HomeKarnatakaಮೈಸೂರು ದಸರಾ ಮಾದರಿಯಲ್ಲಿ ಹಾಸನಾಂಬ ಜಾತ್ರೆ: ಕ್ರೀಡೆ, ಜನಪದ ಕಲೆಗಳಿಗೆ ವಿಶೇಷ ಆದ್ಯತೆ

ಮೈಸೂರು ದಸರಾ ಮಾದರಿಯಲ್ಲಿ ಹಾಸನಾಂಬ ಜಾತ್ರೆ: ಕ್ರೀಡೆ, ಜನಪದ ಕಲೆಗಳಿಗೆ ವಿಶೇಷ ಆದ್ಯತೆ

ಹಾಸನ: ಮೈಸೂರು ದಸರಾ ಮಾದರಿಯಲ್ಲಿ ಈ ಬಾರಿ ಹಾಸನಾಂಬ ಜಾತ್ರಾ ಮಹೋತ್ಸವವನ್ನು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುತ್ತಿದ್ದು, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಜನಪದ ಕಲೆಗಳಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಜಾತ್ರೆಯ ಅಂಗವಾಗಿ ವಿವಿಧ ಕ್ರೀಡಾ ಸ್ಪರ್ಧೆಗಳು, ರಂಗೋಲಿ ಸ್ಪರ್ಧೆ ಹಾಗೂ ಜಾನುವಾರುಗಳ ಪ್ರದರ್ಶನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಈ ಕುರಿತು ಮಾತನಾಡಿದ ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು, ಸನಾತನ ಕಾಲದಿಂದಲೂ ನಡೆದುಕೊಂಡು ಬಂದಿರುವ ಚಿತ್ರಕಲೆ, ರಂಗೋಲಿ ಸೇರಿದಂತೆ ವಿವಿಧ ಜನಪದ ಕಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ನಾಳೆಯಿಂದ ಮಹಾನಗರ ಪಾಲಿಕೆ ಆವರಣದಲ್ಲಿ ರಂಗೋಲಿ ಸ್ಪರ್ಧೆ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಹೊಸ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಯನ್ನು ವೀಕ್ಷಿಸಿದ ಬಳಿಕ ಮಾತನಾಡಿದ ಅವರು, 5 ಸಾವಿರ ಜನರು ಬಂದು ದೇವಿಯ ದರ್ಶನ ಪಡೆದರೆ ಅದು ದೇವಿಯ ದರ್ಶನವಾಗುತ್ತದೆ. ಆದರೆ ಲಕ್ಷಾಂತರ ಜನರು ಆಗಮಿಸಿ ದರ್ಶನ ಪಡೆದಾಗ ಅದು ನಾಡಹಬ್ಬದ ಸ್ವರೂಪ ಪಡೆದುಕೊಳ್ಳುತ್ತದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೈಸೂರು ದಸರಾ ಮಾದರಿಯಲ್ಲಿ ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿಯೂ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ನಮ್ಮ ನಾಡಿನ ಸಾಂಪ್ರದಾಯಿಕ ಕಲೆಗಳು ಹಾಗೂ ಜನಪದ ಸಂಸ್ಕೃತಿ ಕಾಲಕ್ರಮೇಣ ನಶಿಸಿ ಹೋಗದಂತೆ ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ. ಇಂತಹ ಕಾರ್ಯಕ್ರಮಗಳ ಆಯೋಜನೆಯಿಂದ ಮುಂದಿನ ಪೀಳಿಗೆಗೂ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಪರಿಚಯಿಸಲು ಸಾಧ್ಯವಾಗುತ್ತದೆ ಎಂದರು.

ಜಾತ್ರೆಯ ಅಂಗವಾಗಿ ಆಯೋಜಿಸಿರುವ ಜಾನುವಾರುಗಳ ಪ್ರದರ್ಶನದ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ನಮ್ಮಲ್ಲಿರುವ ಹಲವು ವಿಶಿಷ್ಟ ತಳಿಗಳ ಜಾನುವಾರುಗಳ ಬಗ್ಗೆ ಸಾಕಷ್ಟು ಜನರಿಗೆ ಮಾಹಿತಿ ಇರಲಿಲ್ಲ. ಪ್ರದರ್ಶನ ವೀಕ್ಷಿಸುವ ಮೂಲಕ ವಿವಿಧ ತಳಿಗಳ ಪರಿಚಯ ಮಾಡಿಕೊಳ್ಳಲು ಅವಕಾಶ ದೊರೆತಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಮಾತನಾಡಿ, ಹಾಸನಾಂಬ ಜಾತ್ರಾ ಮಹೋತ್ಸವದ ಪ್ರಯುಕ್ತ ಹಾಸನದಲ್ಲಿ ಇದೇ ಮೊದಲ ಬಾರಿಗೆ ವಿಶೇಷ ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜಾತ್ರೆಯ ಅಂಗವಾಗಿ ವಿವಿಧ ತಳಿಯ ಜಾನುವಾರುಗಳ ಪ್ರದರ್ಶನವನ್ನೂ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಲೆ ಎಂಬುದು ಮಹಿಳೆಯರಲ್ಲಿ ಸಹಜವಾಗಿ ಜೀವಂತವಾಗಿರುವ ಸೃಜನಶೀಲ ಅಭಿವ್ಯಕ್ತಿಯಾಗಿದೆ. ರಂಗೋಲಿ ಸೇರಿದಂತೆ ಸಾಂಪ್ರದಾಯಿಕ ಕಲೆಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿವೆ. ಅದೇ ರೀತಿ ಕ್ರೀಡೆಗಳು ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದ್ದು, ಪ್ರತಿಯೊಬ್ಬರೂ ಜೀವನವನ್ನು ಕ್ರೀಡಾ ಮನೋಭಾವದಿಂದ ಮುನ್ನಡೆಸಬೇಕು ಎಂದು ಕರೆ ನೀಡಿದರು.

ಜಾತ್ರಾ ಮಹೋತ್ಸವದ ಅಂಗವಾಗಿ ಪ್ರತಿದಿನ ಮಹಾನಗರ ಪಾಲಿಕೆ ಆವರಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಸಾರ್ವಜನಿಕರು ಕುಟುಂಬ ಸಮೇತರಾಗಿ ಆಗಮಿಸಿ ಕಾರ್ಯಕ್ರಮಗಳನ್ನು ನೇರವಾಗಿ ವೀಕ್ಷಿಸಿ ಆನಂದಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಧರಣಿ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಪಿ. ತಾರಾನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಈ ಬಾರಿಯ ಹಾಸನಾಂಬ ಜಾತ್ರಾ ಮಹೋತ್ಸವ ಧಾರ್ಮಿಕ ಆಚರಣೆಗೆ ಸೀಮಿತವಾಗದೆ, ಕ್ರೀಡೆ, ಕಲೆ, ಸಂಸ್ಕೃತಿ ಮತ್ತು ಗ್ರಾಮೀಣ ಪರಂಪರೆಯನ್ನು ಪರಿಚಯಿಸುವ ನಾಡಹಬ್ಬದ ಸ್ವರೂಪ ಪಡೆದುಕೊಳ್ಳುತ್ತಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular