ಬೆಂಗಳೂರು: ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪಿಂಕ್ ಲೈನ್ನ ಮೊದಲ ಹಂತವನ್ನು ಉದ್ಘಾಟಿಸಲಿದ್ದಾರೆ. ಆದರೆ ಇದೇ ದಿನ ಸಿಎ (CA) ವಿದ್ಯಾರ್ಥಿಗಳಿಗೆ ಪರೀಕ್ಷೆ ನಿಗದಿಯಾಗಿರುವುದು ಇದೀಗ ಆತಂಕಕ್ಕೆ ಕಾರಣವಾಗಿದೆ.
ಉದ್ಘಾಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಂಚಾರ ನಿರ್ಬಂಧ ಹಾಗೂ ವಾಹನ ದಟ್ಟಣೆ ಉಂಟಾದರೆ ಪರೀಕ್ಷಾ ಕೇಂದ್ರಗಳಿಗೆ ತಲುಪುವುದು ಹೇಗೆ ಎಂಬ ಚಿಂತೆ ವಿದ್ಯಾರ್ಥಿಗಳನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ.
ನವೆಂಬರ್ 13ರಂದು ಮಧ್ಯಾಹ್ನ 1 ಗಂಟೆಗೆ ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನಾ ಕಾರ್ಯಕ್ರಮ ನಿಗದಿಯಾಗಿದೆ. ಅದೇ ದಿನ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಿಎ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಆಗಮನದ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುವ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ನಿರ್ಬಂಧ ವಿಧಿಸುವ ಸಾಧ್ಯತೆಯಿದೆ. ಇದರಿಂದ ಪರೀಕ್ಷಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳನ್ನು ತಲುಪಲು ತೊಂದರೆಯಾಗಬಹುದು ಎಂಬ ಆತಂಕ ಎದುರಾಗಿದೆ.
ಪರೀಕ್ಷಾರ್ಥಿಗಳಿಗೆ ತೊಂದರೆಯಾಗದಂತೆ ಪೊಲೀಸರಿಗೆ ಸೂಚನೆ
ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಕೃಷ್ಣ ಬೈರೇಗೌಡ, ಪ್ರಧಾನಿ ಕಚೇರಿಯಿಂದಲೇ ಕಾರ್ಯಕ್ರಮದ ವೇಳಾಪಟ್ಟಿ ನಿಗದಿಯಾಗಿರುವುದರಿಂದ ಅದನ್ನು ಬದಲಾಯಿಸುವುದು ಕಷ್ಟ ಎಂದು ತಿಳಿಸಿದ್ದಾರೆ. ಆದರೆ, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಪೊಲೀಸರಿಗೆ ಅಗತ್ಯ ಸೂಚನೆ ನೀಡಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಪರ್ಯಾಯ ಮಾರ್ಗಗಳನ್ನು ಒದಗಿಸುವ ಬಗ್ಗೆಯೂ ಪೊಲೀಸರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.
ಒಂದು ವೇಳೆ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರ ತಲುಪಲು ಹೆಚ್ಚಿನ ತೊಂದರೆಯಾಗುವ ಪರಿಸ್ಥಿತಿ ಎದುರಾದರೆ, ಈ ವಿಚಾರವನ್ನು ಪ್ರಧಾನಿ ಕಚೇರಿಯ ಗಮನಕ್ಕೆ ತಂದು ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಪಿಂಕ್ ಲೈನ್ ಮೊದಲ ಹಂತದಲ್ಲಿ 7.5 ಕಿ.ಮೀ. ಮಾರ್ಗ ಆರಂಭ
ನಮ್ಮ ಮೆಟ್ರೋ ಪಿಂಕ್ ಲೈನ್ನ ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಸುಮಾರು 7.5 ಕಿಲೋಮೀಟರ್ ಉದ್ದದ ಎಲಿವೇಟೆಡ್ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾಗಲಿದೆ.
ಈ ಮಾರ್ಗದ ಆರಂಭದೊಂದಿಗೆ ಬೆಂಗಳೂರಿನ ಮೆಟ್ರೋ ಜಾಲದ ಒಟ್ಟು ಉದ್ದ 103.6 ಕಿಲೋಮೀಟರ್ಗೆ ವಿಸ್ತರಣೆಯಾಗಲಿದೆ. ದೆಹಲಿ ಬಳಿಕ ದೇಶದ ಎರಡನೇ ಅತಿದೊಡ್ಡ ಮೆಟ್ರೋ ಜಾಲ ಎಂಬ ಹೆಗ್ಗಳಿಕೆಗೂ ಬೆಂಗಳೂರು ಪಾತ್ರವಾಗಲಿದೆ.ಇನ್ನು ಮೆಟ್ರೋ ಟಿಕೆಟ್ ದರ ಹೆಚ್ಚಳದ ಕುರಿತು ಸದ್ಯ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಒಟ್ಟಿನಲ್ಲಿ, ಮೆಟ್ರೋ ಉದ್ಘಾಟನೆಯ ಸಂಭ್ರಮದ ನಡುವೆ ಸಿಎ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಂಚಾರ ಸಮಸ್ಯೆಯಾಗದಂತೆ ಸರ್ಕಾರ ಯಾವ ರೀತಿಯ ವ್ಯವಸ್ಥೆ ಮಾಡಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ.

