ಶಿವಮೊಗ್ಗ: ಸಮಾಜವಾದಿ ಚಿಂತಕ, ಅಭಿವೃದ್ಧಿಯ ಹರಿಕಾರ, ಬಡವರ ಬಂಧು ಹಾಗೂ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ 94ನೇ ಜನ್ಮದಿನೋತ್ಸವವನ್ನು ಎಸ್. ಬಂಗಾರಪ್ಪ ಫೌಂಡೇಶನ್ ಮತ್ತು ಎಸ್. ಬಂಗಾರಪ್ಪ ವಿಚಾರ ವೇದಿಕೆಯ ಸಂಯುಕ್ತಾಶ್ರಯದಲ್ಲಿ ಸೊರಬದ ಬಂಗಾರಧಾಮದಲ್ಲಿ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.
ಎಸ್. ಬಂಗಾರಪ್ಪ ಅವರ ಸ್ಮರಣಾರ್ಥ ಪ್ರತಿ ವರ್ಷ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ನೀಡಲಾಗುವ ಪ್ರತಿಷ್ಠಿತ ಬಂಗಾರ ಪ್ರಶಸ್ತಿಯನ್ನು ಪ್ರಸಕ್ತ ಸಾಲಿನಲ್ಲಿ ನಾಲ್ವರು ಗಣ್ಯರಿಗೆ ಪ್ರದಾನ ಮಾಡಿ ಗೌರವಿಸಲಾಯಿತು.
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ತಮ್ಮ ತಂದೆ ಎಸ್. ಬಂಗಾರಪ್ಪ ಅವರ ಸ್ಮರಣಾರ್ಥ ಈ ಪ್ರಶಸ್ತಿಯನ್ನು ಆರಂಭಿಸಿದ್ದು, 2012ರಿಂದ ನಿರಂತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಪ್ರಸಕ್ತ ಸಾಲಿನಲ್ಲಿ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಪ್ರೊ. ನಟರಾಜ್ ಹುಳಿಯಾರ್ ಅವರಿಗೆ ಸಾಹಿತ್ಯ ಬಂಗಾರ ಪ್ರಶಸ್ತಿ, ರಂಗಭೂಮಿ ಕ್ಷೇತ್ರದ ಸಾಧನೆಗಾಗಿ ಕಲಬುರಗಿಯ ಶೇಖ್ ಮಾಸ್ತರ್ ಅವರಿಗೆ ರಂಗ ಬಂಗಾರ ಪ್ರಶಸ್ತಿ, ಸೇವಾ ಕ್ಷೇತ್ರದ ಸಾಧನೆಗಾಗಿ ಚಾಮರಾಜನಗರದ ಪ್ರೊ. ಜಿ.ಎಸ್. ಜಯದೇವ ಅವರಿಗೆ ಸೇವಾ ಬಂಗಾರ ಪ್ರಶಸ್ತಿ ಹಾಗೂ ಕ್ರೀಡಾ ಕ್ಷೇತ್ರದ ಸಾಧನೆಗಾಗಿ ರಾಷ್ಟ್ರೀಯ ಕಬಡ್ಡಿ ತರಬೇತುದಾರ ಬಿ.ಸಿ. ರಮೇಶ್ ಅವರಿಗೆ ಕ್ರೀಡಾ ಬಂಗಾರ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಬಂಗಾರ ಪ್ರಶಸ್ತಿ ಪುರಸ್ಕೃತರಿಗೆ ನಗದು ರೂಪದಲ್ಲಿ ತಲಾ ಒಂದು ಲಕ್ಷ ರೂಪಾಯಿ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್ ಹಾಗೂ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಸಣ್ಣ ನೀರಾವರಿ ಸಚಿವ ಅಜಯ್ ಧರ್ಮ ಸಿಂಗ್ ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಲಕ್ಷಾಂತರ ಬಂಗಾರಪ್ಪರನ್ನು ಪಡೆದುಕೊಂಡಿದ್ದೇನೆ: ಮಧು ಬಂಗಾರಪ್ಪ
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, “ಇದು ನನ್ನ ತಂದೆ ಎಸ್. ಬಂಗಾರಪ್ಪ ಅವರ 94ನೇ ಜನ್ಮದಿನೋತ್ಸವದ ಕಾರ್ಯಕ್ರಮ. ಇದು ಕೇವಲ ಕುಟುಂಬದ ಕಾರ್ಯಕ್ರಮವಲ್ಲ; ಬಂಗಾರಪ್ಪ ಅವರ ಅಭಿಮಾನಿಗಳ ಕಾರ್ಯಕ್ರಮ. ಬಂಗಾರಪ್ಪ ಅವರನ್ನು ರೂಪಿಸಿದ್ದು ಸೊರಬದ ಜನತೆ. ಇಲ್ಲಿನ ಜನರು ಅವರಿಗೆ ತಮ್ಮ ಹೃದಯದಲ್ಲಿ ವಿಶೇಷ ಸ್ಥಾನ ನೀಡಿದ್ದಾರೆ,” ಎಂದರು.
ನನ್ನ ತಂದೆಯ ಕಪ್ಪು ಕನ್ನಡಕದ ಹಿಂದೆ ಸಾವಿರಾರು ಕನಸುಗಳಿದ್ದವು. ನಾನು ಒಬ್ಬ ಬಂಗಾರಪ್ಪ ಅವರನ್ನು ಕಳೆದುಕೊಂಡಿರಬಹುದು. ಆದರೆ, ಲಕ್ಷಾಂತರ ಬಂಗಾರಪ್ಪ ಅವರನ್ನು ಪಡೆದುಕೊಂಡಿದ್ದೇನೆ. ಜನರ ಪ್ರೀತಿ ಮತ್ತು ಅಭಿಮಾನದಲ್ಲಿ ಅವರು ಇಂದಿಗೂ ಜೀವಂತವಾಗಿದ್ದಾರೆ ಎಂದು ಭಾವುಕರಾಗಿ ನುಡಿದರು.
ಕಳೆದ ಎಂಟು ವರ್ಷಗಳಿಂದ ಬಂಗಾರಧಾಮವನ್ನು ನಿರ್ಮಿಸಿ ಅಭಿವೃದ್ಧಿಪಡಿಸುತ್ತಿದ್ದೇನೆ. ಇಂದು ಇದು ಸರ್ಕಾರದಿಂದ ಮಾನ್ಯತೆ ಪಡೆದ ಪ್ರವಾಸಿ ತಾಣವಾಗಿದೆ. ಬಂಗಾರಪ್ಪ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ವೀಕರಿಸುವ ಸಾಧಕರು ನಮಗೆಲ್ಲ ಹೆಮ್ಮೆಯ ಸಂಗತಿ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಗೌರವಿಸುವುದು ಈ ಪ್ರಶಸ್ತಿಯ ಮುಖ್ಯ ಉದ್ದೇಶ ಎಂದು ತಿಳಿಸಿದರು.
ಜಾನಪದ ಝೇಂಕಾರ, ರಸಮಂಜರಿ
ಜನ್ಮದಿನೋತ್ಸವದ ಅಂಗವಾಗಿ ರಾಜ್ಯಮಟ್ಟದ ಪ್ರಸಿದ್ಧ ಜಾನಪದ ಕಲಾವಿದರಿಂದ ಜಾನಪದ ಝೇಂಕಾರ ಕಾರ್ಯಕ್ರಮ ನಡೆಯಿತು. ಬಳಿಕ ಲತಾ ಕ್ರಿಯೇಷನ್ಸ್ ವತಿಯಿಂದ ‘ಎದೆ ತುಂಬಿ ಹಾಡುವೆನು’ ರಸಮಂಜರಿ ಕಾರ್ಯಕ್ರಮ ಪ್ರೇಕ್ಷಕರ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯೆ ಬಿಲ್ಕಿಶ್ ಬಾನು, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮೆಹರೂಜ್ ಖಾನ್, ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನಗೌಡ, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ಅಧ್ಯಕ್ಷ ಸಿ.ಜಿ. ಮಧುಸೂದನ್, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಸಿ. ಯೋಗೇಶ್, ಬಂಗಾರಪ್ಪ ವಿಚಾರ ವೇದಿಕೆ ಅಧ್ಯಕ್ಷ ವೇಣುಗೋಪಾಲ ನಾಯಕ್, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಡಾ. ಕೆ.ವಿ. ನಾಗರಾಜ ಮೂರ್ತಿ, ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರ ಪುತ್ರ ಮಹಿಮಾ ಪಾಟೀಲ್ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಎಸ್. ಬಂಗಾರಪ್ಪ ಅವರ ಅಭಿಮಾನಿಗಳು ಉಪಸ್ಥಿತರಿದ್ದರು.

