ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಕೋರಮಂಗಲದ ಸೇಂಟ್ ಜಾನ್ಸ್ ಆಸ್ಪತ್ರೆ ಸಮೀಪ ಶನಿವಾರ ಈ ಘಟನೆ ನಡೆದಿದೆ.
ಬಿಎಂಟಿಸಿ ಬಸ್ ಎಂದಿನಂತೆ ತನ್ನ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ವಾಹನದ ಒಳಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ತಕ್ಷಣವೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಲು ಕ್ರಮ ಕೈಗೊಂಡಿದ್ದಾರೆ. ಚಾಲಕ ಮತ್ತು ನಿರ್ವಾಹಕರ ಸಮಯಪ್ರಜ್ಞೆಯಿಂದಾಗಿ ಬಸ್ ನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ.
ಮಾಹಿತಿಯ ಪ್ರಕಾರ, ಬಿಎಂಟಿಸಿಯ ಡಿಪೋ-15ಕ್ಕೆ ಸೇರಿದ ಈ ಬಸ್ ಹುಡಿಯಿಂದ ಕೆ.ಆರ್. ಮಾರುಕಟ್ಟೆ ಕಡೆಗೆ ಸಂಚರಿಸುತ್ತಿತ್ತು. ಬೆಳಿಗ್ಗೆ ಸುಮಾರು 9.15ರ ವೇಳೆಗೆ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ಬಸ್ ನಲ್ಲಿ ಹೊಗೆ ಕಾಣಿಸಿಕೊಂಡ ತಕ್ಷಣ ಚಾಲಕ ವಾಹನವನ್ನು ಸುರಕ್ಷಿತ ಸ್ಥಳದಲ್ಲಿ ನಿಲ್ಲಿಸಿದ್ದಾರೆ. ಬಳಿಕ ಚಾಲಕ ಮತ್ತು ನಿರ್ವಾಹಕರು ಬಸ್ ನಲ್ಲಿದ್ದ ಅಗ್ನಿಶಾಮಕ ಉಪಕರಣ ಬಳಸಿ ಬೆಂಕಿ ನಿಯಂತ್ರಿಸಲು ಪ್ರಯತ್ನಿಸಿದ್ದಾರೆ. ಜೊತೆಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿಗೂ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಎಂದು ಬಿಎಂಟಿಸಿ ತಿಳಿಸಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಶಂಕೆ
ಬಿಎಂಟಿಸಿಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಪ್ರಾಥಮಿಕ ಪರಿಶೀಲನೆಯ ಪ್ರಕಾರ, ಬಸ್‌ನಲ್ಲಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಆದರೆ ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ.
ಈ ಹಿನ್ನೆಲೆಯಲ್ಲಿ ಬಸ್ ತಯಾರಿಕಾ ಸಂಸ್ಥೆಯಾದ ಐಷರ್(Eicher) ಅಧಿಕಾರಿಗಳನ್ನು ಬಿಎಂಟಿಸಿ ಸಂಪರ್ಕಿಸಿದೆ. ನವೆಂಬರ್ 2ರ ಸೋಮವಾರ ಐಷರ್ ತಾಂತ್ರಿಕ ತಂಡವು ಬಿಎಂಟಿಸಿ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳೊಂದಿಗೆ ಜಂಟಿ ಪರಿಶೀಲನೆ ನಡೆಸುವ ನಿರೀಕ್ಷೆಯಿದೆ.
ಈ ಪರಿಶೀಲನೆಯಿಂದ ಬೆಂಕಿ ಅವಘಡಕ್ಕೆ ನಿಖರ ಕಾರಣ ಮತ್ತು ವಾಹನದಲ್ಲಿನ ತಾಂತ್ರಿಕ ದೋಷಗಳ ಬಗ್ಗೆ ಮಾಹಿತಿ ಲಭ್ಯವಾಗಲಿದೆ. ಪರಿಶೀಲನಾ ವರದಿಯ ಆಧಾರದ ಮೇಲೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಸರಿಪಡಿಸುವ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಬಿಎಂಟಿಸಿ ತಿಳಿಸಿದೆ.
ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ
ನಗರದಲ್ಲಿ ಪ್ರತಿದಿನ ಲಕ್ಷಾಂತರ ಜನರು ಬಿಎಂಟಿಸಿ ಬಸ್ ಗಳನ್ನು ಅವಲಂಬಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕ ಸಾರಿಗೆ ಬಸ್ ಗಳಲ್ಲಿ ಸಂಭವಿಸುವ ಅಗ್ನಿ ಅವಘಡಗಳು ವಾಹನಗಳ ತಾಂತ್ರಿಕ ನಿರ್ವಹಣೆ ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿವೆ.
ಚಾಲಕ ಮತ್ತು ನಿರ್ವಾಹಕರು ತಕ್ಷಣ ಕಾರ್ಯಪ್ರವೃತ್ತರಾಗಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ. ಪ್ರಯಾಣಿಕರ ಸುರಕ್ಷತೆಯೇ ಮೊದಲ ಆದ್ಯತೆಯಾಗಿದ್ದು, ಘಟನೆಯ ಕುರಿತು ತಾಂತ್ರಿಕ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಬಿಎಂಟಿಸಿ ಸ್ಪಷ್ಟಪಡಿಸಿದೆ.

