ಚಿಕ್ಕಬಳ್ಳಾಪುರ: ಆಮಿಷ ತೋರಿಸಿ 14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಆಕೆಯ ಭಾವನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲ್ಲೂಕಿನ ಪಾತಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಚೇಳೂರು ತಾಲೂಕಿನ ಗ್ರಾಮದ ಯುವತಿಯನ್ನು ಆರು ವರ್ಷದ ಹಿಂದೆ ಆರೋಪಿ ಮದುವೆಯಾಗಿದ್ದು, ಅತ್ತೆಯ ಮನೆಯಲ್ಲೇ ನೆಲೆಸಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಪತ್ನಿಯ ತಂಗಿಯಾಗಿರುವ 14 ವರ್ಷದ ಬಾಲಕಿಗೆ ಆಮಿಷ ತೋರಿಸಿ ದೈಹಿಕ ಸಂಪರ್ಕ ಬೆಳೆಸಿದ್ದು, ಆಕೆ ಗರ್ಭಿಣಿಯಾಗಿದ್ದಾಳೆ.
ಬಾಲಕಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಆಕೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ವೈದ್ಯರು ಪರೀಕ್ಷಿಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ತಕ್ಷಣವೇ ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಮೂಲಕ ಜಿಲ್ಲಾ ಬಾಲ ಮಂದಿರಕ್ಕೆ ಕಳುಹಿಸಲಾಗಿದೆ.
ಬಾಲಕಿ ನೀಡಿದ ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಅರೆಸ್ಟ್
ರಾಯಚೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿ, ಫೋಟೋವನ್ನು ತಿರುಚಿ ಹಂಚಿಕೊಂಡ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಸಿಂಧನೂರು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಿಂಧನೂರು ತಾಲೂಕಿನ ಹುಡಾ ಗ್ರಾಮದ ನಿವಾಸಿ ಪಂಪೇಶ್ ಪಂಡಿತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಆರೋಪಿ ಪಂಪೇಶ್, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಫೋಟೋಗೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಮುಖವನ್ನು ಎಡಿಟ್ ಮಾಡಿ ಅಳವಡಿಸಿ, ತಿರುಚಿದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಸಚಿವರ ವಿರುದ್ಧ ಅವಹೇಳನಕಾರಿ ಬರಹವನ್ನು ಪೋಸ್ಟ್ ಮಾಡಿರುವುದಾಗಿಯೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ರಾಮಣ್ಣ ಗೋನವಾರ ಎಂಬುವರು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ತನಿಖೆಯ ಭಾಗವಾಗಿ ಆರೋಪಿ ಪಂಪೇಶ್ ಪಂಡಿತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆ: ಅಕ್ಟೋಬರ್ 23 ರಂದು ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ
ದಾವಣಗೆರೆ: ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಮತದಾನವು 2026ರ ಅಕ್ಟೋಬರ್ 23 ರ ಶುಕ್ರವಾರ ನಡೆಯಲಿರುವುದರಿಂದ, ಅರ್ಹಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಶುಕ್ರವಾರ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ
ಮತದಾರರು ಚುನಾವಣೆಯ ಮತದಾನದಲ್ಲಿ ಭಾಗವಹಿಸಲು ಪೂರ್ವಾನುಮತಿಯನ್ನು ಪಡೆಯುವ ಷರತ್ತಿಗೊಳಪಟ್ಟು, ರಜೆ ಮಂಜೂರು ಮಾಡಲು ಅಧಿಕಾರವುಳ್ಳ ಪ್ರಾಧಿಕಾರಿಗಳು ಈ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಬೇಕೆಂದು ಅದೇಶದಲ್ಲಿ ತಿಳಿಸಲಾಗಿದೆ.

