ಬೆಂಗಳೂರು: ಲಾಕ್ಡೌನ್ ಮರು ಜಾರಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಲಾಕ್ಡೌನ್ ಮತ್ತೆ ಜಾರಿ ಮಾಡುವ ಪ್ರಶ್ನೆ ನಮ್ಮ ಮುಂದಿಲ್ಲ. ಜೂನ್ 16 ಮತ್ತು 17ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಭೆ ನಡೆಸಲಿದ್ದಾರೆ ಎಂಬ ಹಿನ್ನೆಲೆಯಲ್ಲಿ ಇಂತಹ ಊಹಾಪೋಹಗಳು ಹರಡಿವೆ. ಪ್ರಧಾನಿ ಮೋದಿಯವರೊಂದಿಗೆ ಜೂನ್ 17 ರಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದ್ದಾರೆ.
ಕಲ್ಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಪರಿಸ್ಥಿತಿ ನಿಯಂತ್ರಿಸಲು ಮತ್ತು ಮುಂದಿನ ಯೋಜನೆಗಳ ಬಗ್ಗೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಚರ್ಚೆ ನಡೆಸಲಿದ್ದಾರೆ. ಇನ್ನು ಮುಂದೆ ಲಾಕ್ಡೌನ್ ಇರುವುದಿಲ್ಲ ಎಂದು ಹೇಳಿದ್ದಾರೆ.
ಕೊರೋನಾ ಪ್ರಕರಣಗಳ ಸಂಖ್ಯೆ ತ್ವರಿತಗತಿಯಲ್ಲಿ ಏರಿಕೆಯಾಗುತ್ತಿರುವ ಕಾರಣ ಮತ್ತೊಮ್ಮೆ ಲಾಕ್ಡೌನ್ ಜಾರಿ ಮಾಡುವ ಸಾಧ್ಯತೆ ಇದೆ ಎನ್ನುವ ಉಹಾಪೋಹಗಳು ಹರಡಿವೆ.
ಈ ಸಂದರ್ಭದಲ್ಲಿ ಸಚಿವ ಸುಧಾಕರ್ ಪ್ರತಿಕ್ರಿಯೆ ನೀಡಿ, ಅಂತಹ ಯಾವುದೇ ಪ್ರಶ್ನೆ ಇಲ್ಲ. ಆಗಸ್ಟ್ ನಲ್ಲಿ ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಇನ್ನಷ್ಟು ಹೆಚ್ಚಾಗಲಿದೆ ಎಂದು ತಜ್ಞರು ವರದಿ ನೀಡಿದ್ದು ಸರ್ಕಾರ ಈ ನಿಟ್ಟಿನಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.