ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಮಹತ್ವದ ಶಿಸ್ತುಕ್ರಮ ಕೈಗೊಂಡಿದೆ. ಕಾಂಗ್ರೆಸ್ ನಾಯಕಿ ಹಾಗೂ ಪಕ್ಷದ ವಕ್ತಾರೆ ಕೃಪಾ ಆಳ್ವಾ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
ಈ ಪ್ರಕರಣ ರಾಜ್ಯ ಕಾಂಗ್ರೆಸ್‌ನಲ್ಲಿ ರಾಜಕೀಯ ಸಂಚಲನ ಮೂಡಿಸಿದ್ದು, ಪಕ್ಷದ ಆಂತರಿಕ ಬೆಳವಣಿಗೆಗಳ ಬಗ್ಗೆಯೂ ಚರ್ಚೆ ತೀವ್ರಗೊಂಡಿದೆ.
ಸ್ಟಿಂಗ್ ಆಪರೇಷನ್ ಪ್ರಕರಣದ ಹಿನ್ನೆಲೆ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು 2023ರಲ್ಲಿ ಸ್ಟಿಂಗ್ ಆಪರೇಷನ್ ನಡೆಸಲಾಗಿದೆ ಎನ್ನಲಾದ ವಿಡಿಯೋ ಸೆಪ್ಟೆಂಬರ್ 27, 2026ರಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ನಕಲಿಯಾಗಿದ್ದು, ತಮ್ಮ ರಾಜಕೀಯ ವರ್ಚಸ್ಸಿಗೆ ಧಕ್ಕೆ ತರುವ ಮತ್ತು ಬ್ಲ್ಯಾಕ್‌ಮೇಲ್ ಮಾಡುವ ಉದ್ದೇಶದಿಂದ ಸೃಷ್ಟಿಸಲಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು.
ಈ ಸಂಬಂಧ ಅಕ್ಟೋಬರ್ 6ರಂದು ಪೊಲೀಸ್ ದೂರು ದಾಖಲಿಸಿದ್ದರು. ಅಕ್ಟೋಬರ್ 13ರಂದು ಬೆಂಗಳೂರಿನ ಸಿವಿಲ್ ನ್ಯಾಯಾಲಯವು ಸಂಬಂಧಿತ ವಿಡಿಯೋ ಹಾಗೂ ಅದರ ವಿಷಯ ಪ್ರಸಾರ ಮಾಡದಂತೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು.
ಕೃಪಾ ಆಳ್ವಾ ಹೆಸರು ಮುನ್ನೆಲೆಗೆ ಬಂದಿದ್ದು ಹೇಗೆ?
ಸಿದ್ದರಾಮಯ್ಯ ಅವರ ಪುತ್ರ ಹಾಗೂ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ನ ಮಹಿಳಾ ನಾಯಕಿಯೊಬ್ಬರು ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಪಡೆಯುವ ಉದ್ದೇಶದಿಂದ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರೊಂದಿಗೆ ಸೇರಿ ಸ್ಟಿಂಗ್ ಆಪರೇಷನ್ ನಡೆಸಿದ್ದಾರೆ ಎಂದು ಆರೋಪಿಸಿದ್ದರು.
ಬಳಿಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಹಾಗೂ ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಅವರ ಹೆಸರು ಪ್ರಸ್ತಾಪಿಸಿದ್ದರು. ಈ ಆರೋಪಗಳು ತನಿಖೆಯಲ್ಲಿದ್ದು, ಅವರ ಪಾತ್ರ ಇನ್ನೂ ಅಧಿಕೃತವಾಗಿ ಸಾಬೀತಾಗಿಲ್ಲ.
ಪಕ್ಷದಿಂದ ನೋಟಿಸ್, ಪೊಲೀಸ್ ವಿಚಾರಣೆ
ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಕೃಪಾ ಆಳ್ವಾ ಅವರಿಗೆ ಶೋಕಾಸ್ ನೋಟಿಸ್ ನೀಡುವುದಾಗಿ ಅಕ್ಟೋಬರ್ 23ರಂದು ತಿಳಿಸಿದ್ದರು. ಅಕ್ಟೋಬರ್ 24ರಂದು ಅವರು ಸಿಸಿಬಿ ಪೊಲೀಸರ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದ್ದರು. ಪೊಲೀಸರು ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು.
ಕೃಪಾ ಆಳ್ವ ಯಾರು?
ಮಂಗಳೂರಿನ ಮೂಲದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರೆಯಾಗಿ ಕಾರ್ಯನಿರ್ವಹಿಸಿದ್ದರು. 2015ರಿಂದ 2018ರವರೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆಯಾಗಿದ್ದರು.
ಸ್ಟಿಂಗ್ ಆಪರೇಷನ್ ಪ್ರಕರಣ ಕಟ್ಟುಕಥೆ: ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ನೀಡಿದ ಸಿಸಿಬಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ಎನ್ನಲಾದ ಸ್ಟಿಂಗ್ ಆಪರೇಷನ್ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಸೈಬರ್ ಕ್ರೈಂ ಪೊಲೀಸರು ಮಹತ್ವದ ಮಾಹಿತಿ ಬಹಿರಂಗಪಡಿಸಿದ್ದಾರೆ.
ವಿಡಿಯೊದಲ್ಲಿ ಬಿಂಬಿಸಿರುವ ಲೈಂಗಿಕ ದೌರ್ಜನ್ಯದ ಆರೋಪ ಕಟ್ಟುಕಥೆಯಾಗಿದ್ದು, ಪ್ರಕರಣದಲ್ಲಿ ಉಲ್ಲೇಖಿಸಲಾದ ಆರೋಪಗಳಿಗೆ ಸಾಕ್ಷ್ಯಾಧಾರಗಳು ಬೆಂಬಲ ನೀಡುತ್ತಿಲ್ಲ ಎಂದು ಸಿಸಿಬಿ ತನ್ನ ಅಧಿಕೃತ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಈ ಮೂಲಕ ಸಿದ್ದರಾಮಯ್ಯ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಅವರಿಗೆ ಕ್ಲೀನ್‌ಚಿಟ್ ಸಿಕ್ಕಿದೆ. ಆದರೆ, ವಿಡಿಯೊ ಚಿತ್ರೀಕರಣಕ್ಕೆ ಬಳಸಿದ್ದ ಮೂಲ ಮೊಬೈಲ್ ನ ವಿಧಿವಿಜ್ಞಾನ ಪರೀಕ್ಷೆಯ ವರದಿ ಇನ್ನೂ ಬರಬೇಕಿದ್ದು, ವಿಡಿಯೊ ಸೃಷ್ಟಿ ಮತ್ತು ಪ್ರಸಾರದ ಹಿಂದಿನ ಉದ್ದೇಶದ ಕುರಿತು ತನಿಖೆ ಮುಂದುವರಿಯಲಿದೆ.
ಆರೋಪಗಳು ಕಟ್ಟುಕಥೆ ಎಂದ ಸಿಸಿಬಿ
ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲಾಗಿದೆ ಎಂದು ಸಿಸಿಬಿ ತಿಳಿಸಿದೆ. ತನಿಖೆಯ ವೇಳೆ ಸಂಗ್ರಹಿಸಿದ ಸಾಕ್ಷ್ಯಾಧಾರಗಳು ಹಾಗೂ ಸಂಬಂಧಪಟ್ಟ ವ್ಯಕ್ತಿಗಳ ಹೇಳಿಕೆಗಳನ್ನು ಪರಿಶೀಲಿಸಿದ ಬಳಿಕ, ವಿಡಿಯೊದಲ್ಲಿ ಬಿಂಬಿಸಿರುವ ಲೈಂಗಿಕ ದೌರ್ಜನ್ಯದ ಆರೋಪಗಳು ಸುಳ್ಳು ಮತ್ತು ಕಟ್ಟುಕಥೆಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ವಿಡಿಯೊದಲ್ಲಿ ಕಾಣಿಸಿಕೊಂಡಿದ್ದ ಎಲ್ಲ ವ್ಯಕ್ತಿಗಳನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಕೆಲವರನ್ನು ಒಂದಕ್ಕಿಂತ ಹೆಚ್ಚು ಬಾರಿ ವಿಚಾರಣೆ ನಡೆಸಿ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಲಭ್ಯವಿರುವ ಹೇಳಿಕೆಗಳು ಮತ್ತು ಸಾಕ್ಷ್ಯಾಧಾರಗಳನ್ನು ಆಧರಿಸಿ ಆರೋಪಗಳಿಗೆ ವಿಶ್ವಾಸಾರ್ಹ ಆಧಾರ ಕಂಡುಬಂದಿಲ್ಲ ಎಂದು ಸಿಸಿಬಿ ತಿಳಿಸಿದೆ.
ಪ್ರಕರಣವನ್ನು ಉದ್ದೇಶಪೂರ್ವಕವಾಗಿ ಸೃಷ್ಟಿಸಿರುವ ಸಾಧ್ಯತೆ ಮೇಲ್ನೋಟಕ್ಕೆ ಗೋಚರಿಸುತ್ತಿದೆ. ಹೀಗಾಗಿ, ವಿಡಿಯೊವನ್ನು ಯಾರು ಸಿದ್ಧಪಡಿಸಿದರು, ಅದರಲ್ಲಿ ಭಾಗಿಯಾಗಿದ್ದವರ ಪಾತ್ರವೇನು ಮತ್ತು ಅದನ್ನು ಸಾರ್ವಜನಿಕವಾಗಿ ಹರಿಬಿಡಲು ಯಾವ ಉದ್ದೇಶವಿತ್ತು ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಸಲಾಗುತ್ತಿದೆ.

