ಬೆಂಗಳೂರು: ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಗೈದ್ದು, ರಾಜ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಯತ್ನಾಳ್ ಅವರನ್ನು ಭೇಟಿಯಾದ ವಿಚಾರವಾಗಿ ಬಿ.ವೈ.ವಿಜಯೇಂದ್ರ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಖಾಸಗಿ ಕಾರ್ಯಕ್ರಮದ ನಿಮಿತ್ತ ಹುಬ್ಬಳ್ಳಿಗೆ ತೆರಳಿದ್ದ ವೇಳೆ ಜೈನ ಮುನಿಗಳ ಧಾರ್ಮಿಕ ಸಭೆಯಲ್ಲಿ ಇಬ್ಬರೂ ಭಾಗಿಯಾಗಿದ್ದೆವು. ಬಳಿಕ ಅನಿರೀಕ್ಷಿತವಾಗಿ ಸ್ನೇಹಿತರೊಬ್ಬರ ಮನೆಯಲ್ಲಿ ಭೇಟಿಯಾದೆವು. ಮುಂದೇನು ಆಗುತ್ತದೆ ಎಂಬುದನ್ನು ನೋಡೋಣ ಎಂದು ತಿಳಿಸಿದರು.
ಯತ್ನಾಳ್ ಭೇಟಿ ವಿಚಾರ ರಾಜ್ಯ ರಾಜಕೀಯದಲ್ಲಿ, ಅದರಲ್ಲೂ ಬಿಜೆಪಿ ಆಂತರಿಕ ವಲಯದಲ್ಲಿ ಕಳೆದ ಎರಡು ದಿನಗಳಿಂದ ತೀವ್ರ ಚರ್ಚೆಗೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ವೈ. ವಿಜಯೇಂದ್ರ ವಿರುದ್ಧ ಯತ್ನಾಳ್ ಹಲವು ಬಾರಿ ಬಹಿರಂಗವಾಗಿ ತೀವ್ರ ಟೀಕೆಗಳನ್ನು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಉಭಯ ನಾಯಕರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಯತ್ನಾಳ್ ಭೇಟಿಯ ಮುಂದಿನ ಬೆಳವಣಿಗೆಗಳ ಬಗ್ಗೆ ಈಗಲೇ ಯಾವುದೇ ನಿರ್ಧಾರಕ್ಕೆ ಬರುವ ಬದಲು, ಮುಂದೇನು ಆಗುತ್ತದೆ ಎಂಬುದನ್ನು ಕಾದು ನೋಡೋಣ ಎಂದು ವಿಜಯೇಂದ್ರ ಹೇಳಿದ್ದಾರೆ.
.ಇದೇ ವೇಳೆ ರಾಜ್ಯದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ಕುರಿತು ಮಾತನಾಡಿದ ವಿಜಯೇಂದ್ರ, ರೈತರಿಗೆ ನ್ಯಾಯ ಒದಗಿಸುತ್ತಿರುವುದು ಎನ್ಡಿಎ ಸರ್ಕಾರ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ (MSP) ಜಾರಿಗೆ ತಂದಿದ್ದು, ಎಥೆನಾಲ್ ಉತ್ಪಾದನೆಗೆ ಅವಕಾಶ ಕಲ್ಪಿಸುವುದರ ಜೊತೆಗೆ ಆರ್ಥಿಕ ನೆರವನ್ನೂ ನೀಡಿದೆ ಎಂದು ತಿಳಿಸಿದ್ದಾರೆ.
ಕಬ್ಬಿನ ಬೆಲೆ ವಸೂಲಿ ಅಥವಾ ರಿಕವರಿ ವಿಚಾರದಲ್ಲಿ ರಾಜ್ಯ ಸರ್ಕಾರಗಳಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ. ಈಗಾಗಲೇ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಹಾಗೂ ಶಿವರಾಜ್ ಸಿಂಗ್ ಚೌಹಾಣ್ ರೈತರೊಂದಿಗೆ ಮಾತುಕತೆ ನಡೆಸಿದ್ದಾರೆ. ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಸಮಿತಿಯೊಂದನ್ನು ರಚಿಸಿದ್ದು, ಆ ಸಮಿತಿ ಶೀಘ್ರದಲ್ಲೇ ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಹೇಳಿದರು.

