HomeKarnatakaಗುತ್ತಿಗೆ ವೈದ್ಯಾಧಿಕಾರಿಗಳನ್ನು ಕರ್ತವ್ಯದಿಂದ ತೆರವುಗೊಳಿಸದಂತೆ ಸೂಚನೆ

ಗುತ್ತಿಗೆ ವೈದ್ಯಾಧಿಕಾರಿಗಳನ್ನು ಕರ್ತವ್ಯದಿಂದ ತೆರವುಗೊಳಿಸದಂತೆ ಸೂಚನೆ

ಬೆಂಗಳೂರು- ರಾಜ್ಯದ ಆರೋಗ್ಯ ಇಲಾಖೆಯಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿರುವ ವೈದ್ಯಾಧಿಕಾರಿಗಳನ್ನು, ಅವರು ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಸ್ಥಳದಿಂದ ಯಾವುದೇ ಕಾರಣಕ್ಕೂ ತೆರವುಗೊಳಿಸಬಾರದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸೂಚಿಸಿದ್ದಾರೆ.

ಆರೋಗ್ಯ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ಕೆಲವೇ ದಿನಗಳಲ್ಲಿ ರಾಜ್ಯಾದ್ಯಂತ ಆರೋಗ್ಯ ಸೇವೆಗಳಲ್ಲಿ ಎದುರಾಗಿದ್ದ ವೈದ್ಯಕೀಯ ಸಿಬ್ಬಂದಿ ಕೊರತೆಯನ್ನು ನೀಗಿಸಲು 300ಕ್ಕೂ ಹೆಚ್ಚು ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿತ್ತು. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಗುತ್ತಿಗೆ ವೈದ್ಯಾಧಿಕಾರಿಗಳನ್ನು ನೇಮಕ ಮಾಡಿರುವುದು ಕರ್ನಾಟಕದ ಆರೋಗ್ಯ ಇಲಾಖೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳ ನಿರಂತರತೆಯನ್ನು ಕಾಯ್ದುಕೊಳ್ಳುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ಹಿನ್ನೆಲೆಯಲ್ಲಿ ಕಡ್ಡಾಯ ವೈದ್ಯಕೀಯ ಸೇವೆ (Compulsory Medical Services) ಅಡಿಯಲ್ಲಿ ವೈದ್ಯಾಧಿಕಾರಿಗಳನ್ನು, ಈಗಾಗಲೇ ಗುತ್ತಿಗೆ ವೈದ್ಯಾಧಿಕಾರಿಗಳು ಕಾರ್ಯನಿರ್ವಹಿಸುತ್ತಿರುವ ಸ್ಥಳಗಳಿಗೆ ನಿಯೋಜಿಸಿದರೂ, ಅಲ್ಲಿನ ಗುತ್ತಿಗೆ ವೈದ್ಯಾಧಿಕಾರಿಗಳನ್ನು ಯಾವುದೇ ಕಾರಣಕ್ಕೂ ತೆರವುಗೊಳಿಸಬಾರದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತು ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು (DHO) ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು. ಈಗಾಗಲೇ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ವೈದ್ಯಾಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಿಂದ ತೆರಳುವ ಅಗತ್ಯವಿಲ್ಲ ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.

ಒಂದು ವೇಳೆ ಗುತ್ತಿಗೆ ವೈದ್ಯಾಧಿಕಾರಿಗಳನ್ನು ಅವರು ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಿಂದ ತೆರವುಗೊಳಿಸಿರುವುದು ಅಥವಾ ಅವರ ಕರ್ತವ್ಯಕ್ಕೆ ಯಾವುದೇ ರೀತಿಯ ಅಡ್ಡಿಪಡಿಸಿರುವುದು ಕಂಡುಬಂದರೆ, ಸಂಬಂಧಪಟ್ಟ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಪಟ್ಟವರು ನೇರವಾಗಿ ಆರೋಗ್ಯ ಇಲಾಖೆಯ ಆಯುಕ್ತಾಲಯಕ್ಕೆ ಮಾಹಿತಿ ಸಲ್ಲಿಸಬೇಕು ಎಂದು ಸಚಿವ ಯು.ಟಿ. ಖಾದರ್ ಸೂಚಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular