HomeKarnatakaಗೃಹಲಕ್ಷ್ಮಿ ಹಣ ಫಲಾನುಭವಿಗಳ ಕಾನೂನುಬದ್ಧ ಹಕ್ಕಲ್ಲ: ಹೈಕೋರ್ಟ್ ಗೆ ರಾಜ್ಯ ಸರ್ಕಾರದ ಸ್ಪಷ್ಟನೆ

ಗೃಹಲಕ್ಷ್ಮಿ ಹಣ ಫಲಾನುಭವಿಗಳ ಕಾನೂನುಬದ್ಧ ಹಕ್ಕಲ್ಲ: ಹೈಕೋರ್ಟ್ ಗೆ ರಾಜ್ಯ ಸರ್ಕಾರದ ಸ್ಪಷ್ಟನೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ನೀಡಲಾಗುವ ಪ್ರತಿ ತಿಂಗಳ ₹2,000 ಆರ್ಥಿಕ ನೆರವು ಕಾನೂನುಬದ್ಧ ಹಕ್ಕಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ ಗೆ ಸ್ಪಷ್ಟಪಡಿಸಿದೆ. ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳು ₹2,000 ಹಣವನ್ನು ತಮ್ಮ ಹಕ್ಕು ಎಂದು ಪ್ರತಿಪಾದಿಸುವಂತಿಲ್ಲ ಎಂಬುದಾಗಿ ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ಸಂಬಂಧ ಬೆಂಗಳೂರಿನ ಅರ್ಜಿದಾರರಾದ ಆರ್. ಗಂಗಾ ಮತ್ತು ಜಿ.ಡಿ. ಪವಿತ್ರಾ ಅವರು ಗೃಹಲಕ್ಷ್ಮಿ ಯೋಜನೆಯಡಿ ಬಾಕಿ ಉಳಿದಿರುವ ಹಣವನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿದ್ದರು.

₹5,000 ಕೋಟಿ ಬಾಕಿ ಪಾವತಿ ವಿವಾದ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿದಾರರ ವಾದದ ಪ್ರಕಾರ, ರಾಜ್ಯದ ಸುಮಾರು 1.26 ಕೋಟಿ ಮಹಿಳಾ ಫಲಾನುಭವಿಗಳಿಗೆ 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ತಲಾ ₹2,000ರಂತೆ ಎರಡು ಕಂತುಗಳ ಹಣ ಪಾವತಿಯಾಗಿಲ್ಲ. ಇದರಿಂದ ಸುಮಾರು ₹5,000 ಕೋಟಿ ಬಾಕಿ ಉಳಿದಿದೆ. ಬಾಕಿ ಹಣ ಬಿಡುಗಡೆಗೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದಾರೆ.

ಸರ್ಕಾರದ ವಾದವೇನು?

ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೊಳಿಸಿರುವ ಕಲ್ಯಾಣ ಯೋಜನೆಯಾಗಿದ್ದು, ಅದರ ಅನುಷ್ಠಾನವು ಸರ್ಕಾರದ ಆರ್ಥಿಕ ಪರಿಸ್ಥಿತಿ ಮತ್ತು ಆಡಳಿತಾತ್ಮಕ ಅಗತ್ಯಗಳನ್ನು ಅವಲಂಬಿಸಿದೆ ಎಂದು ಸರ್ಕಾರ ವಾದಿಸಿದೆ.

ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಅಗತ್ಯ ಅನುದಾನ ಬಿಡುಗಡೆಯಾಗದ ಕಾರಣ ಹಣ ಪಾವತಿಸಲು ಸಾಧ್ಯವಾಗಿಲ್ಲ ಎಂದು ಸರ್ಕಾರ ತಿಳಿಸಿದೆ.

ಯೋಜನೆಯಡಿ ನೆರವು ನೀಡುವ ಉದ್ದೇಶವಿದ್ದರೂ, ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಫಲಾನುಭವಿಗಳು ನ್ಯಾಯಾಲಯದ ಮೂಲಕ ಹಣ ಪಾವತಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ ಎಂಬುದು ಸರ್ಕಾರದ ವಾದವಾಗಿದೆ.

ಗೃಹಲಕ್ಷ್ಮಿ ಯೋಜನೆಯ ಬಜೆಟ್ ಅನುದಾನದ ಲಭ್ಯತೆಯನ್ನು ಆಧರಿಸಿದೆ. ಸರ್ಕಾರದಲ್ಲಿ ನೈಜ ಆರ್ಥಿಕ ಸಂಕಷ್ಟ ಎದುರಾದ ಸಂದರ್ಭದಲ್ಲಿ ಕೇವಲ ನಿರೀಕ್ಷೆಯ ಆಧಾರದ ಮೇಲೆ ಇದನ್ನು ನ್ಯಾಯಾಲಯದ ಮೂಲಕ ಒತ್ತಾಯಪೂರ್ವಕವಾಗಿ ಪಡೆಯುವ ಹಕ್ಕಾಗಿ ಫಲಾನುಭವಿಗಳು ಕ್ಲೈಮ್ ಮಾಡಲು ಸಾಧ್ಯವಿಲ್ಲ ಎಂದು ಸರ್ಕಾರ ಹೇಳಿದೆ.

ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ವಜಾಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದೆ. ನ್ಯಾಯಮೂರ್ತಿ ಅನು ಶಿವರಾಮನ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ತಾರಾನಾಥ್ ಪೂಜಾರಿ ಅವರು ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಆಡಳಿತಾತ್ಮಕ ಅನಿವಾರ್ಯತೆ ಮತ್ತು ರಾಜ್ಯದ ಆರ್ಥಿಕ ಪರಿಸ್ಥಿತಿಗೆ ಒಳಪಟ್ಟಿರುತ್ತದೆ ಎಂದು ತಿಳಿಸಿದ್ದು, ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಲಿಖಿತ ಆಕ್ಷೇಪಣೆಯನ್ನು ನ್ಯಾಯ ಪೀಠಕ್ಕೆ ಸಲ್ಲಿಸಿದ್ದಾರೆ.

ಅರ್ಜಿದಾರರು ಹೇಳಿರುವ ಎರಡು ತಿಂಗಳ ಸಹಾಯಧನ ಬಿಡುಗಡೆಗೆ ಬಗ್ಗೆ ಪ್ರಸ್ತಾವನೆಗಳನ್ನು ಆರ್ಥಿಕ ಇಲಾಖೆಗೆ ಸಲ್ಲಿಸಲಾಗಿತ್ತು. ಆದರೆ ಅಗತ್ಯ ಅನುದಾನ ಬಿಡುಗಡೆಯಾಗಿರಲಿಲ್ಲ ಎಂದು ಹೇಳಲಾಗಿದೆ. ಆರ್ಥಿಕ ಸಂಕಷ್ಟದಿಂದ ಸಹಾಯಧನ ಬಿಡುಗಡೆ ಮಾಡಲು ಸಾಧ್ಯವಾಗದ ಸಂದರ್ಭದಲ್ಲಿ ಫಲಾನುಭವಿಗಳು ಹಣ ಬಿಡುಗಡೆಗೆ ಒತ್ತಾಯಿಸುವಂತಿಲ್ಲ. ಅಂತಹ ಹಕ್ಕನ್ನು ಕಾನೂನು ಬದ್ಧವಾಗಿ ಜಾರಿಗೊಳಿಸುವ ಗೊಳಿಸಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ.

ಸರ್ಕಾರದ ಆಕ್ಷೇಪಣೆಗೆ ಪ್ರತ್ಯುತ್ತರ ಸಲ್ಲಿಸುವಂತೆ ಅರ್ಜಿದಾರರ ಪರ ವಕೀಲರಿಗೆ ನಿರ್ದೇಶ ನೀಡಿದ ನ್ಯಾಯಪೀಠ ಎರಡು ವಾರ ಕಾಲಾವಕಾಶ ನೀಡಿದೆ.

ಅರ್ಜಿದಾರರಿಗೆ ಎರಡು ವಾರಗಳ ಕಾಲಾವಕಾಶ

ಸರ್ಕಾರದ ಆಕ್ಷೇಪಣೆಗಳನ್ನು ಆಲಿಸಿದ ಹೈಕೋರ್ಟ್, ಅರ್ಜಿದಾರರ ಪರ ವಕೀಲರಿಗೆ ಸರ್ಕಾರದ ವಾದಕ್ಕೆ ಪ್ರತಿಕ್ರಿಯೆ ಸಲ್ಲಿಸಲು ಎರಡು ವಾರಗಳ ಕಾಲಾವಕಾಶ ನೀಡಿದೆ. ಬಳಿಕ ಪ್ರಕರಣದ ವಿಚಾರಣೆ ಮುಂದುವರಿಯಲಿದೆ.

ಗಮನಿಸಿ: ಹೈಕೋರ್ಟ್ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಹಕ್ಕಲ್ಲ ಎಂದು ತೀರ್ಪು ನೀಡಿಲ್ಲ. ಅದು ಸರ್ಕಾರ ನ್ಯಾಯಾಲಯದಲ್ಲಿ ಮಂಡಿಸಿರುವ ವಾದ ಮಾತ್ರ. ಪ್ರಕರಣ ಇನ್ನೂ ವಿಚಾರಣೆಯ ಹಂತದಲ್ಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular