HomeKarnatakaಆಡಳಿತದ ಎಲ್ಲಾ ಹಂತಗಳಲ್ಲೂ ಕನ್ನಡಕ್ಕೆ ಪ್ರಥಮ ಆದ್ಯತೆ, ನಾಡ ಪ್ರಗತಿಗೂ ಸರ್ಕಾರ ಬದ್ಧ: ಸಚಿವ ಶಿವರಾಜ್...

ಆಡಳಿತದ ಎಲ್ಲಾ ಹಂತಗಳಲ್ಲೂ ಕನ್ನಡಕ್ಕೆ ಪ್ರಥಮ ಆದ್ಯತೆ, ನಾಡ ಪ್ರಗತಿಗೂ ಸರ್ಕಾರ ಬದ್ಧ: ಸಚಿವ ಶಿವರಾಜ್ ಎಸ್. ತಂಗಡಗಿ

ಕೊಪ್ಪಳ: ಕರುನಾಡಿನಲ್ಲಿ ಮಾತೃಭಾಷೆಯಾದ ಕನ್ನಡಕ್ಕೆ ಪ್ರಥಮ ಆದ್ಯತೆ ಎಂಬ ನೀತಿಯನ್ನು ನಮ್ಮ ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಇದಕ್ಕೆ ಪೂರಕವಾಗಿ ಎಲ್ಲಾ ಹಂತಗಳಲ್ಲೂ ಕನ್ನಡದ ಅನುಷ್ಠಾನಕ್ಕೆ ಮುಂದಾಗಿದ್ದು, ರಾಜ್ಯದ ಸರ್ವತೋಮುಖ ಪ್ರಗತಿಗೆ ಸರ್ಕಾರವು ಬದ್ಧವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರು ಹೇಳಿದರು.

ಜಿಲ್ಲಾಡಳಿತದ ವತಿಯಿಂದ ನವೆಂಬರ್ 1ರಂದು ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 71ನೇ ಕನ್ನಡ ರಾಜ್ಯೋತ್ಸವದ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕರ್ನಾಟಕಕ್ಕೆ ಭವ್ಯ ಇತಿಹಾಸವಿದ್ದು, ಮೌರ್ಯರು, ಕದಂಬರು, ಗಂಗರು, ಹೊಯ್ಸಳರು, ವಿಜಯನಗರದ ಅರಸರು, ಚಾಲುಕ್ಯರು, ರಾಷ್ಟ್ರಕೂಟರು, ಮೈಸೂರಿನ ಒಡೆಯರು ಸೇರಿ ಇನ್ನೂ ಅನೇಕ ರಾಜ-ಮನೆತನಗಳು ಈ ನಾಡಿಗೆ ನೀಡಿದ ಕೊಡುಗೆ ಅಮೋಘವಾಗಿದೆ. ದಾಸಶ್ರೇಷ್ಠ ಕನಕದಾಸರು, ಪುರಂದರದಾಸರು, ಸರ್ವಜ್ಞ, ಶಿಶುನಾಳ ಷರೀಫರಂಥ ಸಂತಕವಿಗಳು ಹಾಗೂ ಸಾಮಾಜಿಕ ಕ್ರಾಂತಿಯ ಹರಿಕಾರ ಜಗಜ್ಯೋತಿ ಬಸವಣ್ಣನವರಂಥಹ ವಚನಕಾರರು, ದಾರ್ಶನಿಕರು ಬಾಳಿ ಬದುಕಿದ ನೆಲ ಇದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಐತಿಹಾಸಿಕ ಜಿಲ್ಲೆಯಾಗಿರುವ ಕೊಪ್ಪಳ ಜಿಲ್ಲೆಯು ಅಪಾರ ವೈವಿಧ್ಯಗಳನ್ನು ಮೇಳೈಸಿಕೊಂಡಿದೆ. ಇಲ್ಲಿನ ವಿವಿಧ ಸಮುದಾಯಗಳ ಸಂಪ್ರದಾಯ, ಜಾನಪದ ಕಲೆ, ಸಾಹಿತ್ಯ, ಸಂಸ್ಕೃತಿ ಸಮೃದ್ದಿಯಾಗಿದೆ ಎಂದು ಹೇಳಿದರು.

ಸ್ವಾತಂತ್ರ‍್ಯ ಪೂರ್ವದಿಂದಲೂ ಕನ್ನಡ ನಾಡಿಗಾಗಿ ಏಕತೆಯ ಹೋರಾಟ ನಡೆದು 1956 ರಲ್ಲಿ ಭಾಷಾವಾರು ಪ್ರಾಂತ್ಯಗಳು ರಚನೆಯಾಗಿ ಮೈಸೂರು ರಾಜ್ಯವಾಗಿತ್ತು. ತರುವಾಯ ನವೆಂಬರ 01, 1973ರಂದು ನಮ್ಮ ರಾಜ್ಯವು ಕರ್ನಾಟಕವೆಂದು ನಾಮಕರಣಗೊಂಡಿತು. ಅಂದಿನಿಂದ ಇಂದಿನವರೆಗೆ ಕರ್ನಾಟಕವು ಕನ್ನಡಿಗರ ಭಾವ ಬಂಧನ ಬೆಸೆಯುತ್ತಾ ಬಂದಿದೆ ಎಂದರು.

ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಕೊಪ್ಪಳ ಜಿಲ್ಲೆಯ ಪಾತ್ರವೂ ಅಷ್ಟೇ ಪ್ರಮುಖವಾದುದಾಗಿದೆ. ಕೊಪ್ಪಳ ಜಿಲ್ಲೆಯ ಅಳವಂಡಿ ಶಿವಮೂರ್ತಿಸ್ವಾಮಿ ಅವರು, ಶಿರೂರು ವೀರಭದ್ರಪ್ಪ ತೆಗ್ಗಿನಮನಿ ಅವರು, ಶಂಕರಗೌಡ್ರು, ಪ್ರಭುರಾಜ ಪಾಟೀಲ್ ಸಂಗನಾಳ ಅವರು, ಪಂಚಾಕ್ಷರಿ ಹಿರೇಮಠ ಅವರು, ಸೋಮಪ್ಪ ಡಂಬಳ ಅವರು, ದೇವೇಂದ್ರಕುಮಾರ ಹಕಾರಿ ಅವರು, ಭೀಮನಗೌಡ ಪಾಟೀಲ್ ಅವರು, ಹನುಮರಡ್ಡಿ ಕಲ್ಗುಡಿ ಅವರು, ಪಂಚಪ್ಪ ಶೆಟ್ಟರು, ಹಂಜಿ ಕೊಟ್ರಪ್ಪ, ಮುಂತಾದವರು ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ್ದನ್ನು ನಾವು ಇಂದು ಸ್ಮರಿಸಲೇಬೇಕು ಎಂದು ಹೇಳಿದರು.

ರಾಷ್ಟ್ರಕವಿ ಕುವೆಂಪು ಅವರು ಹೇಳುವಂತೆ ಕರ್ನಾಟಕವು ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಇಲ್ಲಿ ವಿವಿಧತೆಯಲ್ಲಿ ಏಕತೆ ನೆಲೆಸಿದೆ. ಕನ್ನಡನಾಡು ಸಂಪನ್ಮೂಲ ಹಾಗೂ ಸಂಸ್ಕೃತಿಯಿಂದ ಶ್ರೀಮಂತವಾಗಿದೆ. ಆದಿಕವಿ ಪಂಪ ಅವರಿಂದ ಆರಂಭವಾಗಿ ರನ್ನ ಮೊದಲಾದ ಕವಿಗಳು ತಮ್ಮ ಕಾವ್ಯದಲ್ಲಿ ಕನ್ನಡ ನಾಡು ನುಡಿಯ ಬಗ್ಗೆ ಮನದುಂಬಿ ಹೊಗಳಿದ್ದಾರೆ ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ತಂತ್ರಜ್ಞಾನದ ಅಭಿವೃದ್ಧಿಗೆ ನಮ್ಮ ಸರ್ಕಾರವು ಹೆಚ್ಚಿನ ಒತ್ತು ನೀಡಿದೆ. ಕನ್ನಡವನ್ನು ಕನ್ನಡಿಗರೆಲ್ಲರೂ ಮಾತನಾಡಿದಾಗ ಮತ್ತು ಬಳಸಿದಾಗ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯವಿದೆ. ಕನ್ನಡದ ಲಿಪಿಯನ್ನು ಮುಂದಿನ ಜನಾಂಗಕ್ಕೂ ಬರೆಯಲು ಕಲಿಸಿದಾಗ ಮಾತ್ರ ಈ ಭಾಷೆಯನ್ನು ಉಳಿಸಿ, ಬೆಳೆಸಿಕೊಂಡು ಹೋಗಲು ಸಾಧ್ಯವಾಗುತ್ತದೆ ಎಂದು ನುಡಿದರು.

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಜನರು ನೆಮ್ಮದಿಯಿಂದ ಬದುಕುವಂತಾಗಿದೆ. ಈ ನಿಟ್ಟಿನಲ್ಲಿ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎನ್ನುವ ಸಾಮಾಜಿಕ ನ್ಯಾಯದ ಪರಿಪಾಲನೆ ಮಾಡುತ್ತಾ ನಾವು ಬರುತ್ತಿದ್ದೇವೆ ಎಂದು ಹೇಳಲು ನನಗೆ ಹೆಮ್ಮೆ ಅನಿಸುತ್ತದೆ ಎಂದರು.

ಆಕರ್ಷಕ ಪಥಸಂಚಲನ: ಕನ್ನಡ ರಾಜ್ಯೋತ್ಸವದ ನಿಮಿತ್ತ ನಡೆದ ಪಥಸಂಚಲನದಲ್ಲಿ ಪೊಲೀಸ್ ಇಲಾಖೆ, ಸಶಸ್ತ್ರ ಮೀಸಲು ಪಡೆ, ಗೃಹ ರಕ್ಷಕದಳ, ಭಾರತ ಸೇವಾದಳ, ಎನ್.ಸಿ.ಸಿ, ಭಾರತ್ ಸ್ಕೌಟ್ಸ್ & ಗೈಡ್ಸ್ ಸೇರಿ ಒಟ್ಟು 16 ತಂಡಗಳು ಭಾಗವಹಿಸಿ ಆಕರ್ಷಕ ಪಥಸಂಚಲನ ನಡೆಸಿ, ಸಚಿವರಿಗೆ ಗೌರವ ವಂದನೆ ಸಲ್ಲಿಸಿದವು.

ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ನೆನಪಿನ ಕಾಣಿಕೆ ವಿತರಣೆ: ರಾಜ್ಯೋತ್ಸವದ ನಿಮಿತ್ತ ಕೊಪ್ಪಳದ ಎಸ್.ಎಫ್.ಎಸ್ ಶಾಲೆ ಹಾಗೂ ಕಾಳಿದಾಸ ಪ್ರೌಢಶಾಲಾ ವಿದ್ಯಾರ್ಥಿಗಳು ಅದ್ಭುತವಾಗಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಚಪ್ಪಳಾ ಗಿಟ್ಟಿಸಿಕೊಂಡರು. ಪಥಸಂಚಲನದಲ್ಲಿ ವಿಜೇತರಾದ ತಂಡಗಳಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಕ್ಕಳಿಗೆ ನೆನಪಿನ ಕಾಣಿಕೆಯನ್ನು ವಿತರಿಸಲಾಯಿತು.

ವಿದ್ಯಾರ್ಥಿಗಳಿಗೆ ಗ್ರಾಮಾನುಭವ ಕಾರ್ಯಕ್ರಮಕ್ಕೆ ಚಾಲನೆ: ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಗ್ರಾಮೀಣ ಪ್ರದೇಶದಲ್ಲಿನ ಜೀವನ, ಸಂಸ್ಕೃತಿ, ಕೃಷಿ ಮತ್ತು ಇತರ ವಿಷಯಗಳ ಕುರಿತು ಕ್ಷೇತ್ರ ಅಧ್ಯಯನ ಮೂಲಕ ಪರಿಚಯಿಸುವ “ವಿದ್ಯಾರ್ಥಿಗಳ ಗ್ರಾಮಾನುಭವ ಕಾರ್ಯಕ್ರಮ”ಕ್ಕೆ ಸಚಿವರು ಚಾಲನೆ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಹಿಲ್ ಬಾಗ್ಲಾ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಸಹಾಯಕ ಆಯುಕ್ತ ಮಹೇಬೂಬ್ ಜೀಲಾನ್ ಖುರೇಶಿ, ಕೊಪ್ಪಳ ತಹಶಿಲ್ದಾರ ಬಸವರಾಜ ತನ್ನಳ್ಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸಹಾಯಕ ನಿರ್ದೇಶಕ ಕರ್ಣಕುಮಾರ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮೆರವಣಿಗೆ: 71ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ ನಿಮಿತ್ತ ಬೆಳಿಗ್ಗೆ ಕೊಪ್ಪಳ ತಹಶೀಲ್ದಾರ ಕಚೇರಿಯಿಂದ ಜಿಲ್ಲಾ ಕ್ರೀಡಾಂಗಣದವರೆಗೆ ಹಮ್ಮಿಕೊಂಡ ನಾಡ ದೇವತೆ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆಗೆ ಜಿ.ಪಂ ಸಿಇಓ ಹಾಗೂ ಅಪರ ಜಿಲ್ಲಾಧಿಕಾರಿಗಳು ಜಂಟಿಯಾಗಿ ಚಾಲನೆ ನೀಡಿದರು. ಸಹಾಯಕ ಆಯುಕ್ತರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಇದೇ ವೇಳೆ ಉಪಸ್ಥಿತರಿದ್ದರು.

ವಿವಿಧ ಜಾನಪದ ಕಲಾತಂಡಗಳು ತಮ್ಮ ಆಕರ್ಷಕ ಕಲಾ ಪ್ರದರ್ಶನದ ಮೂಲಕ ಮೆರವಣಿಗೆಯ ಮೆರುಗನ್ನು ಹೆಚ್ಚಿಸಿದವು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular