ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರಿಗೆ ಐದು ದಿನಗಳ ನ್ಯಾಯಾಂಗ ಬಂಧನ ವಿಧಿಸಿರುವುದನ್ನು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ.
ಜಂತರ್ ಮಂತರ್ನಲ್ಲಿ ತ್ರಿವರ್ಣ ಧ್ವಜ ಹಿಡಿದು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದಕ್ಕೆ ಯುವ ನಾಯಕರನ್ನು ಜೈಲಿಗೆ ಕಳುಹಿಸಿರುವುದು ರಾಜಕೀಯ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಸಿಜೆಪಿ ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾಗೆ ಐದು ದಿನಗಳ ನ್ಯಾಯಾಂಗ ಬಂಧನ ವಿಧಿಸಿರುವುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದು, “ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನದ ಕೃತ್ಯ” ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಸಾಂವಿಧಾನಿಕ ಹಕ್ಕುಗಳಿಗಾಗಿ ಹೋರಾಡುವ ನಾಗರಿಕರ ಧ್ವನಿಯನ್ನು ಹತ್ತಿಕ್ಕಬಾರದು ಎಂದು ಅವರು ಪ್ರತಿಪಾದಿಸಿದ್ದಾರೆ.
ಇತ್ತೀಚೆಗೆ ಪ್ರತಿಭಟನೆ ನಡೆಸಲು ಅನುಮತಿ ಇರುವ ಸ್ಥಳಗಳ ಪಟ್ಟಿಯಿಂದ ಕೈಬಿಡಲಾಗಿದ್ದ ದೆಹಲಿಯ ಜಂತರ್ ಮಂತರ್ಗೆ ಅಕ್ರಮವಾಗಿ ಪ್ರವೇಶಿಸಿದ ಆರೋಪದ ಮೇಲೆ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ಜೈಲಿಗೆ ಕಳುಹಿಸಲಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, “ಜಂತರ್ ಮಂತರ್ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಾ ತ್ರಿವರ್ಣ ಧ್ವಜವನ್ನು ಹಾರಿಸುವುದು ಅಪರಾಧವಲ್ಲ. ಇದಕ್ಕಾಗಿ ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನದ ಕೃತ್ಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿವಿಧ ಸಂಘಟನೆಗಳ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ ವಿದ್ಯಾರ್ಥಿಗಳು, ಯುವಜನರು, ಪತ್ರಕರ್ತರು ಮತ್ತು ಇಂಡಿಯಾ ಮೈತ್ರಿಕೂಟದ ಸದಸ್ಯರು ಒಂದೇ ಉದ್ದೇಶಕ್ಕಾಗಿ ಒಗ್ಗಟ್ಟಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
“ಬೇರೆ ಬೇರೆ ಬ್ಯಾನರ್ಗಳು, ಆದರೆ ಉದ್ದೇಶ ಒಂದೇ. ತಮ್ಮ ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ನಾಗರಿಕರ ಎಲ್ಲ ಪ್ರತಿಭಟನೆಗಳೂ ಒಂದೇ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
ಜಂತರ್ ಮಂತರ್ ಭಾರತದ ಜನರಿಗೆ ಸೇರಿದ್ದಾಗಿದೆ ಎಂದು ಪ್ರತಿಪಾದಿಸಿರುವ ಅವರು, ಪ್ರತಿಭಟನೆ ನಡೆಸುವ ಹಕ್ಕನ್ನು ಮರಳಿ ಪಡೆಯುವುದಾಗಿ ಹೇಳಿದ್ದಾರೆ.
ಸಿಜೆಪಿಯ ಸೌರವ್ ದಾಸ್, ಅಶುತೋಷ್ ರಂಕಾ 5 ದಿನ ತಿಹಾರ್ ಜೈಲಿಗೆ; ಅಜಿಂಕ್ಯ ಶಿಂಡೆಗೆ ಬಿಡುಗಡೆ
ಜಂತರ್ ಮಂತರ್ಗೆ ಅನುಮತಿಯಿಲ್ಲದೆ ಪ್ರವೇಶಿಸಿದ ಆರೋಪದ ಮೇಲೆ ವಶಕ್ಕೆ ಪಡೆಯಲಾಗಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ಐದು ದಿನಗಳ ಕಾಲ ತಿಹಾರ್ ಜೈಲಿಗೆ ಕಳುಹಿಸಲಾಗಿದೆ. ಅವರ ಸಹಚರ ಅಜಿಂಕ್ಯ ಶಿಂಡೆ ಅವರು ಶಾಂತಿ ಕಾಪಾಡುವ ಬಾಂಡ್ಗೆ ಸಹಿ ಹಾಕಿದ ಬಳಿಕ ಬಿಡುಗಡೆಗೊಂಡಿದ್ದಾರೆ.
ಇತ್ತೀಚೆಗೆ ಪ್ರತಿಭಟನೆ ನಡೆಸಲು ಅಧಿಕೃತವಾಗಿ ಗೊತ್ತುಪಡಿಸಲಾಗಿದ್ದ ಸ್ಥಳಗಳ ಪಟ್ಟಿಯಿಂದ ಜಂತರ್ ಮಂತರ್ ಅನ್ನು ಕೈಬಿಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿಗೆ ಅಕ್ರಮವಾಗಿ ಪ್ರವೇಶಿಸಿ, ಈ ಹಿಂದೆ ನೀಡಿದ್ದ ಶಾಂತಿ ಕಾಪಾಡುವ ಭರವಸೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಬುಧವಾರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂವರು ನಾಯಕರನ್ನು ಬುಧವಾರ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (SEM) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಕಾನೂನು ಉಲ್ಲಂಘನೆಯನ್ನು ಪದೇಪದೇ ಮಾಡಿರುವುದು ಹಾಗೂ ಮತ್ತೆ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುವ ಅಥವಾ ಇತರರನ್ನು ಪ್ರಚೋದಿಸುವ ಸಾಧ್ಯತೆಯಿದೆ ಎಂಬ ಆತಂಕದ ಹಿನ್ನೆಲೆಯಲ್ಲಿ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಬಂಧನಗಳ ಬೆನ್ನಲ್ಲೇ ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲು ಸಿಜೆಪಿ ಸಭೆ ನಡೆಸಲು ಸಿದ್ಧತೆ ನಡೆಸಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪ ಹಾಗೂ ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಕೈಬಿಟ್ಟಿರುವುದನ್ನು ವಿರೋಧಿಸಿ ಪಕ್ಷವು ಪ್ರತಿಭಟನೆ ನಡೆಸುತ್ತಿದೆ.
ಇನ್ನು, ಮೂವರ ವಿರುದ್ಧವೂ ಅಕ್ರಮ ಪ್ರವೇಶ, ನಿಷೇಧಾಜ್ಞೆ ಉಲ್ಲಂಘನೆ, ಶಾಂತಿ ಕಾಪಾಡುವ ಬಾಂಡ್ ಉಲ್ಲಂಘನೆ ಮತ್ತು ಸರ್ಕಾರಿ ನೌಕರರು ತಮ್ಮ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ ಆರೋಪಗಳಡಿ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

