ದೇಶದಲ್ಲಿ ವಕ್ಕರಿಸಿಕೊಂಡಿರುವ ಕೊರೊನಾ ಮಹಾಮಾರಿ ಈಗಾಗಲೇ 13 ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದ್ದು, 4ಲಕ್ಷಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದಾರೆ. ಇದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದರೂ ಸಹ ಸೋಂಕು ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ.
ಹೀಗಾಗಿ ಕಳೆದ ಮೂರು ತಿಂಗಳಿಗೂ ಅಧಿಕ ಕಾಲದಿಂದ ಶಾಲಾ -ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಮುಂದೂಡಿಕೆಯಾಗಿದ್ದ ಪರೀಕ್ಷೆಗಳನ್ನು ಅನಿವಾರ್ಯ ಸಂದರ್ಭದಲ್ಲಿ ಮಾತ್ರ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆಯನ್ನು ಈಗಾಗಲೇ ನಡೆಸಲಾಗಿದ್ದು, ಜೂನ್ 25ರಿಂದ 10ನೇ ತರಗತಿ ಪರೀಕ್ಷೆಗಳು ನಡೆಯಲಿವೆ.
ಹೀಗಾಗಿ ಪರೀಕ್ಷೆಗಳು ಮುಗಿದ ಬಳಿಕ ಶಾಲಾ – ಕಾಲೇಜುಗಳು ಆರಂಭವಾಗಬಹುದೆಂಬ ಮಾತುಗಳು ಕೇಳಿ ಬರುತ್ತಿತ್ತು. ಆದರೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣ ಸದ್ಯಕ್ಕೆ ಶಾಲಾ – ಕಾಲೇಜುಗಳನ್ನು ಆರಂಭಿಸುವ ಚಿಂತನೆಯನ್ನು ಸರ್ಕಾರ ಹೊಂದಿಲ್ಲವೆಂದು ಹೇಳಲಾಗಿದೆ.
ಪೋಷಕರ ಅಭಿಪ್ರಾಯಗಳನ್ನು ಸಹ ಸಂಗ್ರಹಿಸಲಾಗಿದ್ದು, ಈ ಸಂದರ್ಭದಲ್ಲಿ ಶೇಕಡ 80 ರಷ್ಟು ಪೋಷಕರು ಶಾಲಾ – ಕಾಲೇಜು ಆರಂಭಿಸುವ ಕುರಿತು ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆನ್ನಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಬರುವವರೆಗೆ ಅಥವಾ ಲಸಿಕೆ ಲಭ್ಯವಾಗುವವರೆಗೆ ಶಾಲಾ – ಕಾಲೇಜು ಆರಂಭ ಬೇಡ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎನ್ನಲಾಗಿದೆ.
ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಶಾಲಾ – ಕಾಲೇಜುಗಳನ್ನು ಆರಂಭಿಸುವುದು ಬೇಡ ಎಂಬ ತೀರ್ಮಾನಕ್ಕೆ ರಾಜ್ಯ ಸರ್ಕಾರ ಬಂದಿದೆ ಎನ್ನಲಾಗಿದ್ದು, ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ನಿರ್ಧಾರ ಕೈಗೊಳ್ಳಲು ಚಿಂತಿಸಲಾಗಿದೆ. ಕೆಲವೊಂದು ಮೂಲಗಳ ಪ್ರಕಾರ ಸೆಪ್ಟೆಂಬರ್ ಬಳಿಕವೇ ಶಾಲಾ – ಕಾಲೇಜು ಆರಂಭಕ್ಕೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.