HomeKarnatakaಸಿಇಟಿ, ನೀಟ್, ಜೆಇಇ ಪರೀಕ್ಷೆಗಳಿಗೆ ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ವ್ಯವಸ್ಥೆ: ಸಚಿವ ಮಧು ಬಂಗಾರಪ್ಪ ಸೂಚನೆ

ಸಿಇಟಿ, ನೀಟ್, ಜೆಇಇ ಪರೀಕ್ಷೆಗಳಿಗೆ ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ವ್ಯವಸ್ಥೆ: ಸಚಿವ ಮಧು ಬಂಗಾರಪ್ಪ ಸೂಚನೆ

ಚಿಕ್ಕಮಗಳೂರು: ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಉತ್ತಮ ಸಾಧನೆ ಮಾಡುವಂತಾಗಬೇಕು. ಈ ನಿಟ್ಟಿನಲ್ಲಿ ಸಿಇಟಿ, ನೀಟ್ ಹಾಗೂ ಜೆಇಇ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಸೂಕ್ತ ತರಬೇತಿ ವ್ಯವಸ್ಥೆ ರೂಪಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚಿಕ್ಕಮಗಳೂರಿನ ಜಿಲ್ಲಾ ಪಂಚಾಯತ್‌ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶನಿವಾರ ನಡೆದ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳನ್ನು ಮತ್ತಷ್ಟು ಬಲಪಡಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.

ಸರ್ಕಾರಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳ ಸಮಗ್ರ ಅಭಿವೃದ್ಧಿ, ಮಕ್ಕಳ ದಾಖಲಾತಿ ಹೆಚ್ಚಳ ಮತ್ತು ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮ್ಮ ಇಲಾಖೆಯ ಬಹುಮುಖ್ಯ ಉಪಕ್ರಮವಾದ ʻನಮ್ಮ ಶಾಲೆ – ನಮ್ಮ ಜವಾಬ್ದಾರಿʼ ಯೋಜನೆಯಡಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಹಳೆ ವಿದ್ಯಾರ್ಥಿಗಳ ಸಹಕಾರದೊಂದಿಗೆ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಮುಂದಾಗಬೇಕು. ಶಾಲೆಗಳ ಉನ್ನತೀಕರಣಕ್ಕೆ ಕೊಡುಗೆ ನೀಡುವ ದಾನಿಗಳನ್ನು ಗುರುತಿಸಿ ಸನ್ಮಾನಿಸುವ ಮೂಲಕ ಇತರರಿಗೂ ಪ್ರೇರಣೆ ನೀಡಬೇಕು ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವುದು, ಪೂರ್ವ ಪ್ರಾಥಮಿಕ ವಿಭಾಗಗಳನ್ನು ಆರಂಭಿಸುವುದು, ಅಗತ್ಯ ಮೂಲಸೌಕರ್ಯ ಕಲ್ಪಿಸುವುದು, ಶಿಕ್ಷಕರಿಗೆ ಕಾಲಕಾಲಕ್ಕೆ ತರಬೇತಿ ನೀಡುವುದು ಹಾಗೂ ಶಾಲೆಗಳಿಗೆ ಗೈರುಹಾಜರಾಗುವ ಮಕ್ಕಳನ್ನು ಮರಳಿ ಕರೆತರುವ ನಿಟ್ಟಿನಲ್ಲಿ ವಿಶೇಷ ಗಮನಹರಿಸಬೇಕು. ಅಗತ್ಯವಿರುವ ಕಡೆ ಆಂಗ್ಲ ಮಾಧ್ಯಮ ವಿಭಾಗಗಳನ್ನು ಆರಂಭಿಸುವುದು ಮತ್ತು ಆಯ್ದ ಶಾಲೆಗಳನ್ನು ಮೇಲ್ದರ್ಜೆಗೇರಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಶಿಕ್ಷಕರ ಕೊರತೆ ನೀಗಿಸಲು ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ವಹಿಸುವುದರ ಜತೆಗೆ, ಅಗತ್ಯವಿರುವ ಕಡೆ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಬೇಕು. ಶಾಲಾ ಕೊಠಡಿಗಳ ದುರಸ್ತಿ, ಶೌಚಾಲಯ ನಿರ್ಮಾಣ ಸೇರಿದಂತೆ ಮೂಲಸೌಕರ್ಯ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು ಎಂದರು.

ಶಾಲಾ ಪ್ರಾರಂಭದ ವೇಳೆಯಲ್ಲಿಯೇ ಎಲ್ಲ ಮಕ್ಕಳಿಗೂ ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಶೂ ಮತ್ತು ಸಾಕ್ಸ್‌ಗಳನ್ನು ಏಕಕಾಲದಲ್ಲಿ ವಿತರಿಸಬೇಕು. ಯಾವುದೇ ಮಗು ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಪಿಎಂಶ್ರೀ ಶಾಲೆಗಳ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಬೇಕು. ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಗುಣಮಟ್ಟದ ಆಹಾರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಮಕ್ಕಳಲ್ಲಿ ಉತ್ತಮ ನಡತೆ ಮತ್ತು ಜೀವನ ಮೌಲ್ಯಗಳನ್ನು ಬೆಳೆಸಲು ಮೌಲ್ಯಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ‘ಮೊಬೈಲ್ ಬಿಡಿ, ಪುಸ್ತಕ ಹಿಡಿ’ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಬೇಕು. ಪೋಷಕರು ಮತ್ತು ಶಿಕ್ಷಕರ ಸಭೆಗಳನ್ನು ನಿಯಮಿತವಾಗಿ ನಡೆಸಿ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ವಿಶೇಷ ತರಬೇತಿ ನೀಡಬೇಕು ಎಂದು ಹೇಳಿದರು.

ಸಭೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಡಿ. ತಮ್ಮಯ್ಯ, ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ, ತರೀಕೆರೆ ಶಾಸಕ ಜಿ.ಎಚ್. ಶ್ರೀನಿವಾಸ್, ವಿಧಾನಪರಿಷತ್ ಸದಸ್ಯರಾದ ಗಾಯತ್ರಿ ಶಾಂತೇಗೌಡ, ಎಸ್.ಎಲ್. ಭೋಜೇಗೌಡ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಸಿ. ಶಿವಾನಂದ, ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇಶ್, ಜಿಲ್ಲಾ ಪಂಚಾಯಿತಿ ಸಿಇಒ ಮೀನಾಕ್ಷಿ ಆರ್ಯ, ಭದ್ರಾ ಕಾಡಾ ಅಧ್ಯಕ್ಷ ಕೆ.ಪಿ. ಅಂಶುಮಂತ್, ಡಿಡಿಪಿಐ ತಿಮ್ಮರಾಜು, ಡಿಡಿಪಿಯು ಮಂಜುಳಾ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular