ನೆರೆಯ ಚೀನಾ ದೇಶವು ಗಡಿ ತಂಟೆ ಮಾಡುತ್ತಿರುವ ಸಂದರ್ಭದಲ್ಲಿ ಆಡಳಿತ ಪಕ್ಷ ಬಿಜೆಪಿಯು ಸರ್ವಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಶುಕ್ರವಾರ ಸರ್ವಪಕ್ಷ ಸಭೆ ಕರೆದಿದೆ.
ಪ್ರಧಾನಿ ಮೋದಿ 15ಕ್ಕೂ ಹೆಚ್ಚು ರಾಜಕೀಯ ಪಕ್ಷಗಳ ಮುಖಂಡರನ್ನು ಸಭೆಗೆ ಆಹ್ವಾನಿಸಿದ್ದಾರೆ. ಭಾರತ ಮತ್ತು ಚೀನಾದ ನಡುವಿನ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ಬಗ್ಗೆ ಸಭೆ ಚರ್ಚಿಸಲಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಎಲ್ಲ ರಾಜಕೀಯ ಪಕ್ಷಗಳ ಮುಖ್ಯಸ್ಥರಿಗೆ ಕರೆಮಾಡಿ ಸಭೆಯ ಉದ್ದೇಶದ ಬಗ್ಗೆ ತಿಳಿಸಿದ್ದಾರೆ.
ಕಾಂಗ್ರೆಸ್ ನಿಂದ ಸೋನಿಯಾಗಾಂಧಿ, ಡಿಎಂಕೆ ಮುಖ್ಯಸ್ಥ ಸ್ಟಾಲಿನ್, ಟಿಟಿಡಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ವೈಎಸ್ಸಾರ್ ಪ್ರತಿನಿಧಿಸುವ ಜಗನ್ಮೋಹನ್ ರೆಡ್ಡಿ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಬಿಹಾರ ಸಿಎಂ ನಿತೀಶ್ ಕುಮಾರ್, ಸಿಪಿಐ ನಾಯಕ ಡಿ. ರಾಜ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯಚೂರಿ, ಒಡಿಶಾ ಸಿಎಂ ನವೀನ್ ಪಟ್ನಾಯಕ್, ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ಜೆಎಂಎಂ ನ ಹೇಮಂತ್ ಸೊರೇನ್, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಇದೇ ವೇಳೆ ಸರ್ವಪಕ್ಷ ಸಭೆಗೆ ತಮ್ಮನ್ನು ಆಹ್ವಾನಿಸಿಲ್ಲ ಎಂದು ಆಮ್ ಆದ್ಮಿ ಪಕ್ಷ ಮತ್ತು ಆರ್ಜೆಡಿ ತಗಾದೆ ತೆಗೆದಿದೆ. ಆದರೆ ಐದಕ್ಕೂ ಹೆಚ್ಚು ಸಂಸದರನ್ನು ಹೊಂದಿರುವ ರಾಜಕೀಯ ಪಕ್ಷಗಳನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಎಎಪಿ ನಾಲ್ಕು ಸಂಸದರನ್ನು ಹೊಂದಿದೆ.