HomeKarnatakaನಮ್ಮ ನಿರೀಕ್ಷೆಗೆ ವಿರುದ್ಧವಾಗಿ ಫಲಿತಾಂಶ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ

ನಮ್ಮ ನಿರೀಕ್ಷೆಗೆ ವಿರುದ್ಧವಾಗಿ ಫಲಿತಾಂಶ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ

ಬೆಂಗಳೂರು: ವಿಧಾನ ಪರಿಷತ್ತಿನ ನಾಲ್ಕೂ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ನಮಗಿತ್ತು. ಆದರೆ ಚುನಾವಣಾ ಫಲಿತಾಂಶ ನಮ್ಮ ನಿರೀಕ್ಷೆಗೆ ವಿರುದ್ಧವಾಗಿ ಬಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

ಈ ಫಲಿತಾಂಶವನ್ನು ಕೇವಲ ಚುನಾವಣಾ ಹಿನ್ನಡೆಯಾಗಿ ಪರಿಗಣಿಸದೆ, ಕಾಂಗ್ರೆಸ್ ಪಕ್ಷದ ಪಾಲಿಗೆ ಗಂಭೀರ ಆತ್ಮಾವಲೋಕನದ ಸಂದರ್ಭವಾಗಿ ಸ್ವೀಕರಿಸಿದ್ದೇವೆ. ಸೋಲಿನ ಹಿಂದಿರುವ ರಾಜಕೀಯ ಹಾಗೂ ಸಂಘಟನಾತ್ಮಕ ಕಾರಣಗಳ ಕುರಿತು ಸಮಗ್ರ ಪರಾಮರ್ಶೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

ಶಿಕ್ಷಕರು ಮತ್ತು ಪದವೀಧರರು ಸಮಾಜದ ಪ್ರಜ್ಞಾವಂತ ಮತದಾರ ವರ್ಗವಾಗಿದ್ದು, ಅವರ ರಾಜಕೀಯ ನಿಲುವುಗಳು ಹಾಗೂ ನಿರೀಕ್ಷೆಗಳಿಗೆ ವಿಶೇಷ ಮಹತ್ವವಿದೆ. ಈ ಚುನಾವಣೆಯಲ್ಲಿ ಅಂತಹ ಮತದಾರರ ವಿಶ್ವಾಸವನ್ನು ಗಳಿಸಲು ಸಾಧ್ಯವಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಅವರ ನಿರೀಕ್ಷೆಗಳನ್ನು ಅರ್ಥಮಾಡಿಕೊಳ್ಳುವಲ್ಲಿ, ಪಕ್ಷದ ನಿಲುವುಗಳನ್ನು ಮನವರಿಕೆ ಮಾಡಿಕೊಡುವಲ್ಲಿ ಹಾಗೂ ಅವರೊಂದಿಗೆ ನಿರಂತರ ಸಂಪರ್ಕ ಸಾಧಿಸುವಲ್ಲಿ ಆಗಿರುವ ಕೊರತೆಗಳ ಬಗ್ಗೆ ಆತ್ಮಾವಲೋಕನ ನಡೆಸುತ್ತೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಕ್ಷಕರು ಮತ್ತು ಪದವೀಧರರ ನಿರೀಕ್ಷೆಗಳು, ಉದ್ಯೋಗದ ಅಭದ್ರತೆ, ಶೈಕ್ಷಣಿಕ ವ್ಯವಸ್ಥೆಯ ಸವಾಲುಗಳು ಹಾಗೂ ಅವರ ವೃತ್ತಿಪರ ಹಿತಾಸಕ್ತಿಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಸರ್ಕಾರ ಎಷ್ಟರಮಟ್ಟಿಗೆ ಸ್ಪಂದಿಸಿದೆ ಎಂಬುದನ್ನೂ ಪರಾಮರ್ಶಿಸುತ್ತೇವೆ. ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳು ಹಾಗೂ ಪಕ್ಷದ ನಿಲುವುಗಳನ್ನು ಮತದಾರರಿಗೆ ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಆಗಿರುವ ನ್ಯೂನತೆಗಳನ್ನು ಗುರುತಿಸಿ ಸರಿಪಡಿಸಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ..

ಈ ಫಲಿತಾಂಶ ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ಹಾಗೂ ಜನಪರ ಬದ್ಧತೆಯನ್ನು ದುರ್ಬಲಗೊಳಿಸುವುದಿಲ್ಲ. ಬದಲಾಗಿ ನಮ್ಮ ಸಂಘಟನಾ ಕಾರ್ಯವೈಖರಿ, ಜನಸಂಪರ್ಕ ಹಾಗೂ ರಾಜಕೀಯ ಕಾರ್ಯತಂತ್ರಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸಿಕೊಳ್ಳುವ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮತದಾರರ ತೀರ್ಪನ್ನು ಗೌರವಪೂರ್ವಕವಾಗಿ ಸ್ವೀಕರಿಸುತ್ತೇವೆ. ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಶ್ರಮಿಸಿದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಚುನಾವಣಾ ಫಲಿತಾಂಶದ ಕುರಿತು ಪಕ್ಷದ ಎಲ್ಲ ಹಂತಗಳಲ್ಲಿ ಸಮಗ್ರ ಪರಾಮರ್ಶೆ ನಡೆಸಿ, ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಮೂಲಕ ಶಿಕ್ಷಕರು, ಪದವೀಧರರು ಹಾಗೂ ಜನಸಾಮಾನ್ಯರ ವಿಶ್ವಾಸವನ್ನು ಗಳಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ ಎಂದು ಹರಿಪ್ರಸಾದ್ ತಿಳಿಸಿದ್ದಾರೆ.

ಪರಿಷತ್ ಚುನಾವಣೆ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾರರು ನೀಡಿರುವ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ. ಚುನಾವಣೆಯ ಫಲಿತಾಂಶದ ಬಗ್ಗೆ ಅಧ್ಯಯನ ನಡೆಸಿ, ಲೋಪಗಳಿದ್ದರೆ ಸರಿಪಡಿಸಿಕೊಳ್ಳುವ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಒಂದು ಸ್ಥಾನ ಸಿಗುವ ನಿರೀಕ್ಷೆ ಇತ್ತು. ಆದರೆ ಮತದಾರರು ತಮ್ಮದೇ ಆದ ಸಂದೇಶ ನೀಡಿದ್ದಾರೆ. ನಮಗೆ ಮತಗಳು ಉತ್ತಮವಾಗಿಯೇ ಬಂದಿವೆ. ಈ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದರು.

ಪರಿಷತ್ ಚುನಾವಣೆಯ ಫಲಿತಾಂಶವನ್ನು ಮುಂಬರುವ ಚುನಾವಣೆಗಳಿಗೆ ಮುನ್ಸೂಚನೆ ಎಂದು ವಿರೋಧ ಪಕ್ಷಗಳು ಹೇಳುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಚನ್ನಪಟ್ಟಣ ಮತ್ತು ಶಿಗ್ಗಾವಿ ಚುನಾವಣೆಗಳ ಫಲಿತಾಂಶಗಳನ್ನು ಕೂಡ ಮುನ್ಸೂಚನೆ ಎಂದು ಪರಿಗಣಿಸಬೇಕಲ್ಲವೇ? ಈ ಬಗ್ಗೆಯೂ ವಿರೋಧ ಪಕ್ಷಗಳು ಮಾತನಾಡಬೇಕಲ್ಲವೇ? ಎಂದು ಪ್ರಶ್ನಿಸಿದರು.

ಇದೇ ವೇಳೆ, ಬಲಿಪಾಡ್ಯಮಿಯಂದು ನರಕಾಸುರನ ಸಂಹಾರ ಆರಂಭವಾಗಲಿದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಸಂಕ್ಷಿಪ್ತವಾಗಿ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, “ದೇವರು ಒಳ್ಳೆಯದು ಮಾಡಲಿ” ಎಂದು ಹೇಳಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular