HomeKarnatakaಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ: ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸಲು ಪ್ರಧಾನಿಗೆ ಪತ್ರ: ಸಿಎಂ ಡಿ.ಕೆ....

ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ: ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸಲು ಪ್ರಧಾನಿಗೆ ಪತ್ರ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸಿರುವ ತೀರ್ಮಾನವನ್ನು ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸುವ ಬಗ್ಗೆ ಪ್ರಧಾನಮಂತ್ರಿಗಳಿಗೆ ಪತ್ರ ಬರೆಯಲಾಗುವುದು. ಪ್ರಧಾನಮಂತ್ರಿಗಳ ಭೇಟಿ ಸಾಧ್ಯವಾದರೆ, ಈ ವಿಚಾರವಾಗಿ ಚರ್ಚೆ ಮಾಡಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಗಳ ಕುರಿತು ರಾಜ್ಯ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಶಾಸಕರು, ಸಚಿವರು, ವಿವಿಧ ನಿಗಮಗಳ ಅಧ್ಯಕ್ಷರನ್ನು ಒಳಗೊಂಡ ಸಭೆಯಲ್ಲಿ ಮೀಸಲಾತಿ ಹೆಚ್ಚಳ, ಒಳ ಮೀಸಲಾತಿ ವಿಚಾರವಾಗಿ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದ್ದು, ನಮ್ಮ ಅರ್ಜಿ ಸ್ವೀಕೃತಗೊಂಡಿದೆ. ಈ ಕಾನೂನು ಹೋರಾಟದಲ್ಲಿ ಯಾರು ರಾಜ್ಯದ ಪರವಾಗಿ ವಾದ ಮಾಡಬೇಕು ಎಂಬ ಬಗ್ಗೆ ಚರ್ಚಿಸಲಾಯಿತು. ಈ ಪ್ರಕರಣದ ಮೇಲ್ವಿಚಾರಣೆಗೆ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ, ಸಚಿವರಾದ ಕೆ.ಹೆಚ್.ಮುನಿಯಪ್ಪ ಹಾಗೂ ಸತೀಶ್ ಜಾರಕಿಹೊಳಿ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ನಮಗೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸವಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವಿಚಾರದಲ್ಲಿ ಹಿಂದೆ ಇದ್ದವರನ್ನು ದೂಷಿಸುವುದರಲ್ಲಿ ಅರ್ಥವಿಲ್ಲ. ಬೇರೆ ಕೆಲವು ರಾಜ್ಯಗಳಲ್ಲಿ ಈ ಬಗ್ಗೆ ತೀರ್ಮಾನವಾಗಿದ್ದು, ತಮಿಳುನಾಡಿನಲ್ಲಿ ಶೇ.69ರಷ್ಟು ಮೀಸಲಾತಿ ಇದೆ. ಶೇ.50ರ ಮೀಸಲಾತಿಗಿಂತ ನಾವು ಕೇವಲ ಶೇ.6ರಷ್ಟು ವಿಸ್ತರಣೆಗೆ ಮನವಿ ಮಾಡುತ್ತಿದ್ದೇವೆ. ನಾವು ಈಗಾಗಲೇ ಒಳಮೀಸಲಾತಿ ಸಮಸ್ಯೆಯನ್ನು ಬಗೆಹರಿಸಿದ್ದು, ಮುಂದಿನ ಬಜೆಟ್‌ ನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ಯಾವ ರೀತಿ ಕಾರ್ಯಕ್ರಮ ರೂಪಿಸಬೇಕು ಎಂದು ಈ ಸಮುದಾಯಗಳ ನಾಯಕರೊಂದಿಗೆ ಚರ್ಚಿಸಲಾಗಿದೆ. ಈ ವರ್ಗದ ಕಲ್ಯಾಣಕ್ಕೆ ಯಾವ ರೀತಿ ಹೊಸ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ತೀರ್ಮಾನಿಸಲು ವಿಷನ್ ಗ್ರೂಪ್ ಅನ್ನು ರಚಿಸಲಾಗುವುದು ಎಂದರು.

ಈ ವಿಚಾರಗಳ ಬಗ್ಗೆ ಡಾ.ಜಿ.ಪರಮೇಶ್ವರ ಅವರ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚಿಸಲಾಗಿದ್ದು, ನಾವು ಪ್ರಣಾಳಿಕೆಯಲ್ಲಿ ಘೋಷಿಸಿರುವ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಸಿದ್ಧತೆ ಮಾಡಲಾಗುತ್ತಿದೆ. ಇಷ್ಟು ವರ್ಷಗಳ ಕಾಲ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಮೂಲಕ ನೀಡಿರುವ ಅನುದಾನ ಯಾವ ರೀತಿ ಪರಿಣಾಮ ಬೀರಿದೆ ಎಂದು ಅಧ್ಯಯನ ಮಾಡಲು ಪ್ರತಿಷ್ಠಿತ ಸಂಸ್ಥೆಗಳಿಂದ ಸಾಮಾಜಿಕ ಆಡಿಟ್ ಮಾಡಿಸಲು ತೀರ್ಮಾನಿಸಲಾಗಿದೆ ಎಂದರು.

ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಮೂಲಕ 2025-26ನೇ ಸಾಲಿನಲ್ಲಿ ₹42,503 ಕೋಟಿ ಹಾಗೂ ಪ್ರಸಕ್ತ ಸಾಲಿನ ₹44,631 ಕೋಟಿಗಳನ್ನು 34 ಇಲಾಖೆಗಳ 451 ಯೋಜನೆಗಳಿಗೆ ಹಂಚಿಕೆ ಮಾಡಲಾಗಿದೆ. ನಮ್ಮ ಶಾಸಕರು ಹಾಗೂ ಸಚಿವರು ಹೊಸ ಯೋಜನೆಗಳ ಬಗ್ಗೆ ಸಲಹೆ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿ. ಪರಮೇಶ್ವರ ಅವರ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರೂ ಸೇರಿದಂತೆ ನಮ್ಮ ಎಸ್‌ಸಿ, ಎಸ್‌ಟಿ ಸಮುದಾಯಗಳ ಶಾಸಕರು ಚರ್ಚಿಸಿ, ಏನಾದರೂ ಬದಲಾವಣೆಗಳಿದ್ದರೆ ಆರ್ಥಿಕ ಇಲಾಖೆ ಜತೆಗೂಡಿ ನಮಗೆ ವರದಿ ನೀಡಲಿದ್ದಾರೆ ಎಂದರು.

ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯ ₹44,631 ಕೋಟಿ ಸರಿಯಾದ ರೀತಿಯಲ್ಲಿ ತಲುಪಬೇಕು ಎಂಬುದು ನಮ್ಮ ಸರ್ಕಾರದ ಚಿಂತನೆಯಾಗಿದ್ದು, ಇದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ. 2001ರಿಂದ 2025ರವರೆಗೆ 19,115 ಬ್ಯಾಕ್‌ಲಾಗ್ ಹುದ್ದೆಗಳು ಖಾಲಿ ಇದ್ದು, 17,793 ಹುದ್ದೆಗಳು ಭರ್ತಿಯಾಗಿವೆ. 1,574 ಹುದ್ದೆಗಳು ಬಾಕಿ ಇದ್ದು, ಅವುಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮಾವೇಶ ಮಾಡಲು ಸರ್ಕಾರ ತೀರ್ಮಾನಿಸಿದ್ದು, ನಮ್ಮ ನಾಯಕರು ಈ ಕಾರ್ಯಕ್ರಮ ಎಲ್ಲಿ ನಡೆಯಬೇಕು ಎಂಬುದರ ಬಗ್ಗೆ ನಿರ್ಧರಿಸಲಿದ್ದಾರೆ. ಇದು ಐಕ್ಯತಾ ಸಮಾವೇಶವಾಗಿದ್ದು, ನಾವು ಚುನಾವಣೆಗೂ ಮುನ್ನ ಏನು ಮಾತು ನೀಡಿದ್ದೆವು? ಏನೆಲ್ಲ ಈಡೇರಿಸಿದ್ದೇವೆ? ಎಂಬುದನ್ನು ಜನರಿಗೆ ತಿಳಿಸುವುದು ನಮ್ಮ ಕರ್ತವ್ಯ ಎಂದರು.

ಕೇಂದ್ರ ಪುರಸ್ಕೃತ ಯೋಜನೆಗಳಡಿ 2025-26ನೇ ಸಾಲಿನಲ್ಲಿ ಬಿಡುಗಡೆ ಮಾಡದೆ ಬಾಕಿ ಉಳಿಸಿರುವ ₹1,937 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಲಾಗುವುದು. ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದ ಕಾರಣ, ರಾಜ್ಯದ ಪಾಲನ್ನು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ಇದರಿಂದಾಗಿ ಹಲವು ಯೋಜನೆಗಳ ಅನುಷ್ಠಾನಕ್ಕೆ ಹಿನ್ನಡೆಯಾಗಿದೆ. ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದಿದ್ದರೂ, ರಾಜ್ಯದ ಪಾಲಿನ ಅನುದಾನವನ್ನು ಬಿಡುಗಡೆಗೊಳಿಸುವಂತೆ ಹಣಕಾಸು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

2025-26ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಡಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿಯಲ್ಲಿ ಒಟ್ಟು ₹10,011 ಕೋಟಿ ಹಂಚಿಕೆಯಾಗಿದ್ದು, ಕೇಂದ್ರದ ಪಾಲು ₹3,497 ಕೋಟಿ, ರಾಜ್ಯದ ಪಾಲು ₹6,514 ಕೋಟಿ ಇದೆ. ಕೇಂದ್ರದ ಪಾಲಿನಲ್ಲಿ ಕೇವಲ ₹1,560 ಕೋಟಿ ಬಿಡುಗಡೆಯಾಗಿದ್ದು, ₹1,937 ಕೋಟಿ ಬಿಡುಗಡೆಯಾಗಿಲ್ಲ. ಬಿಡುಗಡೆಯಾಗಿರುವ ಅನುದಾನದಲ್ಲಿ ₹1,541 ಕೋಟಿ ವೆಚ್ಚ ಮಾಡಲಾಗಿದೆ. ರಾಜ್ಯದ ಪಾಲಿನಲ್ಲಿ ₹5,628 ಕೋಟಿ ಬಿಡುಗಡೆ ಮಾಡಲಾಗಿದ್ದು, ₹5,611 ಕೋಟಿ ವೆಚ್ಚ ಮಾಡಲಾಗಿದೆ ಎಂದರು.

2025-26ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ ಅಡಿ ₹28,699 ಕೋಟಿ ಬಿಡುಗಡೆಯಾಗಿದ್ದು, ₹28,630 ಕೋಟಿ ವೆಚ್ಚವಾಗಿದೆ. ಟಿ.ಎಸ್.ಪಿ ಅಡಿ ₹10,962 ಕೋಟಿ ಬಿಡುಗಡೆಯಾಗಿದ್ದು, ₹10,926.94 ಕೋಟಿ ವೆಚ್ಚವಾಗಿದೆ. ಒಟ್ಟಾರೆ ₹39,661.99 ಕೋಟಿ ಬಿಡುಗಡೆಯಾಗಿದ್ದು, ₹39,557.43 ಕೋಟಿ ವೆಚ್ಚ ಅಂದರೆ ಶೇ. 99.74ರಷ್ಟು ಪ್ರಗತಿ ಸಾಧಿಸಲಾಗಿದೆ. ಈ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ₹7,911 ಕೋಟಿ, ಸಮಾಜ ಕಲ್ಯಾಣ ಇಲಾಖೆ ₹5,236 ಕೋಟಿ, ಇಂಧನ ಇಲಾಖೆ ₹5,231 ಕೋಟಿ, ಕಂದಾಯ ಇಲಾಖೆ ₹3,954 ಕೋಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ₹2,403 ಕೋಟಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ₹2,275 ಕೋಟಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ₹1,819 ಕೋಟಿ, ಸಾರಿಗೆ ಇಲಾಖೆ ₹1,814 ಕೋಟಿ ಹಾಗೂ ಶಾಲಾ ಶಿಕ್ಷಣ ಇಲಾಖೆ ₹1,202 ಕೋಟಿ ವೆಚ್ಚ ಮಾಡಿದೆ ಎಂದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ನಿಖರ ಸಂಖ್ಯೆಗೆ ಅನುಗುಣವಾಗಿ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಇ-ಆಡಳಿತ ಇಲಾಖೆಯಲ್ಲಿ ಲಭ್ಯವಿರುವ ದತ್ತಾಂಶಗಳನ್ನು ಆಧರಿಸಿ, ಫಲಾನುಭವಿಗಳ ಸಂಖ್ಯೆ ನಿಗದಿಪಡಿಸಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಫಲಾನುಭವಿಗಳ ವಾಸ್ತವಿಕ ಸಂಖ್ಯೆ ಆಧರಿಸಿ, ಈ ಯೋಜನೆಯಡಿ ಫಲಾನುಭವಿಗಳಿಗೆ ವಿವಿಧ ಸಾಮಾನ್ಯ ಯೋಜನೆಗಳ ಸೌಲಭ್ಯ ನೀಡಲು ಅನುದಾನ ನೀಡುವಂತೆ ಸೂಚಿಸಲಾಗಿದೆ ಎಂದರು.

