂಧನಕ್ಕೂ ಸಿದ್ಧ ಎಂದ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ
ಪ್ರತಿಭಟನೆಗೆ ಸಂಬಂಧಿಸಿದಂತೆ ತಮ್ಮನ್ನು ಬಂಧಿಸಿದರೂ ಅಥವಾ ವಶಕ್ಕೆ ಪಡೆದರೂ ಹೋರಾಟ ಮುಂದುವರಿಸುವುದಾಗಿ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ ಹೇಳಿದ್ದಾರೆ.“ಅವರು ನನ್ನನ್ನು ವಶಕ್ಕೆ ಪಡೆಯಲು ಅಥವಾ ಬಂಧಿಸಲು ಬಯಸಿದರೆ ಹಾಗೆ ಮಾಡಲಿ. UAPA ಅಥವಾ NSA ಕಾಯ್ದೆಗಳನ್ನು ಜಾರಿಗೊಳಿಸಲಿ. ಆದರೆ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳಿಗಾಗಿ ಹಾಗೂ ದೇಶದ ಪ್ರಜಾಪ್ರಭುತ್ವವನ್ನು ಉಳಿಸಲು ನಾವು ಹೋರಾಡುತ್ತೇವೆ” ಎಂದು ಅವರು ಹೇಳಿದ್ದಾರೆ.
ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ದೀಪ್ಕೆ ಆರೋಪ
ಪ್ರತಿಭಟನೆಗೆ ಮುನ್ನ ದೆಹಲಿಯಲ್ಲಿ ಭಾರೀ ಭದ್ರತಾ ಕ್ರಮ ಕೈಗೊಂಡಿರುವುದನ್ನು ಪ್ರಶ್ನಿಸಿರುವ ಅಭಿಜೀತ್ ದೀಪ್ಕೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆರೋಪ ಮಾಡಿದ್ದಾರೆ.“ನರೇಂದ್ರ ಮೋದಿ ಮತ್ತು ಅಮಿತ್ ಶಾ ತಮ್ಮದೇ ದೇಶದ ಜನರ ವಿರುದ್ಧ ಯುದ್ಧ ಮಾಡಲು ಬಯಸುತ್ತಿದ್ದಾರೆಯೇ?” ಎಂದು ಅವರು ಪ್ರಶ್ನಿಸಿದ್ದಾರೆ.
ರೈಲಿನಲ್ಲಿ ಪ್ರಯಾಣಿಸುತ್ತಿರುವವರನ್ನು ವಶಕ್ಕೆ ಪಡೆಯುವ ಮೂಲಕ ಹಾಗೂ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಜನರಿಗೆ ಎಚ್ಚರಿಕೆ ನೀಡುವ ಮೂಲಕ ಸರ್ಕಾರ ಪ್ರತಿಭಟನೆಯನ್ನು ತಡೆಯಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
“ಪ್ರತಿಭಟಿಸುವುದು ನಮ್ಮ ಮೂಲಭೂತ ಹಕ್ಕು. ಸಂವಿಧಾನದ 19ನೇ ವಿಧಿಯು ಪ್ರಜಾಸತ್ತಾತ್ಮಕ ಮತ್ತು ಶಾಂತಿಯುತ ರೀತಿಯಲ್ಲಿ ಪ್ರತಿಭಟಿಸುವ ಹಕ್ಕನ್ನು ನೀಡುತ್ತದೆ. ನಾವು ಅದನ್ನೇ ಮಾಡಲು ಉದ್ದೇಶಿಸಿದ್ದೇವೆ” ಎಂದು ದೀಪ್ಕೆ ಹೇಳಿದ್ದಾರೆ.

