ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಮೂವರು ಸಿಆರ್ಪಿಎಫ್ (CRPF) ಯೋಧರು ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಘಟನೆಯ ಬೆನ್ನಲ್ಲೇ ಭದ್ರತಾ ಪಡೆಗಳು ಉಗ್ರರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿವೆ.
ಬುಧವಾರ (ನವೆಂಬರ್ 11) ಕುಲ್ಗಾಮ್ ಜಿಲ್ಲೆಯಲ್ಲಿರುವ ಸಿಆರ್ಪಿಎಫ್ ಚೆಕ್ಪೋಸ್ಟ್ ಮೇಲೆ ಬೈಕ್ಗಳಲ್ಲಿ ಬಂದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಕರ್ತವ್ಯದಲ್ಲಿದ್ದ ಯೋಧರು ಗಾಯಗೊಂಡಿದ್ದಾರೆ.
ಉಗ್ರರ ದಾಳಿಗೆ ಯೋಧರಿಂದ ತಿರುಗೇಟು
ಉಗ್ರರು ಗುಂಡಿನ ದಾಳಿ ನಡೆಸುತ್ತಿದ್ದಂತೆ ಸಿಆರ್ಪಿಎಫ್ ಸಿಬ್ಬಂದಿ ಕೂಡ ಪ್ರತಿದಾಳಿ ನಡೆಸಿದ್ದಾರೆ. ತಕ್ಷಣವೇ ಹೆಚ್ಚುವರಿ ಭದ್ರತೆಗಾಗಿ ಕ್ವಿಕ್ ರಿಯಾಕ್ಷನ್ ಟೀಮ್ಗಳನ್ನು (QRT) ಸ್ಥಳಕ್ಕೆ ರವಾನಿಸಲಾಗಿದೆ.
ದಾಳಿ ನಡೆದ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ಉಗ್ರರ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.ದಾಳಿ ನಡೆಸಿದ ಉಗ್ರರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