ಎಲ್ಲ ಸಮುದಾಯಗಳಿಗೂ ಸಮಾನವಾಗಿ ಅನುದಾನ ಹಂಚಿಕೆಯಾಗಬೇಕು. ಪ್ರತಿ ಫಲಾನುಭವಿಯ ಫೋಟೋ ಸೇರಿದಂತೆ ಸಂಪೂರ್ಣ ವಿವರ ವೆಬ್‌ಸೈಟ್‌ನಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಯೋಜನೆಗಳ ಲಾಭ ಪ್ರತಿಯೊಬ್ಬರಿಗೂ ದೊರೆಯಬೇಕು. ಫಲಾನುಭವಿಗಳ ಫೋಟೋ ಹಾಗೂ ವಿಡಿಯೋ ದಾಖಲಾಗಬೇಕು. ಆ ಮೂಲಕ ಪಾರದರ್ಶಕತೆ ತಂದು, ಯಾವುದೇ ಕಾರಣಕ್ಕೂ ಯೋಜನೆಗಳ ದುರುಪಯೋಗವಾಗದಂತೆ ನೋಡಿಕೊಳ್ಳಬೇಕು. ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಅಡಿ ನಿಗದಿಪಡಿಸಲಾಗಿರುವ ಅನುದಾನವನ್ನು ಯಾವುದೇ ಕಾರಣಕ್ಕೂ ಕಚೇರಿ ವೆಚ್ಚಗಳಿಗೆ ಬಳಸಬಾರದು ಎಂದರು.

ಹಾಸ್ಟೆಲ್ ಹಾಗೂ ಶಾಲಾ ಸಮವಸ್ತ್ರಕ್ಕೆ ಹೊಸ ರೂಪ ನೀಡಲು ಶಿಕ್ಷಣ ಇಲಾಖೆಗೆ ಸೂಚಿಸಲಾಗಿದ್ದು, ಮುಂದಿನ ವರ್ಷದಿಂದ ಇವುಗಳನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ. ಖಾಸಗಿ ಶಾಲೆಗಳ ರೀತಿಯಲ್ಲಿ ಸರ್ಕಾರಿ ಶಾಲಾ ಮಕ್ಕಳು ಉತ್ತಮವಾದ ಸಮವಸ್ತ್ರವನ್ನು ಧರಿಸಲಿ. ಸದ್ಯದಲ್ಲೇ ಅಲ್ಪಸಂಖ್ಯಾತ ಶಾಸಕರು ಹಾಗೂ ಸಚಿವರ ಸಭೆ ಕರೆದು ಚರ್ಚೆ ಮಾಡಲಿದ್ದು, ಅದೇ ರೀತಿ ಒಕ್ಕಲಿಗ, ಲಿಂಗಾಯತ ಹಾಗೂ ಹಿಂದುಳಿದ ವರ್ಗದ ನಾಯಕರ ಜತೆಗೆ ಅಧಿವೇಶನಕ್ಕೂ ಮುಂಚಿತವಾಗಿಯೇ ಪ್ರತ್ಯೇಕವಾಗಿ ಚರ್ಚೆ ಮಾಡಲಾಗುವುದು ಎಂದರು.

ಮಂಡಳಿ ಸಭೆ

ನಿಧಿಗಳ ಸೂಕ್ತ ಬಳಕೆ ಹಾಗೂ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಚರ್ಚಿಸಲು, ವಿಕಾಸ ಸೌಧದಲ್ಲಿ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಮಂಡಳಿಯ (SCSP-TSP) ಸಭೆ ನಡೆಯಿತು.

ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಸಚಿವರಾದ ಕೆ.ಎಚ್. ​​ಮುನಿಯಪ್ಪ, ಸತೀಶ್ ಜಾರಕಿಹೊಳಿ, ಬಸವಂತಪ್ಪ, ಟಿ. ರಘುಮೂರ್ತಿ, ರುದ್ರಪ್ಪ ಲಮಾಣಿ ಮತ್ತು ಪಿ.ಎಂ. ನರೇಂದ್ರಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular