ಬೆಂಗಳೂರು: ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಇಂಗ್ಲೀಷ್ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ವದಂತಿ ಹರಡಿದೆ.
ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಇಲಾಖೆ ಸಚಿವ ಎಸ್. ಸುರೇಶ್ ಕುಮಾರ್, ಇಂಗ್ಲೀಷ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಫೇಕ್ ಎಂದು ಸ್ಪಷ್ಟನೆ ನೀಡಿದ್ದಾರೆ. ಜಾಲತಾಣದಲ್ಲಿ ಇಂತಹ ಸುದ್ದಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಕಿಡಿಗೇಡಿಗಳ ವಿರುದ್ಧ ಸೈಬರ್ ಠಾಣೆಗೆ ದೂರು ನೀಡಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇಂತಹ ವದಂತಿಗಳಿಗೆ ಪೋಷಕರು, ವಿದ್ಯಾರ್ಥಿಗಳು ಕಿವಿಕೊಡಬೇಡಿ. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಬರೆಯಿರಿ ಎಂದು ತಿಳಿಸಿದ್ದಾರೆ.