ರಾಜ್ಯದಲ್ಲಿ ಕೊರೊನಾ ಅಬ್ಬರಿಸುತ್ತಿದ್ದು, ಸೋಂಕಿತರ ಸಂಖ್ಯೆ 5000 ಸಮೀಪಕ್ಕೆ ಬಂದು ನಿಂತಿದೆ. ಅದರಲ್ಲೂ ಉಡುಪಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಆತಂಕಕಾರಿ ಮಟ್ಟದಲ್ಲಿ ಏರಿಕೆಯಾಗುತ್ತಿದೆ.
ಇದೇ ಪರಿಸ್ಥಿತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಸೋಂಕಿತರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳ ಮೇಲೆ ಅವಲಂಬಿಸುವುದು ಅನಿವಾರ್ಯವಾಗುತ್ತದೆ. ಹೀಗಾಗಿ ಕೊರೊನಾ ಚಿಕಿತ್ಸೆ ಕುರಿತಂತೆ ದರ ನಿಗದಿಪಡಿಸಲು ಖಾಸಗಿ ಆಸ್ಪತ್ರೆಗಳೊಂದಿಗೆ ಮಾತುಕತೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ.
ಖಾಸಗಿ ಆಸ್ಪತ್ರೆಗಳವರು ಈಗಾಗಲೇ ದರಪಟ್ಟಿ ನೀಡಿದ್ದಾರೆನ್ನಲಾಗಿದ್ದು, ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹೊಂದಿದವರಿಗೆ ಒಂದು ದರ, ಅದು ಇಲ್ಲದವರಿಗೆ ಮತ್ತೊಂದು ದರವನ್ನು ನಿಗದಿಪಡಿಸಲು ಕೋರಿದ್ದಾರೆ ಎನ್ನಲಾಗಿದೆ. ಆದರೆ ಪ್ರತಿಯೊಬ್ಬರೂ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹೊಂದಿಲ್ಲದೇ ಇರುವ ಕಾರಣ ಎಲ್ಲರಿಗೂ ಏಕರೂಪದ ದರ ನಿಗದಿಪಡಿಸಲು ಸರ್ಕಾರ ತೀರ್ಮಾನಿಸಿದೆ.
ಹೀಗಾಗಿ ಈ ಕುರಿತು ಮಾತನಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, ಮುಂದಿನ ದಿನಗಳಲ್ಲಿ ಅಗತ್ಯ ಬಿದ್ದರೆ ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳನ್ನು ಬಳಸಿಕೊಳ್ಳಲಿದ್ದೇವೆ. ಅಂತಹ ಸಂದರ್ಭದಲ್ಲಿ ಎಲ್ಲ ರೋಗಿಗಳಿಗೂ ಏಕರೂಪದ ದರ ನಿಗದಿಪಡಿಸುವ ಕುರಿತು ಕ್ರಮ ಕೈಗೊಳ್ಳಲಾಗುತ್ತಿದ್ದು, ಒಂದೊಮ್ಮೆ ಇದಕ್ಕೆ ಒಪ್ಪದಿದ್ದರೆ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ತಿಳಿಸಿದ್ದಾರೆ.