ಉಡುಪಿ: ಕಾರು ಹಾಗೂ ಸೈಕಲ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್‌ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಕೋಟ ಮಣೂರು ನಿವಾಸಿ, ಆರ್‌ಎಸ್‌ಎಸ್ ಮುಖಂಡ ಗುರುದಾಸ್ ಶೆಣೈ ಎಂದು ಗುರುತಿಸಲಾಗಿದೆ. ಗುರುದಾಸ್ ಶೆಣೈ ಅವರು ಕೋಟ ಜಂಕ್ಷನ್‌ನಲ್ಲಿ ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಕುಂದಾಪುರದತ್ತ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಸೈಕಲ್ ಸವಾರ ರಸ್ತೆಗೆ ಎಸೆಯಲ್ಪಟ್ಟು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದಲ್ಲಿ ಕಾರು ಚಾಲಕ, ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೋಟದ ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಕೋಟ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸಿದ್ದಾರೆ.
ಇಂಟರ್ವ್ಯೂ ಗೆ ತೆರಳುತ್ತಿದ್ದಾಗ ಭೀರ ಕಾರು ಅಪಘಾತ: ಇಬ್ಬರು ಯುವತಿಯರು ಸ್ಥಳದಲ್ಲೇ ದುರ್ಮರಣ
ತುಮಕೂರು: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾತಾಲೂಕಿನ ತಾವರೆಕೆರೆಯಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು, ಡಿವೈಡರ್ ಗೆ ಗುದ್ದಿ ಪಲ್ಟಿಯಾಗಿ ಬಿದ್ದ ಪರಿಣಾಮ ಇಬ್ಬರು ಯುವತಿಯರು ಸ್ಥಳದಲ್ಲೇ ಮ್ರಿಉತಪಟ್ಟಿದ್ದಾರೆ. ಎರಡೂ ಕಾರುಗಳಲ್ಲಿದ್ದ ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಿ.ಫಾರ್ಮ್ ಮುಗಿಸಿದ್ದ ಮೂವರು ಯುವತಿಯರು ಜಾಬ್ ಇಂಟರ್ವ್ಯೂ ಗೆಂದು ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಡಿವೈಡರ್ ಗೆ ಗುದ್ದಿ ಪಲ್ಟಿಯಾಗಿದ್ದು, ಈ ದುರಂತಕ್ಕೆ ಕಾರಣವಾಗಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ನಿಸರ್ಗ (20) ಹಾಗೂ ರೂಪಾ (21) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನೋರ್ವ ಯುವತಿ ಹಾಗೂ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಮತ್ತೊಂದು ಕಾರಿನಲ್ಲಿದ್ದ ನಾಲ್ವರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಿ ಫಾರ್ಮ್ ಮುಗಿಸಿ ಕೆಲಸ ಹುಡುಕುತ್ತಿದ್ದ ಮೂವರು ಯುವತಿಯರು ಬೆಂಗಳೂರಿನಲ್ಲಿ ಜಾಬ್ ಇಂಟರ್ವ್ಯೂ ಇದೆ ಎಂದು ತುಮಕೂರಿನಿಂದ ಕಾರು ಮಾಡಿಕೊಂಡು ಬೆಂಗಳೂರಿಗೆ ಬರುತ್ತಿದ್ದರು. ಒಳ್ಳೆಯ ಕೆಲಸದ ಕನಸು ಕಾಣುತ್ತ ಬದುಕನ್ನು ರೂಪಿಸಿಕೊಳ್ಳುವ ತವಕದಲ್ಲಿದ್ದ ಯುವತಿಯರು, ಮಾರ್ಗ ಮಧ್ಯೆಯೇ ಅಪಘಾತಕ್ಕೆ ಬಲಿಯಾಗಿರುವುದು ನಿಜಕ್ಕೂ ದುರಂತವೇ ಸರಿ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

