ಬೆಳಗಾವಿ: ಕಬ್ಬು ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು ಇಂದು ರಾಜ್ಯಾದ್ಯಂತ ರಾಷ್ಟ್ರೀಯ ಹೆದ್ದಾರಿ ಬಂದ್ ಗೆ ಕರೆ ನೀಡಿವೆ. ಪ್ರಮುಖವಾಗಿ ಕರ್ನಾಟಕ ಮಹಾರಾಷ್ಟ್ರ ರಾಷ್ಟ್ರೀಯ ಹೆದ್ದಾರಿ ಬಂದ್ ಗೆ ರೈತರು ಮುಂದಾಗಿದ್ದು, ಹಲವು ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಅಗುವ ಸಾಧ್ಯತೆ ದಟ್ಟವಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಹತ್ತರಗಿ ಟೋಲ್, ಹಿರೇಬಾಗೇವಾಡಿ ಹಾಗೂ ಕೊಗನೊಳ್ಳಿ ಬಳಿ ರೈತರು ಪ್ರತಿಭಟನೆಗೆ ಸಿದ್ಧತೆ ನಡೆದಿದ್ದು, ಪೊಲೀಸರು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ಸೇರಿದಂತೆ ಹಲವು ಮಾರ್ಗಗಳಲ್ಲಿ ವಾಹನ ಸಂಚಾರ ಬದಲಾವಣೆ ಮಾಡಿದ್ದಾರೆ. ಪರ್ಯಾಯ ಮಾರ್ಗಗಳ ಬಗ್ಗೆ ಮಾಹಿತಿ ಇಲ್ಲಿದೆ.
ದೆಹಲಿಯಲ್ಲಿ ಕೇಂದ್ರ ಸರ್ಕಾರದೊಂದಿಗೆ ನಡೆದ ಕಬ್ಬು ಬೆಳೆಗಾರರ ಸಭೆ ವಿಫಲವಾದ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಹೆದ್ದಾರಿ ಬಂದ್‌ಗೆ ಕರೆ ನೀಡಿದೆ. ಬೆಳಗಾವಿ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಧಾರವಾಡದಿಂದ ಬೆಳಗಾವಿ ಮೂಲಕ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳಲ್ಲಿ ಬದಲಾವಣೆ ಮಾಡಲಾಗಿದೆ.
ಧಾರವಾಡದಿಂದ ಬರುವ ವಾಹನಗಳು ಅಳ್ನಾವರ, ಖಾನಾಪುರ ಮಾರ್ಗವಾಗಿ ಬೆಳಗಾವಿ ಪ್ರವೇಶಿಸಬಹುದು. ಧಾರವಾಡದಿಂದ ಗೋಕಾಕಕ್ಕೆ ತೆರಳುವ ವಾಹನಗಳು ಬೆಳವಡಿ, ಬೈಲಹೊಂಗಲ ಮಾರ್ಗ ಬಳಸುವಂತೆ ಸೂಚಿಸಲಾಗಿದೆ.
ಮಹಾರಾಷ್ಟ್ರದಿಂದ ಹುಬ್ಬಳ್ಳಿ ಕಡೆಗೆ ಬರುವ ವಾಹನಗಳು ಕಾಗಲ್, ನಿಪ್ಪಾಣಿ, ಚಿಕ್ಕೋಡಿ, ಗೋಕಾಕ ಮತ್ತು ಸವದತ್ತಿ ಮಾರ್ಗವಾಗಿ ಧಾರವಾಡ ತಲುಪುವಂತೆ ಸಂಚಾರ ಬದಲಾವಣೆ ಮಾಡಲಾಗಿದೆ. ಭಾರೀ ವಾಹನಗಳು ಹಾಗೂ ಲಘು ವಾಹನಗಳ ಸಂಚಾರಕ್ಕೂ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಹೆದ್ದಾರಿ ತಡೆ ನಡೆಸಲು ರೈತರು ಮುಂದಾಗಿದ್ದಾರೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿ ರೈತ ಮುಖಂಡ ಪ್ರಕಾಶ ನಾಯಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಚಿಕ್ಕೋಡಿ ತಾಲೂಕಿನ ಕೊಗನೊಳ್ಳಿ ಟೋಲ್ ಬಳಿ ಮಹಾರಾಷ್ಟ್ರದ ರೈತರೂ ಧರಣಿ ನಡೆಸಲು ಸಜ್ಜಾಗಿದ್ದಾರೆ.
ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಬೇಡಿಕೆ ಮುಂದಿಟ್ಟು ಕರ್ನಾಟಕದ ರೈತರ ನಿಯೋಗ ದೆಹಲಿಯಲ್ಲಿ ಕೇಂದ್ರ ಸರ್ಕಾರದೊಂದಿಗೆ ಸೋಮವಾರ ಸಭೆ ನಡೆಸಿತ್ತು. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ರಾಜ್ಯದ ಸಹಕಾರ ಸಚಿವ ಲಕ್ಷ್ಮಣ ಸವದಿ ಕೂಡ ಭಾಗವಹಿಸಿದ್ದರು. ಆದರೆ, ಸಭೆಯಲ್ಲಿ ಬೇಡಿಕೆ ಈಡೇರಿಸುವ ಬಗ್ಗೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ರೈತರು ಸಿಡಿದೆದ್ದಿದ್ದಾರೆ.
ರೈತರಿಗೆ ನೀಡಿದ ಭರವಸೆಯನ್ನು ಕೇಂದ್ರ ಸರ್ಕಾರ ಈಡೇರಿಸಿಲ್ಲ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರು ಒಗ್ಗಟ್ಟಾಗಿ ಹೋರಾಟ ನಡೆಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

