ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾರರು ನೀಡಿರುವ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ. ಚುನಾವಣೆಯ ಫಲಿತಾಂಶದ ಬಗ್ಗೆ ಅಧ್ಯಯನ ನಡೆಸಿ, ಲೋಪಗಳಿದ್ದರೆ ಸರಿಪಡಿಸಿಕೊಳ್ಳುವ ಕೆಲಸ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಒಂದು ಸ್ಥಾನ ಸಿಗುವ ನಿರೀಕ್ಷೆ ಇತ್ತು. ಆದರೆ ಮತದಾರರು ತಮ್ಮದೇ ಆದ ಸಂದೇಶ ನೀಡಿದ್ದಾರೆ. ನಮಗೆ ಮತಗಳು ಉತ್ತಮವಾಗಿಯೇ ಬಂದಿವೆ. ಈ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದರು.
ಪರಿಷತ್ ಚುನಾವಣೆಯ ಫಲಿತಾಂಶವನ್ನು ಮುಂಬರುವ ಚುನಾವಣೆಗಳಿಗೆ ಮುನ್ಸೂಚನೆ ಎಂದು ವಿರೋಧ ಪಕ್ಷಗಳು ಹೇಳುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಚನ್ನಪಟ್ಟಣ ಮತ್ತು ಶಿಗ್ಗಾವಿ ಚುನಾವಣೆಗಳ ಫಲಿತಾಂಶಗಳನ್ನು ಕೂಡ ಮುನ್ಸೂಚನೆ ಎಂದು ಪರಿಗಣಿಸಬೇಕಲ್ಲವೇ? ಈ ಬಗ್ಗೆಯೂ ವಿರೋಧ ಪಕ್ಷಗಳು ಮಾತನಾಡಬೇಕಲ್ಲವೇ? ಎಂದು ಪ್ರಶ್ನಿಸಿದರು.
ಇದೇ ವೇಳೆ, ಬಲಿಪಾಡ್ಯಮಿಯಂದು ನರಕಾಸುರನ ಸಂಹಾರ ಆರಂಭವಾಗಲಿದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಸಂಕ್ಷಿಪ್ತವಾಗಿ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, “ದೇವರು ಒಳ್ಳೆಯದು ಮಾಡಲಿ” ಎಂದು ಹೇಳಿದರು.

