HomeIndia2029ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು

2029ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು

ಕೊಚ್ಚಿ- 2029ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಸೋಲಲಿದೆ ಎಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಭವಿಷ್ಯ ನುಡಿದಿದ್ದಾರೆ.

ಕೊಚ್ಚಿಯಲ್ಲಿ ನಡೆದ ಎಸ್‌ಐಆರ್‌ (ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ) ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ದೀಪ್ಕೆ, ದೇಶದಲ್ಲಿ ಸರ್ಕಾರದ ಬದಲಾವಣೆ ಚುನಾವಣೆಗಳ ಮೂಲಕವೇ ನಡೆಯಬೇಕು. ಇದಕ್ಕಾಗಿ ಸ್ವತಂತ್ರ ಮತ್ತು ನಿಷ್ಪಕ್ಷಪಾತ ಚುನಾವಣಾ ವ್ಯವಸ್ಥೆ ಅಗತ್ಯ ಎಂದು ಒತ್ತಾಯಿಸಿದರು.

ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಮತದಾರರ ಹಕ್ಕುಗಳನ್ನು ರಕ್ಷಿಸುವುದು ಅತ್ಯಂತ ಮುಖ್ಯ ಎಂದರು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಬೆಂಬಲವನ್ನೂ ಅವರು ಪ್ರಶ್ನಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಸರ್ಕಾರ ಜನರ ಸ್ವಾತಂತ್ರ್ಯವನ್ನು ಹಂತಹಂತವಾಗಿ ನಿಯಂತ್ರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ದೀಪ್ಕೆ, ಜನರು ಏನು ತಿನ್ನಬೇಕು, ಯಾರನ್ನು ಮದುವೆಯಾಗಬೇಕು ಮತ್ತು ಅಂತಿಮವಾಗಿ ಯಾರಿಗೆ ಮತ ಹಾಕಬೇಕು ಎಂಬುದನ್ನೂ ನಿಯಂತ್ರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಟೀಕಿಸಿದರು.

ಜಂತರ್ ಮಂತರ್ ಪ್ರತಿಭಟನೆಯ ಸಂದರ್ಭದಲ್ಲಿ ತ್ರಿವರ್ಣ ಧ್ವಜ ಹಿಡಿದಿದ್ದಕ್ಕಾಗಿ ತಮ್ಮನ್ನು ಹಾಗೂ ಸಿಜೆಪಿ ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ಬಂಧಿಸಲಾಗಿತ್ತು ಎಂದು ಅವರು ಉಲ್ಲೇಖಿಸಿದರು. ದೇಶದಾದ್ಯಂತ ತ್ರಿವರ್ಣ ಧ್ವಜವನ್ನು ಹಿಡಿದುಕೊಂಡೇ ಹೋರಾಟ ಮುಂದುವರಿಸುವುದಾಗಿ ಹೇಳಿದರು.

ಯುವಜನರ ಪ್ರತಿಭಟನೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ಕುರಿತು ಮಾತನಾಡಿದ ದೀಪ್ಕೆ, ದೇಶದ ಯುವಕರು ಈಗ ಅಧಿಕಾರದಲ್ಲಿರುವವರನ್ನು ಪ್ರಶ್ನಿಸಲು ಆರಂಭಿಸಿದ್ದಾರೆ. ಅವರನ್ನು ಅರಾಜಕತಾವಾದಿಗಳು ಎಂದು ಕರೆಯಬಾರದು; ಅವರು ಅಂಬೇಡ್ಕರ್ ಮತ್ತು ಗಾಂಧಿ ಅವರ ವಿಚಾರಗಳನ್ನು ಪ್ರತಿಪಾದಿಸುವವರು ಎಂದು ಹೇಳಿದರು.

ಬಿ.ಆರ್. ಅಂಬೇಡ್ಕರ್, ಮಹಾತ್ಮ ಗಾಂಧಿ ಹಾಗೂ ಜವಾಹರಲಾಲ್ ನೆಹರು ಅವರ ಆದರ್ಶಗಳ ಮೇಲೆ ಭಾರತ ನಿರ್ಮಾಣವಾಗಿದೆ ಎಂದು ಹೇಳಿದ ಅವರು, ಕಳೆದ 10–12 ವರ್ಷಗಳಲ್ಲಿ ದೇಶ ತನ್ನ ಧ್ವನಿಯನ್ನು ಕಳೆದುಕೊಂಡಿತ್ತು. ಜಂತರ್ ಮಂತರ್ ಪ್ರತಿಭಟನೆಗಳ ಮೂಲಕ ಜನರು ಮತ್ತೆ ತಮ್ಮ ಧ್ವನಿ ಮತ್ತು ಧೈರ್ಯವನ್ನು ಮರಳಿ ಪಡೆಯುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಪ್ರತಿಭಟನಾ ಸಭೆಯಲ್ಲಿ ವಿವಿಧ ವಯೋಮಾನದ ಜನರು, ಯುವಕರು ಹಾಗೂ ಸಾಮಾಜಿಕ-ಸಾಂಸ್ಕೃತಿಕ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು. ನಟ ಪ್ರಕಾಶ್ ರಾಜ್ ಸೇರಿದಂತೆ ಹಲವರು ಪ್ರತಿಭಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಮತದಾರರ ಪಟ್ಟಿ ಪರಿಷ್ಕರಣೆಗೆ ವಿರೋಧ, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ನಿಷ್ಪಕ್ಷಪಾತ ಚುನಾವಣೆಯ ಬೇಡಿಕೆಗಳೊಂದಿಗೆ ನಡೆದ ಪ್ರತಿಭಟನೆಯಲ್ಲಿ, ಜ್ಞಾನೇಶ್ ಕುಮಾರ್ ರಾಜೀನಾಮೆಗೆ ದೀಪ್ಕೆ ಕರೆ ನೀಡಿದರು. ಇದೇ ವೇಳೆ 2029ರ ಲೋಕಸಭಾ ಚುನಾವಣೆಯಲ್ಲಿ ಸರ್ಕಾರ ಬದಲಾಗಲಿದೆ ಎಂದು ಅವರು ಭವಿಷ್ಯ ನುಡಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular