ಬೆಂಗಳೂರು: ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವುದು ಕೋಲಾರ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ.
ಕರ್ತವ್ಯ ನಿರತ ತಹಶೀಲ್ದಾರ್ ಹತ್ಯೆ ಮಾಡಿರುವುದನ್ನು ಸರ್ಕಾರಿ ನೌಕರರ ಸಂಘ ತೀವ್ರವಾಗಿ ಖಂಡಿಸಿದ್ದು, ಇಂದು ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲಾಗುವುದು.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ದೊಡ್ಡ ಕಲವಂಚಿ ಗ್ರಾಮದಲ್ಲಿ ಜಮೀನು ಸರ್ವೆಗೆ ತೆರಳಿದ್ದ ವೇಳೆ ನಿವೃತ್ತ ಶಿಕ್ಷಕ ವೆಂಕಟಾಚಲಪತಿ ಎಂಬಾತ ಎದೆಗೆ ಚಾಕುವಿನಿಂದ ಇರಿದು ತಹಶೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದ್ದು, ವೆಂಕಟಾಪತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ತಹಶೀಲ್ದಾರ್ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದು, 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವುದು. ಅವರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ತಿಳಿಸಿದ್ದಾರೆ.